ಉಚ್ಚಿಲ, ಅ.14: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಡಾ. ಜಿ. ಶಂಕರ್ ನೇತೃತ್ವದಲ್ಲಿ ನಡೆಯುತ್ತಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಭೇಟಿ ನೀಡಲಿದ್ದಾರೆ.

ಸಂಜೆ 4:40ಕ್ಕೆ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆಯಲಿದ್ದು, ಬಳಿಕ ಮೊಗವೀರ ಕುಲಗುರು ಮಾಧವ ಮಂಗಲ ಅವರ ಕಂಚಿನ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿ, ದೇವಸ್ಥಾನದ ವತಿ ಯಿಂದ ಆಯೋಜಿಸಿರುವ ಮಹಿಳಾ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಜಿ. ಶಂಕರ್ ಅವರು ಮೀನುಗಾರರ ವಿವಿಧ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಿದ್ದಾರೆ. ತುಳು ಭಾಷೆಗೆ ರಾಜ್ಯದ ಎರಡನೇ ಆಡಳಿತ ಭಾಷೆಯ ಸ್ಥಾನಮಾನ ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರ ಅಭಿನಂದನಾ ಕಾರ್ಯಕ್ರಮವೂ ಇದೇ ವೇಳೆ ನಡೆಯಲಿದೆ.

ಬಿಗುಭದ್ರತೆ: ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಕಲ ಸಿದ್ಧತೆ ಗಳನ್ನು ಮಾಡಿಕೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಸಹಿತ ಅಧಿಕಾರಿಗಳು ಭೇಟಿ ನೀಡಿ ಬಂದೋಬಸ್ತ್ ಪರಿಶೀಲಿಸಿದರು.

ಈ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಹರಿರಾಂ ಶಂಕರ್, ಮುಖ್ಯಮಂತ್ರಿ ಭೇಟಿಯ ಸಂದರ್ಭ ಸಾರ್ವಜನಿಕರ ದೇವಳ ಭೇಟಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಲಾಗುವುದು. ಸಾರ್ವಜನಿಕರು ಈ ಬಗ್ಗೆ ನಮ್ಮೊಂದಿಗೆ ಸಹಕರಿಸಬೇಕು. 500ಕ್ಕಿಂತ ಅಧಿಕ ಪೋಲಿಸರ ನಿಯೋಜನೆ, 3 ಸಬ್ ಡಿವಿಷನ್ ಅಧಿಕಾರಿಗಳು, 2 ಕೆಎಸ್‌ಆರ್‌ಪಿ ಪೋಲಿಸ್ ತುಕಡಿಗಳು ಬಂದೋಬಸ್ತ್‌ನಲ್ಲಿ ಇರಲಿವೆ ಎಂದು ಅವರು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor