ಶಾಸಕ ಯಶ್ಪಾಲ್ ಸುವರ್ಣ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಜು.31ರಂದು ಪ್ರತಿಭಟನೆ: ಅಶೋಕ್ ಕೊಡವೂರು

Update: 2026-07-30 21:00 IST

ಉಡುಪಿ, ಜು.30: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಉಡುಪಿ ಶಾಸಕ ಯಶಪಾಲ್ ಸುವರ್ಣ ಬಹಿ ರಂಗ ಸಭೆಯಲ್ಲಿ ನೀಡಿರುವ ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿ ಜುಲೈ 31ರಂದು ಉಡುಪಿ ಜಟ್ಕಾ ಸ್ಟ್ಯಾಂಡ್ ಬಳಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ.

ಉಡುಪಿಯ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪ್ರತಿಭಟನೆಯ ವೇಳೆ ಗೌರವಯುತ ಸ್ಥಾನದಲ್ಲಿರುವ ಜನಪ್ರತಿನಿಧಿಯಾಗಿ ಶಾಸಕ ಯಶಪಾಲ್ ಸುವರ್ಣ ಅವರು ಬಳಸಿರುವ ಕಳಪೆ ಹಾಗೂ ಆಕ್ಷೇಪಾರ್ಹ ಭಾಷೆ ಖಂಡನೀಯವಾಗಿದೆ. ಸಾರ್ವಜನಿಕ ಜೀವನದಲ್ಲಿರುವ ಜನಪ್ರತಿನಿಧಿಗಳು ಜವಾಬ್ದಾರಿ ಯುತವಾಗಿ ನಡೆದುಕೊಳ್ಳಬೇಕು ಎಂದು ಹೇಳಿದರು.

ಪ್ರಜಾಪ್ರಭುತ್ವದ ಮೌಲ್ಯ ಹಾಗೂ ಸೌಜನ್ಯದ ರಾಜಕೀಯವನ್ನು ಕಾಪಾಡುವ ಉದ್ದೇಶದಿಂದ ಕಾಂಗ್ರೆಸ್ ವತಿಯಿಂದ ನಾಳೆ ಬೆಳಗ್ಗೆ 10ಗಂಟೆಗೆ ಉಡುಪಿ ಬಸ್ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ. ಈ ಪ್ರತಿಭಟನೆ ಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಸುಧೀರ್‌ಕುಮಾರ್ ಮರೋಳಿ ಹಾಗೂ ನಿಕೇತ್‌ರಾಜ್ ಮೌರ್ಯ ಅವರು ಪ್ರಮುಖ ಭಾಷಣ ಕಾರರಾಗಿ ಭಾಗವಹಿಸಲಿದ್ದಾರೆ ಎಂದರು.

ಪಕ್ಷದ ವಿವಿಧ ಬ್ಲಾಕ್‌ಗಳ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆ ಯಲ್ಲಿ ಭಾಗವಹಿಸುವಂತೆ ಕೊಡವೂರು ಕರೆ ನೀಡಿದರು.

ಯಶ್ಪಾಲ್‌ರನ್ನು ಬಂಧಿಸಿ: ಗಲಭೆಗೆ ಪ್ರಚೋದನೆ ನೀಡುವಂತಹ ಹೇಳಿಕೆ ನೀಡಿರುವ ಶಾಸಕ ಯಶ್‌ಪಾಲ್ ಸುವರ್ಣ ಅವರನ್ನು ತಕ್ಷಣ ಬಂಧಿಸಬೇಕು ಎಂದು ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಆಗ್ರಹಿಸಿದರು.

ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆಯ ಶಾಂತಿ ಮತ್ತು ಸೌಹಾ ರ್ದಕ್ಕೆ ಧಕ್ಕೆಯಾಗುವಂತಹ ಹೇಳಿಕೆಗಳು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ. ಜನಪ್ರತಿನಿಧಿ ಯಾದವರು ಸಮಾಜದಲ್ಲಿ ಶಾಂತಿ, ಸೌಹಾರ್ದ ಮತ್ತು ಅಭಿವೃದ್ಧಿಯನ್ನು ಉತ್ತೇಜಿಸಬೇಕಾದ ಹೊಣೆಗಾರಿಕೆ ಹೊಂದಿರುತ್ತಾರೆ. ಆದರೆ ಶಾಸಕ ಯಶಪಾಲ್ ಸುವರ್ಣ ಜನರ ನಡುವೆ ಸಂಘರ್ಷ ಉಂಟು ಮಾಡುವ ಹೇಳಿಕೆಗಳನ್ನು ನೀಡುವ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದವರು ಆರೋಪಿಸಿದರು.

ಇಂತಹ ನಡೆಯನ್ನು ಜಿಲ್ಲೆಯ ಜನರು ಎಂದಿಗೂ ಕ್ಷಮಿಸುವುದಿಲ್ಲ. ಮುಂದಿನ ದಿನಗಳಲ್ಲಿ ಜನರೇ ಅವರಿಗೆ ತಕ್ಕ ಉತ್ತರ ನೀಡಲಿದ್ದು, ಪ್ರಜಾಪ್ರಭುತ್ವದ ಮೂಲಕ ಸೂಕ್ತ ಪಾಠ ಕಲಿಸಲಿದ್ದಾರೆ. ಈ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಕಾನೂನು ಪ್ರಕಾರ ತ್ವರಿತ ಕ್ರಮ ಕೈಗೊಂಡು, ಶಾಂತಿ ಕದಡುವಂತಹ ಹೇಳಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಎಂದು ಪ್ರಸಾದ್ ರಾಜ್ ಕಾಂಚನ್ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಕೆ.ಜಯಪ್ರಕಾಶ್ ಹೆಗ್ಡೆ, ಕಿಶನ್ ಹೆಗ್ಡೆ ಕೊಳ್ಳೆಬೈಲ್, ಜ್ಯೋತಿ ಹೆಬ್ಬಾರ್, ಹರೀಶ್ ಕಿಣಿ ಅಲೆವೂರು, ರಮೇಶ್ ಕಾಂಚನ್ ಹಾಗೂ ಪ್ರಶಾಂತ್ ಜತ್ತನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News