×
Ad

ಸೆ.15ರೊಳಗೆ ಇಂದ್ರಾಳಿ ಸೇತುವೆ ಕಾಮಗಾರಿ ಪೂರ್ಣ: ಕೋಟ ಭರವಸೆ

Update: 2024-06-29 19:09 IST

ಉಡುಪಿ, ಜೂ.29: ಕಳೆದ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿಯನ್ನು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಇಂದ್ರಾಳಿ ಕಾಮಗಾರಿ ಕೆಲಸ ಸ್ಥಗಿತಗೊಂಡು ನಾಲ್ಕು ವರ್ಷಗಳಾಗಿವೆ. ಇದರಿಂದ ಈ ಭಾಗದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಕುರಿತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಹಾಗೂ ಮೆಸ್ಕಾಂ ಅಧಿಕಾರಿಗಳ ಜೊತೆ ಸಮಾಲೋಚನೆ ಮಾಡಿದ್ದೇನೆ ಎಂದು ಹೇಳಿದರು.

ಇಲ್ಲಿನ ವಿದ್ಯುತ್ ಕಂಬಗಳನ್ನು ಜುಲೈ 2ರೊಳಗೆ ಸ್ಥಳಾಂತರ ಮಾಡುವುದಾಗಿ ಮೆಸ್ಕಾಂನವರು ಹೇಳಿದ್ದಾರೆ. ಎರಡು ತಿಂಗಳ ಒಳಗಾಗಿ ಎಲ್ಲ ಕಾಮಗಾರಿಯನ್ನು ಮುಗಿಸುವ ಭರವಸೆ ಕೊಟ್ಟಿದ್ದಾರೆ. ಆ ಮೂಲಕ ಸೆ.15ರೊಳಗೆ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಅವರು ಭರವಸೆ ನೀಡಿದರು.

ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸುವ ಬಗ್ಗೆ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಮಳೆ ವಿಪರೀತವಾದರೆ 15 ದಿನಗಳ ವ್ಯತ್ಯಾಸ ಆಗ ಬಹುದು. ತಮ್ಮಿಂದ ಆಗಿರುವ ಪ್ರಮಾದವನ್ನು ಅಧಿಕಾರಿಗಳು ಈಗಾಗಲೇ ಒಪ್ಪಿಕೊಂಡಿದ್ದಾರೆ. ಸೂಕ್ತ ಸಮಯದಲ್ಲಿ ಕೆಲಸ ಪೂರ್ಣಗೊಳ್ಳದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಬಿಜೆಪಿ ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಸುಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News