ಉಡುಪಿ, ಸೆ.1: ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರ ನೇತೃತ್ವದಲ್ಲಿ ತಾಲೂಕು ಹಾಗೂ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ಸೆಪ್ಟಂಬರ್ 5ರಂದು ನಡೆಯಲಿದೆ.

ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ಸೆ.5ರಂದು ಬೆಳಗ್ಗೆ 10:30ಕ್ಕೆ ಕಾರ್ಕಳ ತಾಲೂಕು ಕಸಬಾ ಗ್ರಾಮದ ಮಂಜುನಾಥ ಪೈ ಸಭಾಭವನದಲ್ಲಿ, ರಾಜ್ಯ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಝ್ವಾನ್ ಅರ್ಷದ್ ಅಧ್ಯಕ್ಷತೆಯಲ್ಲಿ ಹಾಗೂ ಕಾರ್ಕಳ ಶಾಸಕ ಸುನಿಲ್‌ಕುಮಾರ್ ಉಪಸ್ಥಿತಿಯಲ್ಲಿ ನಡೆಯಲಿದೆ.

ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಗಳು ಸೆ.5ರಂದು ನಡೆಯಲಿದ್ದು, ಕೋಟ ಹೋಬಳಿಗೆ ಸಂಬಂಧಿಸಿದಂತೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಕುಂದಾಪುರ ಶಾಸಕ ಎ.ಕಿರಣ್‌ಕುಮಾರ್ ಕೊಡ್ಗಿ ಅಧ್ಯಕ್ಷತೆಯಲ್ಲಿ, ಬೈಂದೂರು ಹೋಬಳಿಗೆ ಸಂಬಂಧಿಸಿದಂತೆ ಕಿರಿಮಂಜೇಶ್ವರ ನಾಗೂರು ಮಹಾಲಸ ಕನ್ವೇಶನ್ ಹಾಲ್‌ನಲ್ಲಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅಧ್ಯಕ್ಷತೆಯಲ್ಲಿ, ಮಜೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಹಾಗೂ ಕಡೆಕಾರು ಗ್ರಾಮದ ಬಿಲ್ಲವರ ಸೇವಾ ಸಂಘದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆಯಲ್ಲಿ ನಡೆಯಲಿವೆ.

ಸಾರ್ವಜನಿಕರು ಈ ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲುಗಳು ಸೇರಿದಂತೆ ಸರಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor