×
Ad

ಉಡುಪಿ ಜಿಲ್ಲೆಯ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ 3 ಕೋಟಿ ಬಿಡುಗಡೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕರ್ನಾಟಕ ರಾಜ್ಯ ಜೂನಿಯರ್, 23 ವರ್ಷದೊಳಗಿನವರ ಕ್ರೀಡಾಕೂಟ

Update: 2025-08-23 19:55 IST

ಉಡುಪಿ: ಮಂಗಳೂರು-ಉಡುಪಿಯಲ್ಲಿ ನಡೆದ ಫೆಡರೇಷನ್ ಕಪ್ ಅಥ್ಲೆಟಿಕ್ ಮೀಟ್ ಸಂದರ್ಭದಲ್ಲಿ ಮುಖ್ಯ ಮಂತ್ರಿಗಳು ಘೋಷಿಸಿದ ಮೂರು ಕೋಟಿ ರೂ.ಗಳನ್ನು ಜಿಲ್ಲೆಯ ಕ್ರೀಡಾ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಶೀಘ್ರವೇ ಬಿಡುಗಡೆಗೊಳಿಸಲು ಪ್ರಯತ್ನಿಸುವುದಾಗಿ ರಾಜ್ಯ ಗೃಹ ಸಚಿವ ಹಾಗೂ ಕರ್ನಾಟಕ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನ ಕರ್ನಾಟಕ ಅಥ್ಲೆಟಿಕ್ ಸಂಸ್ಥೆಯ ಸಹಯೋಗದೊಂದಿಗೆ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಅಮೆಚೂರು ಅಥ್ಲೆಟಿಕ್ ಅಸೋಸಿಯೇಷನ್ ಮೂರು ದಿನಗಳ ಕಾಲ ಆಯೋಜಿಸಿ ರುವ ಕರ್ನಾಟಕ ರಾಜ್ಯ ಜೂನಿಯರ್ ಹಾಗೂ 23 ವರ್ಷ ದೊಳಗಿನವರ ಅಥ್ಲೆಟಿಕ್ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮಂಗಳೂರಿನಲ್ಲಿ ನಡೆದ ಫೆಡರೇಷನ್ ಕಪ್ ಅಥ್ಲೆಟಿಕ್ ಕೂಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಮಂಗಳೂರಿಗೆ ಐದು ಕೋಟಿ ರೂ. ಹಾಗೂ ಉಡುಪಿಗೆ ಮೂರು ಕೋಟಿ ರೂ.ಗಳನ್ನು ಘೋಷಿಸಿದ್ದರು. ಉಡುಪಿಯಿಂದ ಈಗಾಗಲೇ ಪ್ರಸ್ತಾಪ ಹೋಗಿದೆ. ಬಜೆಟ್‌ನಲ್ಲೂ ಅದನ್ನು ಇರಿಸಲಾಗಿದೆ. ಅದನ್ನು ಶೀಘ್ರವೇ ಬಿಡುಗಡೆ ಮಾಡುವ ಪ್ರಯತ್ನವನ್ನು ನಾನು ಮಾಡುವುದಾಗಿ ಸಚಿವರು ತಿಳಿಸಿದರು.

ಉಡುಪಿಯಲ್ಲಿ ಕ್ರೀಡೆಗೆ ಈಗಾಗಲೇ ಒಳ್ಳೆಯ ಮೂಲ ಸೌಕರ್ಯಗಳಿವೆ. ಇನ್ನಷ್ಟು ಸೌಲಭ್ಯಗಳನ್ನು ಒದಗಿಸಲು ಅನುದಾನವನ್ನು ಬಳಸಿಕೊಳ್ಳುವಂತೆ ತಿಳಿಸಿ ಡಾ.ಜಿ.ಪರಮೇಶ್ವರ್, ಈ ಕ್ರೀಡಾಕೂಟದ ಆಯೋಜನೆಗೆ 30 ಲಕ್ಷ ರೂ. ನೀಡುವಂತೆ ಸಿಎಂಗೆ ಮನವಿ ಮಾಡಲಾಗಿದೆ. ಅದು ಸಹ ಸಿಗುವ ಭರವಸೆ ಇದೆ ಎಂದು ಅವರು ಹೇಳಿದರು.

ತುಮಕೂರಿನಲ್ಲಿ ಎಲ್ಲಾ ಸೌಕರ್ಯಗಳಿರುವ ಕ್ರೀಡಾಂಗಣವೊಂದು ಸಿದ್ಧವಾಗಿದ್ದು, ಶೀಘ್ರವೇ ಅದು ಉದ್ಘಾಟನೆ ಗೊಳ್ಳಲಿದೆ. ಈ ಸಂದರ್ಭದಲ್ಲಿ ಅಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತದೆ. ಪ್ರತಿ ವಿಭಾಗ ಮಟ್ಟದಲ್ಲಿ ಒಂದಾದರೂ ಎಲ್ಲಾ ಸೌಕರ್ಯಗಳಿರುವ ಕ್ರೀಡಾಂಗಣ ನಿರ್ಮಾಣದ ಗುರಿ ಇದ್ದು, ಇದರಿಂದ ಗ್ರಾಮೀಣ ಭಾಗದಲ್ಲೂ ಕ್ರೀಡೆಗೆ ಉತ್ತಮ ಉತ್ತೇಜನ ಸಿಗುವಂತಾಗುತ್ತದೆ ಎಂದರು.

‘ಪ್ರತಿಭಾ ಅನ್ವೇಷಣೆ’ (ಟ್ಯಾಲೆಂಟ್ ಹಂಟ್) ಕಾರ್ಯಕ್ರಮದ ಮೂಲಕ ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಎಲ್ಲಾ ರೀತಿಯಲ್ಲೂ ಪ್ರೋತ್ಸಾಹ ನೀಡುವ ಮೂಲಕ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಲು ಅವಕಾಶ ಮಾಡಿಕೊಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿರುವ ಪ್ರತಿಭೆಗಳನ್ನು ಗುರುತಿಸುವ ಕೆಲಸ ಮೊದಲು ನಡೆಯಬೇಕಾಗಿದೆ ಎಂದರು.

ಉಡುಪಿಯಲ್ಲಿ ಬಾಸ್ಕೆಟ್‌ಬಾಲ್ ಸೇರಿದಂತೆ ವಿವಿಧ ಕ್ರೀಡಾ ಸಂಸ್ಥೆಗಳನ್ನು ಆರಂಭಿಸಲು ಅವಕಾಶವಿದ್ದು, ಸರಕಾರ ಇವುಗಳಿಗೆ ಹೆಚ್ಚೆಚ್ಚು ಪ್ರೋತ್ಸಾಹ ನೀಡುತ್ತದೆ ಎಂದು ಸ್ವತಹ ಒಳ್ಳೆಯ ಕ್ರೀಡಾಪಟುವೂ ಆಗಿರುವ ಡಾ.ಪರಮೇಶ್ವರ್ ತಿಳಿಸಿದರು.

ಮಣಿಪಾಲ ಮಾಹೆಯ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಅವರು ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಶಾಸಕ ಯಶಪಾಲ್ ಎ.ಸುವರ್ಣ ಅವರು ಮಾತನಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕ್ರೀಡಾಕೂಟ ಸಂಘಟನಾ ಸಮಿತಿಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಮೂರು ದಿನಗಳ ಈ ಕ್ರೀಡಾಕೂಟದಲ್ಲಿ ರಾಜ್ಯಾದ್ಯಂತದಿಂದ ಬಂದಿರುವ ದಾಖಲೆಯ 1680 ಮಂದಿ ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಪುದುಚೇರಿಯಲ್ಲಿ ನಡೆಯುವ ದಕ್ಷಿಣ ವಲಯ ಕ್ರೀಡಾಕೂಟ ಹಾಗೂ ಭುವನೇಶ್ವರದಲ್ಲಿ ನಡೆಯುವ ರಾಷ್ಟ್ರೀಯ ಕಿರಿಯ ಕ್ರೀಡಾಕೂಟದಲ್ಲಿ ಸ್ಪರ್ಧಿಸುವ ಕರ್ನಾಟಕ ತಂಡವನ್ನು ಇಲ್ಲಿ ಆಯ್ಕೆ ಮಾಡಲಾಗುತ್ತದೆ ಎಂದರು.

ಉದ್ಘಾಟನಾ ಸಮಾರಂಭದಲ್ಲಿ ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಬೆಂಗಳೂರು ಎನ್‌ಇಬಿ ಸ್ಪೋರ್ಟ್ಸ್‌ನ ಸಿಎಂಡಿ ನಾಗರಾಜ ಅಡಿಗ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಮಾಜಿ ಶಾಸಕ ಗೋಪಾಲ ಪೂಜಾರಿ, ಕಾಂಗ್ರೆಸ್ ನಾಯಕರಾದ ಅಶೋಕಕುಮಾರ್ ಕೊಡವೂರು, ರಮೇಶ್ ಕಾಂಚನ್, ಪ್ರಸಾದ್‌ರಾಜ್ ಕಾಂಚನ್, ಮುನಿಯಾಲು ಉದಯ ಕುಮಾರ್ ಶೆಟ್ಟಿ ಭಾಗವಹಿಸಿದ್ದರು.

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಂತಾರಾಷ್ಟ್ರೀಯ ಅಥ್ಲೀಟ್ ಎಂ.ಕೆ.ಆಶಾ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷ ಹರಿಪ್ರಸಾದ್ ರೈ ಅತಿಥಿಗಳನ್ನು ಸ್ವಾಗತಿಸಿದರೆ, ಕಾರ್ಯದರ್ಶಿ ದಿನೇಶ್ ಕುಮಾರ್ ಎ. ವಂದಿಸಿದರು. ಡಾ.ರೋಶನ್‌ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.






Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News