ಆ.1ರಂದು ಡಾ. ಮಹಾಂತ್ ಶಿವಯೋಗಿ ಸ್ವಾಮೀಜಿ ಜನ್ಮದಿನದಂಗವಾಗಿ ವ್ಯಸನ ಮುಕ್ತ ದಿನಾಚರಣೆ
ಉಡುಪಿ ಜು.31: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಇಲಾಖೆ, ನೇತ್ರಜ್ಯೋತಿ ಕಾಲೇಜು, ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಮಹಾಂತ್ ಶಿವಯೋಗಿ ಸ್ವಾಮೀಜಿ ಅವರ ಜನ್ಮ ದಿನದ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಆ.1ರಂದು ಬೆಳಗ್ಗೆ 10:30ಕ್ಕೆ ನಗರದ ನೇತ್ರಜ್ಯೋತಿ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಫರೀದ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಜಿಲ್ಲೆಯ ಶಾಸಕರು, ವಿವಿಧ ಮಂಡಳಿಗಳ ಅಧ್ಯಕ್ಷರು, ಗಣ್ಯರು ಉಪಸ್ಥಿತರಿರುವರು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಹೆಚ್ ಅಶೋಕ್, ನೇತ್ರಜ್ಯೋತಿ ಕಾಲೇಜಿನ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗೌರಿ ಪ್ರಭು ಭಾಗವಹಿಸುವ ಕಾರ್ಯಕ್ರಮದಲ್ಲಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ಮನೋವೈದ್ಯ ಡಾ.ಪಿ.ವಿ.ಭಂಡಾರಿ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.