ಸೆ.26ರಂದು ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ
ಉಡುಪಿ, ಸೆ.25: ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಆಯಾ ವಿಧಾನಸಭಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಗಳು ಸೆಪ್ಟಂಬರ್ 26ರಂದು ನಡೆಯಲಿವೆ.
ಸೆ.26ರಂದು ಬೆಳಗ್ಗೆ 10 ಗಂಟೆಗೆ ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ಶ್ರೀಕೃಷ್ಣ ಸಭಾಭವನದಲ್ಲಿ ಕಾರ್ಕಳ ಶಾಸಕ ಸುನಿಲ್‌ಕುಮಾರ್ ಅಧ್ಯಕ್ಷತೆಯಲ್ಲಿ, ತ್ರಾಸಿಯ ಅಣ್ಣಪ್ಪಯ್ಯ ಸಭಾಭವನದಲ್ಲಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅಧ್ಯಕ್ಷತೆಯಲ್ಲಿ, ಅಂಜಾರು ಗ್ರಾಮದ ಹಿರಿಯಡ್ಕ ದೇವಾಡಿಗರ ಸಭಾಭವನದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ, ಬ್ರಹ್ಮಾವರ ತಾಲೂಕು ಪಾಂಡೇಶ್ವರ ಗ್ರಾಮದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಕುಂದಾಪುರ ಶಾಸಕ ಎ. ಕಿರಣ್‌ಕುಮಾರ್ ಕೊಡ್ಗಿ ಅಧ್ಯಕ್ಷತೆಯಲ್ಲಿ ಹಾಗೂ ಉಡುಪಿ ತಾಲೂಕು ತೆಂಕನಿಡಿಯೂರು ಗ್ರಾಮ ಪಂಚಾಯತ್‌ನ ಗಣೇಶೋತ್ಸವ ಸಭಾಭವನದಲ್ಲಿ ಅಪರಾಹ್ನ 2:30ಕ್ಕೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ ಪ್ರಜಾಸೇವೆ ಆಂದೋಲನ ಸಭೆಗಳು ನಡೆಯಲಿವೆ.
ಸಾರ್ವಜನಿಕರು ಈ ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲುಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.