×
Ad

ಕಾಂಗ್ರೆಸ್ ಬಲಿಷ್ಠಗೊಂಡರೆ ದೇಶದಲ್ಲಿ ಶಾಂತಿಯ ವಾತಾವರಣ: ಸಚಿವ ತಿಮ್ಮಾಪುರ

Update: 2023-11-19 18:29 IST

ಉಡುಪಿ: ಕಾಂಗ್ರೆಸ್ ಆಡಳಿತಾವಧಿಯಲ್ಲಿ ಭದ್ರವಾಗಿದ್ದ ದೇಶದ ಆರ್ಥಿಕ ಸ್ಥಿತಿ ಇಂದು ದಿವಾಳಿಯತ್ತ ಸಾಗುತ್ತಿದೆ. ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಿಷ್ಠಗೊಳಿಸಿ ದೇಶದಲ್ಲಿ ಶಾಂತಿಯ ವಾತಾವರಣ ನಿರ್ಮಿಸಬೇಕಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ರವಿವಾರ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾದ ಇಂದಿರಾಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯದ ಜನರ ಕಷ್ಟಗಳನ್ನು ಅರಿತುಕೊಂಡ ರಾಜ್ಯ ಕಾಂಗ್ರೆಸ್ ಸರಕಾರ ಬಡವರಿಗೆ ಅಕ್ಕಿ, ಶಕ್ತಿ ಯೋಜನೆ, ಮನೆಯ ಒಡತಿಗೆ 2 ಸಾವಿರ ರೂ. ಸಹಿತ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದೆ. ಇದರಿಂದಾಗಿ ಜನಸಾಮಾನ್ಯರು ಕೂಡ ಇಂದು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಿದೆ ಎಂದರು.

ಬಡವರ ಕಷ್ಟಗಳಿಗೆ ಸ್ಪಂದಿಸಿದ್ದ ಇಂದಿರಾಗಾಂಧಿ, ಬ್ಯಾಂಕ್‌ಗಳನ್ನು ರಾಷ್ಟ್ರೀಕರಣ ಮಾಡಿರುವುದರಿಂದ ಇಂದು ಜನಸಾಮಾನ್ಯರೂ ವ್ಯವಹಾರ ನಡೆಸುವಂತಾಗಿದೆ. ಇಂದಿರಾಗಾಂಧಿಯವರ ತತ್ವಾದರ್ಶಗಳನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು. ದೇಶದಲ್ಲಿ ಕಾಂಗ್ರೆಸ್ ಗತವೈಭವ ಮತ್ತೆ ಮರುಕಳಿಸುವಂತಾಗಬೇಕು ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಬ್ರಹ್ಮಾವರ ಅಧ್ಯಕ್ಷ ದಿನ ಕರ ಹೇರೂರು, ಮುಖಂಡರಾದ ಕಿರಣ್ ಹೆಗ್ಡೆ, ನರಸಿಂಹ ಮೂರ್ತಿ, ಫಾ.ವಿಲಿಯಂ ಮಾರ್ಟಿಸ್, ಅಮೃತಾ ಕೃಷ್ಣಮೂರ್ತಿ, ಡಾ.ಸುನೀತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಚಿವರನ್ನು ಸಮ್ಮಾನಿಸಲಾಯಿತು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಸ್ವಾಗತಿಸಿದರು. ಉಪಾಧ್ಯಕ್ಷೆ ಜ್ಯೋತಿ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮಕ್ಕೂ ಮುನ್ನ ಆಸ್ಕರ್ ಫೆರ್ನಾಂಡಿಸ್ ಅವರ ಪುತ್ಥಳಿಗೆ ಹಾಗೂ ಇಂದಿರಾ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News