ಸೆ.15ರಂದು ಉಡುಪಿ ಜಿಲ್ಲೆಯಲ್ಲೂ ಅಂ.ರಾ.ಪ್ರಜಾಪ್ರಭುತ್ವ ದಿನಾಚರಣೆ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ
ಉಡುಪಿ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲೆಯಲ್ಲೂ ‘ನನ್ನ ಮತ ನನ್ನ ಹಕ್ಕು’ ಧ್ಯೇಯ ವಾಕ್ಯದಡಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದನ್ನು ಎಲ್ಲಾ ಇಲಾಖೆಗಳ ಸಹ ಯೋಗದೊಂದಿಗೆ ಯಶಸ್ವಿಗೊಳಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಡಿಸಿ ಸ್ವರೂಪ ಟಿ.ಕೆ ಹೇಳಿದ್ದಾರೆ.
ಬುಧವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಕರೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಸೆ.15ರಂದು ಜಿಲ್ಲಾ ಮಟ್ಟದಲ್ಲಿ ಚಿತ್ರಕಲೆ, ಛಾಯಾ ಚಿತ್ರ, ಭಾಷಣ ಸ್ಪರ್ಧೆ, ಸೈಕಲ್ ರ್ಯಾಲಿ ಹಾಗೂ ಮೋಟಾರ್ ಬೈಕ್ ರ್ಯಾಲಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಎಲ್ಲಾ ಸ್ಪರ್ಧೆಗಳ ಯಶಸ್ಸಿಗೆ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದವರು ಹೇಳಿದರು.
ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15ರಂದು ನನ್ನ ಮತ ನನ್ನ ಹಕ್ಕು, ಗಾಂಧಿ ಭಾರತ ಹಾಗೂ ಸಂವಿಧಾನ ಪೀಠಿಕೆ ಎಂಬ ಶೀರ್ಷಿಕೆಯಡಿ ಶಿಕ್ಷಣ ಇಲಾಖೆಯ ಹಾಗೂ ವಸತಿ ಶಿಕ್ಷಣ ಸಂಸ್ಥೆಗಳ 6, 7, 8ನೇ ತರಗತಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಚಿತ್ರಕಲಾ ಸ್ಪರ್ಧೆಗೆ ಚಾಲನೆ ನೀಡಲಾಗುತ್ತಿದ್ದು, ಆಯ್ಕೆಯಾದ ಅರ್ಹ ಮೂವರು ವಿದ್ಯಾರ್ಥಿಗಳಿಗೆ ನವೆಂಬರ್ 14ರ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ನೀಡಲಾ ಗುವುದು. ಪದವಿ ವಿದ್ಯಾರ್ಥಿಗಳಿಗೆ ಛಾಯಾಚಿತ್ರ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದ್ದು, ಅತ್ಯುತ್ತಮ ಬಹುಮಾನ ಗೆಲ್ಲುವ ಮೂವರು ವಿದ್ಯಾರ್ಥಿಗಳಿಗೆ ನವೆಂಬರ್ 26ರ ಸಂವಿಧಾನ ದಿನಾಚರಣೆ ದಿನದಂದು ಬಹುಮಾನ ನೀಡಿ ಗೌರವಿಸಲಾಗುವುದು ಎಂದರು.
ಜಿಲ್ಲೆಯಲ್ಲಿ ಸೆಪ್ಟಂಬರ್ 15ರಂದು ಅಜ್ಜರಕಾಡು ಮಹತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಂವಿಧಾನ ಪೀಠಿಕೆ ಬೋಧನೆ ಕಾರ್ಯಕ್ರಮ ನಡೆಯಲಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿ ಗಳು ಭಾಗವಹಿಸಲಿದ್ದಾರೆ. ನಂತರ ಸೈಕಲ್ ರ್ಯಾಲಿಗೆ ಚಾಲನೆ ನೀಡಲಾಗುವುದು ಎಂದು ಸ್ವರೂಪ ಟಿ.ಕೆ. ತಿಳಿಸಿದರು.
ಸೈಕಲ್ ರ್ಯಾಲಿಗೆ ಅಗತ್ಯವಿರುವ ರೂಟ್ ಮ್ಯಾಪ್ ಸೇರಿದಂತೆ ವಿವಿಧ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ರ್ಯಾಲಿ ನಡೆಯುವ ಕಡೆಗಳಲ್ಲಿ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಆಂಬುಲೆನ್ಸ್ ವ್ಯವಸ್ಥೆಯನ್ನು, ಕುಡಿಯುವ ನೀರಿನ ಸೌಲಭ್ಯವನ್ನೂ ಕಲ್ಪಿಸಬೇಕು ಎಂದರು.
ಸೆ.15ರಂದು ಬೆಂಗಳೂರಿನಲ್ಲಿ ನಡೆಯುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮಕ್ಕೆ ಜಿಲ್ಲೆ ಯಿಂದ ಎಸ್ಕಾರ್ಟ್ ಭದ್ರತೆಯಲ್ಲಿ ಮೋಟರ್ ಬೈಕ್‌ಗಳ ಮೂಲಕ 10 ಅನುಭವಿ ಬೈಕ್ ರೈಡರ್ ಗಳು ಭಾಗವಹಿ ಸಲು ಅವಕಾಶವಿದ್ದು, ಅನುಭವಿ ಬೈಕ್ ರೈಡರ್‌ಗಳ ಮಾಹಿತಿ ಗಳನ್ನು ಸಂಗ್ರಹಿಸುವುದರೊಂದಿಗೆ ಒಂದು ದಿನ ಮುಂಚಿತವಾಗಿ ಹೊರಡಲು ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲು ಪ್ರವಾಸೋದ್ಯಮ ಹಾಗೂ ಕ್ರೀಡಾ ಇಲಾಖೆಯ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕದ್ರೋಳಿ, ಸಹಾಯಕ ಕಮಿಷನರ್ ರಶ್ಮಿ, ಪೌರಾಯುಕ್ತ ಮಹಾಂತೇಶ ಹಂಗರಗಿ, ಜಿಲ್ಲಾ ಮಟ್ಟದ ವಿವಿಧ ಅನುಷ್ಠಾನಾಧಿಕಾರಿ ಗಳು, ತಾಲೂಕು ತಹಶೀಲ್ದಾರರುಗಳು ಹಾಗೂ ಇತರರು ಉಪಸ್ಥಿತರಿದ್ದರು.