×
Ad

ಹೆಣ್ಣು ಭ್ರೂಣ ಹತ್ಯೆಗೆ 3 ವರ್ಷ ಜೈಲು ಶಿಕ್ಷೆ: ಡಾ. ಪ್ರತಾಪ್‌ ಕುಮಾರ್

Update: 2023-12-04 20:08 IST

ಉಡುಪಿ, ಡಿ.4: ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮಾಡುವುದು ಹಾಗೂ ಹೆಣ್ಣು ಭ್ರೂಣ ಹತ್ಯೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಅಪರಾಧ ಎಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಅಧ್ಯಕ್ಷ ಡಾ. ಪ್ರತಾಪ್‌ಕುಮಾರ್ ಹೇಳಿದ್ದಾರೆ.

ಸೋಮವಾರ ಅಜ್ಜರಕಾಡಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಹೆಣ್ಣು ಭ್ರೂಣ ಹತ್ಯೆಯಿಂದಾಗಿ ಸಮಾಜದಲ್ಲಿ ಲಿಂಗಾನುಪಾತದಲ್ಲಿ ವ್ಯತ್ಯಾಸ ಉಂಟಾಗುತ್ತದೆ. ಗಂಡು ಹೆಣ್ಣಿನ ಅನುಪಾತ ದಲ್ಲಿ ಸಮತೋಲನ ಸಾಧಿಸಲು ಭ್ರೂಣಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆಯನ್ನು ನಿಯಂತ್ರಣಕ್ಕೆ ತರಲೇಬೇಕಾಗಿದೆ ಎಂದರು.

ಭ್ರೂಣಲಿಂಗ ಪತ್ತೆ ಮಾಡುವ ವೈದ್ಯಾಧಿಕಾರಿ ಹಾಗೂ ಸ್ಕ್ಯಾನಿಂಗ್ ಸೆಂಟರ್‌ಗಳ ಮಾಲಕರುಗಳಿಗೆ ಹತ್ತು ಸಾವಿರ ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಇದೇ ಅಪರಾಧ ಪುನರಾವರ್ತನೆಯಾದಲ್ಲಿ ಐವತ್ತು ಸಾವಿರ ರೂ. ದಂಡದೊಂದಿಗೆ 5 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ ಎಂದು ಡಾ.ಪ್ರತಾಪ್‌ಕುಮಾರ್ ತಿಳಿಸಿದರು.

ಜಿಲ್ಲಾ ಮಟ್ಟದಲ್ಲಿ ಆಗಿಂದಾಗ್ಗೆ ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆಯ ಕುರಿತು ಕಾರ್ಯಾಗಾರಗಳನ್ನು ಏರ್ಪಡಿಸಿ, ಜನ ಸಾಮಾನ್ಯರು, ವೈದ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿ, ಅಂಗನವಾಡಿ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರುಗಳಿಗೆ ಅರಿವು ಮೂಡಿಸಬೇಕು ಎಂದ ಅವರು ನುಡಿದರು.

ಜಿಲ್ಲೆಯ ಯಾವುದೇ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಭ್ರೂಣಲಿಂಗ ಪತ್ತೆ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಬೇಕು. ಒಂದು ವೇಳೆ ಭ್ರೂಣಲಿಂಗ ಪತ್ತೆ ಮಾಡುವ ವೈದ್ಯರುಗಳ ಮಾಹಿತಿ ನೀಡಿ, ಪ್ರಕರಣ ಸಾಬೀತಾದಲ್ಲಿ ಮಾಹಿತಿ ನೀಡಿದವರಿಗೆ 50,000 ರೂ.ಗಳ ಬಹುಮಾನ ನೀಡಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮರಾವ್, ಮಣಿಪಾಲ ಕೆಎಂಸಿಯ ಮಕ್ಕಳ ತಜ್ಞ ಡಾ. ಕಿರಣ ಹೆಬ್ಬಾರ್, ಡಾ. ಗಣೇಶ್ ಪೈ, ಡಾ.ಆಮ್ನಾ ಹೆಗ್ಡೆ, ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ತಜ್ಞೆ ಡಾ.ದೀಕ್ಷಿತಾ, ಕಾರ್ಕಳ ಸಾರ್ವಜನಿಕ ಆಸ್ಪತ್ರೆಯ ರೇಡಿಯೋಲಾಜಿಸ್ಟ್ ಡಾ.ಅನಿತಾ ಪ್ರಭು ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News