36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಉಡುಪಿ, ಜೂ.23: ಕಳೆದ 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಾವೇರಿ ಮೂಲದ ಆರೋಪಿಯೊಬ್ಬನನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.
ಹಾವೇರಿ ಜಿಲ್ಲೆಯ ನೂರುಲ್ಲ(66) ಬಂಧಿತ ಆರೋಪಿ. ಈತನ ವಿರುದ್ಧ 1990ರ ಜೂ.21ರಂದು ಉಡುಪಿ ನಗರ ಠಾಣೆಯಲ್ಲಿ ಕರ್ನಾಟಕ ಅರಣ್ಯ ಕಾಯ್ದೆಯಂತೆ ಪ್ರಕರಣ ದಾಖಲಾಗಿದ್ದು, ಆತನನ್ನು 1990ರ ಜೂ.22ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಬಳಿಕ ಆರೋಪಿ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದನು.
ಬಳಿಕ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಆರೋಪಿಯ ವಿರುದ್ಧ ಎಲ್‌ಪಿಸಿ ಹೊರಡಿಸಿತ್ತು. ಆರೋಪಿ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿದ ಪೊಲೀಸರು, 36 ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ಆರೋಪಿಯನ್ನು 2026ರ ಜೂ.22ರಂದು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ನಿಟ್ಟೂರು ಎಂಬಲ್ಲಿ ಪತ್ತೆ ಹಚ್ಚಿ, ವಶಕ್ಕೆ ಪಡೆದುಕೊಂಡು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದೆ. ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.