ಉಡುಪಿ, ಸೆ.12: ಕರಾವಳಿ ಮತ್ತು ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕದ ಸಂಪರ್ಕ ಸೇತು ಆಗಿರುವ ರಾಷ್ಟ್ರೀಯ ಹೆದ್ದಾರಿ 169ಎಯಲ್ಲಿ ಆಗುಂಬೆ ಘಾಟಿಯ ಆಯ್ದ ಭಾಗಗಳಲ್ಲಿ ಕಾಂಕ್ರೀಟ್ ತಡೆಗೋಡೆ ಸಹಿತ ಆಗುಂಬೆಯಿಂದ ಹೆಬ್ರಿ ಪೇಟೆ ತನಕ ರಸ್ತೆ ಅಭಿವೃದ್ಧಿಗೆ ಹಾಗೂ ಪರ್ಕಳದಿಂದ ಕರಾವಳಿ ಜಂಕ್ಷನ್‌ವರೆಗೆ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿಗಾಗಿ ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವತಿಯಿಂದ 42.75 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ.

ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿ ಸೇರಿದಂತೆ ಕೆಲವೊಂದು ತಿರುವುಗಳಲ್ಲಿ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಸದರಿ ರಸ್ತೆ ಅಭಿವೃದ್ಧಿಗೆ ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಅದರಂತೆ ಕೇಂದ್ರ ಸರ್ಕಾರವು ರಾಷ್ಟ್ರೀಯ ಹೆದ್ದಾರಿ ವತಿಯಿಂದ 42.75 ಕೋಟಿ ರೂ.ಅನುದಾನ ಬಿಡುಗಡೆ ಮಾಡಿದ್ದು, ಅಭಿವೃದ್ಧಿ ಕಾಮಗಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಕ್ಷಣದಿಂದಲೇ ಕೈಗೊಳ್ಳಲಿದೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.

ಅನುದಾನ ಬಿಡುಗಡೆಗೆ ಕ್ರಮವಹಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅಭಿನಂದನೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor