×
Ad

ಸಿಇಟಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 8089 ವಿದ್ಯಾರ್ಥಿಗಳು ನೊಂದಣಿ: ಡಿಸಿ ವಿದ್ಯಾಕುಮಾರಿ

Update: 2025-04-07 20:12 IST

ಉಡುಪಿ, ಎ.7: ವೈದ್ಯಕೀಯವನ್ನು ಹೊರತುಪಡಿಸಿ ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶವನ್ನು ಕಲ್ಪಿಸುವ ಈ ಬಾರಿಯ ಸಾಮಾನ್ಯ ಪ್ರವೇಶ ಪರೀಕ್ಷೆಗಳು (ಸಿಇಟಿ) ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 8089 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೊಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕೇಸ್ವಾನ್ ವಿಡಿಯೋ ಸಭಾಂಗಣದಲ್ಲಿ ಸೋಮವಾರ ನಡೆದ 2025ನೇ ಸಾಲಿನ ಸಿಇಟಿ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳು ಎಪ್ರಿಲ್ 16 ಮತ್ತು 17ರಂದು ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 8089 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ ಉಡುಪಿಯಲ್ಲಿ 12, ಕಾರ್ಕಳ 5 ಹಾಗೂ ಕುಂದಾಪುರದಲ್ಲಿ 6 ಸೇರಿದಂತೆ ಒಟ್ಟು 23 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ಸಮಸ್ಯೆ, ಗೊಂದಲಗಳು ಉಂಟಾಗದಂತೆ ಎಚ್ಚರಿಕೆ ಯನ್ನು ವಹಿಸಬೇಕು ಎಂದವರು ಎಲ್ಲರಿಗೂ ಸೂಚನೆಗಳನ್ನು ನೀಡಿದರು.

ಸಿಇಟಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಜಿಲ್ಲಾ ಖಜಾನೆಯಲ್ಲಿ ಸೂಕ್ತ ಪೊಲೀಸ್ ಭದ್ರತೆಯಲ್ಲಿ ಇಡುವಂತೆ ತಿಳಿಸಿದ ಅವರು, ಖಜಾನೆಯಲ್ಲಿ ಸಿಸಿಟಿವಿ ವ್ಯವಸ್ಥೆ ಅಳವಡಿಸುವಂತೆ ಹಾಗೂ ಪ್ರಶ್ನೆ ಪತ್ರಿಕೆ ವಿತರಣೆಗೆ ನೇಮಿಸಿರುವ ತಾಲೂಕುಗಳ ತಹಶೀಲ್ದಾರ್‌ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಪ್ರಾಂಶುಪಾಲರನ್ನು ಒಳಗೊಂಡ ತ್ರಿಸದಸ್ಯ ಸಮಿತಿ ಸದಸ್ಯರ ತಂಡಗಳು ಪೊಲೀಸ್ ಭದ್ರತೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ಸರಿಯಾಗಿ ತಲುಪಿಸುವಂತೆ ನಿರ್ದೇಶನಗಳನ್ನು ನೀಡಿದರು.

ಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಯಾವುದೇ ರೀತಿಯ ವಾಚ್‌ ಗಳು, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆಗಳು ಆರಂಭವಾಗುವ ಸಮಯಕ್ಕಿಂತ ಸಾಕಷ್ಟು ಮುಂಚಿತ ವಾಗಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಹಾಜರಿರುವಂತೆ ಹಾಗೂ ತಮ್ಮ ಪರೀಕ್ಷಾ ಪ್ರವೇಶ ಪತ್ರದ ಜೊತೆ ಯಾವುದಾದರೊಂದು ಗುರುತಿನ ಚೀಟಿಯನ್ನು (ಕಾಲೇಜಿನ ಗುರುತಿನ ಚೀಟಿ, ಬಸ್‌ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್ ಸೇರಿದಂತೆ ಪರೀಕ್ಷಾ ಪ್ರಾಧಿಕಾರ ಸೂಚಿಸಿರುವ ಗುರುತಿನ ಚೀಟಿ) ತರುವಂತೆ ತಿಳಿಸಿದರು.

ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳು ತಮ್ಮ ಕರ್ತವ್ಯಕ್ಕೆ ಗೈರು ಹಾಜರಾಗದಂತೆ ಅಥವಾ ಬೇರೆಯವರನ್ನು ನಿಯೋಜಿಸದಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಗೊಂದಲ ಉಂಟಾಗದಂತೆ, ಪರೀಕ್ಷೆಯನ್ನು ಸಮರ್ಥವಾಗಿ ಮತ್ತು ಅತ್ಯಂತ ಸುವ್ಯವಸ್ಥಿತವಾಗಿ ನಡೆಸುವಂತೆ ನಿರ್ದೇಶನ ನೀಡಿದರು.

ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದ ಅವರು, ಪರೀಕ್ಷಾ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಪ್ರತೀ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರನ್ನು, ಕೊಠಡಿ ಮೇಲ್ವಿಚಾರಕರನ್ನು ನೇಮಿಸಲಾಗುವುದು ಎಂದ ಡಾ.ವಿದ್ಯಾಕುಮಾರಿ, ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಸಿಸಿ ಕೆಮರಾಗಳನ್ನು ಅಳವಡಿಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ. ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಿ, ಸೂಕ್ತ ಪೊಲೀಸ್ ಭದ್ರತೆ ನೀಡುವಂತೆ ಪೊಲೀಸ್ ಇಲಾಖೆಗೆ ಹಾಗೂ ಮುಂಜಾಗ್ರತೆ ಯಾಗಿ ಎಲ್ಲಾ ಕೇಂದ್ರಗಳಿಗೆ ಆರೋಗ್ಯ ಸಹಾಯಕರನ್ನು ನೇಮಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಗಡಿಯಾರದ ವ್ಯವಸ್ಥೆಯನ್ನು ಮಾಡಬೇಕು. ಕಡುಬೇಸಿಗೆ ಕಾಲವಾದ ಕಾರಣ, ಪ್ರತಿ ಕೊಠಡಿಯಲ್ಲೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗದಂತೆ ಎಚ್ಚರವಹಿಸಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶ್ರೀನಿವಾಸ್ ರಾವ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ, ವಿವಿಧ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತಗೊಂಡಿರುವ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.





 


 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News