ಫೆ.15ರಂದು ಉಡುಪಿ ಜಿಲ್ಲಾ ಮಟ್ಟದ ಕಾರ್ಯಾಗಾರ
ಉಡುಪಿ, ಫೆ.14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಕಾರ್ಮಿಕ ಇಲಾಖೆಗಳ ಸಹಯೋಗದೊಂದಿಗೆ ‘ಬೇಟಿ ಬಚಾವೋ ಬೇಟಿ ಪಡಾವೋ’ (ಮಗಳನ್ನು ಉಳಿಸಿ ಮಗಳನ್ನು ಓದಿಸಿ) ಯೋಜನೆಯು 10 ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಜಿಲ್ಲಾ ಮಟ್ಟ, ತಾಲೂಕು ಮಟ್ಟ ಹಾಗೂ ಕ್ಷೇತ್ರ ಮಟ್ಟದ ಅಧಿಕಾರಿಗಳಿಗೆ ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗೆ ಪೂರಕವಾದ ಕಾನೂನು ಅರಿವು ಮತ್ತು ಜೀತ ಕಾರ್ಮಿಕ ಪದ್ಧತಿ (ರದ್ಧತಿ) ಕಾಯ್ದೆ 1976ರ ಕುರಿತು ಜಿಲ್ಲಾಮಟ್ಟದ ಕಾರ್ಯಾಗಾರ ವೊಂದು ಫೆಬ್ರವರಿ 15ರಂದು ಬೆಳಗ್ಗೆ 10 ಗಂಟೆಗೆ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನುಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಾಗಾರದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ., ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್. ಯೋಗೇಶ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮ್ಮದ್ ಭಾಗವಹಿಸಲಿದ್ದಾರೆ. ಉಡುಪಿಯ ವೈಕುಂಠ ಬಾಳಿಗಾ ಕಾನೂನು ವಿದ್ಯಾಲಯದ ನಿರ್ದೇಶಕಿ ಡಾ.ನಿರ್ಮಲಾ ಕುಮಾರಿ, ನ್ಯಾಯವಾದಿ ಪ್ರದೀಪ್ ಪಿ.ಜೆ ಹಾಗೂ ಉಪ ಕಾನೂನು ನೆರವು ಅಭಿರಕ್ಷಕ ಶ್ರೀನಿವಾಸ ಉಪಾಧ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.