ಎಸ್‌ಐಆರ್: ಉಡುಪಿ ಜಿಲ್ಲೆಯ 437 ಮತಗಟ್ಟೆಗಳಲ್ಲಿ ಶೇ.100 ಡಿಜಿಟಲೀಕರಣ

Update: 2026-07-28 20:37 IST

ಉಡುಪಿ, ಜು.26: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆದಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಐಆರ್-2026) ಪ್ರಕ್ರಿಯೆಯಲ್ಲಿ ಜಿಲ್ಲೆಯ ಒಟ್ಟು 437 ಮತಗಟ್ಟೆಗಳಲ್ಲಿ ಶೇ.100ರಷ್ಟು ಡಿಜಿಟಲೀಕರಣ ಹಾಗೂ ಎಎಸ್‌ಡಿಡಿ, ಡಿಎಸ್‌ಇ ಹಾಗೂ ಪಿಎಸ್‌ಇ ಪರಿಶೀಲನೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.

ಮತದಾರರು ಹಿಂದಿರುಗಿಸಿದ ಗಣತಿ ನಮೂನೆಗಳ ಡಿಜಿಟಲೀಕರಣ ಕಾರ್ಯ ಭರದಿಂದ ಸಾಗಿದ್ದು, ಮಂಗಳವಾರ ಸಂಜೆಯವರೆಗೆ ಒಟ್ಟು ಮತದಾರರ ಪೈಕಿ ಶೇ.92ರಷ್ಟು ಮಂದಿಯ ಗಣತಿ ನಮೂನೆಗಳ ಡಿಜಿಟಲೀಕರಣ ಪೂರ್ಣ ಗೊಂಡಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯ ಒಟ್ಟು 10,63,876 ಮಂದಿ ಮತದಾರರಿಗೆ ಬಿಎಲ್‌ಒಗಳು ಗಣತಿ ನಮೂನೆ (ಎನ್ಯೂಮರೇಶನ್ ಫಾರ್ಮ್) ಗಳನ್ನು ತಲುಪಿಸಿದ್ದು, ಇವರಲ್ಲಿ 9,79,831 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಗೊಳಿಸಲಾಗಿದೆ ಎಂದೂ ಅವರು ಹೇಳಿದ್ದಾರೆ. ಇಂದು ಸಂಜೆಯವರೆಗೆ ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿಗಳ ಹೇಳಿಕೆ ತಿಳಿಸಿದೆ.

ಜಿಲ್ಲೆಯಲ್ಲಿ ಈವರೆಗೆ 18,919 ಮಂದಿ ಮತದಾರರು ಮೃತಪಟ್ಟಿರುವುದು ಮನೆ ಭೇಟಿಯ ವೇಳೆ ಗೊತ್ತಾಗಿದೆ. ಅದೇ ರೀತಿ ಜಿಲ್ಲೆಯಲ್ಲಿ 20,080 ಮಂದಿ ಮತದಾರರು ಖಾಯಂ ಆಗಿ ಬೇರೆ ಕಡೆಗೆ ವರ್ಗಾವಣೆ ಗೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 7052 ಮಂದಿ ಮತದಾರರು ಆನ್‌ಲೈನ್ ಮೂಲಕ ಸ್ವದಾಖಲಾತಿಯನ್ನು ಮಾಡಿದ್ದಾರೆ ಎಂದೂ ಜಿಲ್ಲಾಧಿಕಾರಿಗಳ ಹೇಳಿಕೆ ತಿಳಿಸಿದೆ.

ಶೇ.100ರಷ್ಟು ಪೂರ್ಣಗೊಂಡ ಮತಗಟ್ಟೆಗಳ ಪಟ್ಟಿಯನ್ನು ಪರಿಶೀಲಿಸಿ, ನಿರ್ದಿಷ್ಟ ಮತಗಟ್ಟೆಗಳ ಪಟ್ಟಿಯಲ್ಲಿ ಯಾವುದೇ ಹೊಸ ಸೇರ್ಪಡೆಗಳು ಅಥವಾ ಬದಲಾವಣೆಗಳಿದ್ದಲ್ಲಿ ಸಂಬಂಧಪಟ್ಟ ಬೂತ್‌ಮಟ್ಟದ ಅಧಿಕಾರಿಗೆ (ಬಿಎಲ್‌ಒ) ಹಾಗೂ ಮತದಾರರ ನೋಂದಣಾಧಿಕಾರಿಗಳ (ಇಆರ್‌ಒ) ಗಮನಕ್ಕೆ ತರುವಂತೆ ಕೋರಲಾಗಿದೆ. ಮನೆಮನೆಗೆ ತೆರಳಿ ಗಣತಿ ನಮೂನೆ ಗಳನ್ನು ಸಂಗ್ರಹಿಸುವ ಪ್ರಕ್ರಿಯೆ ಆಗಸ್ಟ್ 8ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳ ಹೇಳಿಕೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News