ಜಿಲ್ಲೆಯಲ್ಲಿ ಬರ ಪರಿಸ್ಥಿತಿಯ ನಿರ್ವಹಣೆಗೆ ಸನ್ನದ್ಧರಾಗಿರಿ: ಉಡುಪಿ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಡಿಕೆಶಿ ಸೂಚನೆ

Update: 2026-07-19 21:35 IST

ಉಡುಪಿ, ಜು.19: ರಾಜ್ಯಾದ್ಯಂತ ಮುಂಗಾರು ಮಳೆ ಕೊರತೆಯಿಂದ ತೀವ್ರ ಬರಗಾಲದ ಪರಿಸ್ಥತಿ ಎದುರಾಗಿದೆ. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಸಿಇಓಗಳು ಸಂಭವನೀಯ ಬರಗಾಲದ ವಿಪತ್ತನ್ನು ಎದುರಿಸಲು ತಮ್ಮೆಲ್ಲಾ ಅಧಿಕಾರಿಗಳೊಂದಿಗೆ ಸನ್ನದ್ದರಾಗಿರಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾಡಳಿತಕ್ಕೆ ಸೂಚನೆ ಗಳನ್ನು ನೀಡಿದ್ದಾರೆ.

ರವಿವಾರ ಬೆಂಗಳೂರಿನ ವಿಧಾನಸೌಧ ಕಚೇರಿ ಸಭಾಂಗಣದಲ್ಲಿ ರಾಜ್ಯದ ಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಸಿಇಓಗಳೊಂದಿಗೆ ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರಪರಿಸ್ಥಿತಿಯ ಅವಲೋಕನಕ್ಕಾಗಿ ಕರೆದ ಸಭೆಯ ಅಧ್ಯಕ್ಷತೆ ವಹಿಸಿ ವಿಡಿಯೋ ಸಂವಾದದಲ್ಲಿ ಮಾತನಾಡಿದರು.

ಬರದ ವಿಪತ್ತು ಎದುರಿಸಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಒಂದು ತಂಡವಾಗಿ ಕೆಲಸ ಮಾಡಬೇಕು. ಯುದ್ದೋಪಾದಿಯಲ್ಲಿ ಬರದ ನಿರ್ವಹಣೆಗೆ ಒತ್ತು ನೀಡಬೇಕು. ಬರ ಸಂದರ್ಭದಲ್ಲಿ ಸರ್ಕಾರ ಕೈಗೊಂಡಿರುವ ಕಾರ್ಯಗಳು ಹಾಗೂ ಕಾಳಜಿ ಜನರಿಗೆ ಮನದಟ್ಟಾಗುವ ರೀತಿಯಲ್ಲಿ ಅಧಿಕಾರಿಗಳು ಸರ್ಕಾರದ ಧ್ವನಿಯಾಗಿ ಕೆಲಸ ಮಾಡಬೇಕು ಎಂದರು.

ವಿಪತ್ತು ಪರಿಹಾರ ಕಾರ್ಯಕ್ಕೆ ಸರ್ಕಾರ ಸನ್ನದ್ಧವಾಗಿದೆ. ಯಾವುದೇ ಹಣಕಾಸಿನ ಕೊರತೆಯಿಲ್ಲ.ಜನರಿಗೆ ಕುಡಿಯುವ ನೀರು ಪೂರೈಕೆಗೆ ಕೈಗೊಂಡ ಕ್ರಮಗಳ ಬಗ್ಗೆ ಜನತೆಗೆ ತಿಳಿಸಿ. ಜಿಲ್ಲಾಧಿಕಾರಿ ಹಾಗೂ ಜಿಪಂ ಸಿಇಓಗಳು ಕೃಷಿ, ತೋಟಗಾರಿಕೆ, ಪಶುಪಾಲನೆ ಇಲಾಖೆಯ ಅಧಿಕಾರಿಗಳ ಜೊತೆಗೂಡಿ ಬರ ನಿರ್ವಹಣೆಗೆ ಕಾರ್ಯಯೋಜನೆ ರೂಪಿಸ ಬೇಕು. ಈ ಬಗ್ಗೆ ಪ್ರಜಾ ಸೇವಾ, ಕಂದಾಯ ಇಲಾಖೆ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಗಳಿಗೆ ನಿಯಮಿತ ವಾಗಿ ವರದಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ನಿರ್ದೇಶನ ನೀಡಿದರು.

ಬರದ ಹಿನ್ನೆಲೆಯಲ್ಲಿ ಅಗತ್ಯ ಇರುವ ಜಿಲ್ಲೆಗಳಿಗೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಈಗಾಗಲೆ ಸೂಚನೆ ನೀಡಿದ್ದೇನೆ. ರಾಜ್ಯದ ಎಲ್ಲಾ ಜಲಾಶಯಗಳ ನೀರಿನ ಮಟ್ಟದ ಕುರಿತು ಜಿಲ್ಲಾಧಿಕಾರಿಗಳು ವಾರಕ್ಕೊಮ್ಮೆ ಮಾಹಿತಿ ನೀಡಬೇಕು. ಅಗತ್ಯವಿರುವ ಕಡೆ ಮೇವು ಬ್ಯಾಂಕ್ ಸ್ಥಾಪಿಸಬೇಕು. ಇದೇ ರೀತಿ ಮಳೆ ಕೊರತೆ ಮುಂದುವರೆದಲ್ಲಿ ಮತ್ತಷ್ಟು ತಾಲೂಕುಗಳಲ್ಲಿ ಬರದ ಛಾಯೆ ಆವರಿಸಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ವಿಪತ್ತು ನಿರ್ವಹಣೆಗೆ ಅನುಕೂಲವಾಗುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಹಣಕಾಸಿನ ನೆರವು ಒದಗಿಸಲಾ ಗಿದೆ. ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಪಿಡಿ ಅಕೌಂಟನಲ್ಲಿ ಅಂದಾಜು 397 ಕೋಟಿ ರೂ ಹಣ ಇದೆ. ಬರದಿಂದ ಜನತೆ ಗುಳೆ ಹೋಗುವುದನ್ನು ತಪ್ಪಿಸಲು ಎಲ್ಲ ಜಿಲ್ಲೆಗಳಲ್ಲಿ ಕೂಡಲೇ ವಿಬಿ- ಜಿ ರಾಮ ಜಿ ಯೋಜನೆಯಡಿ ಉದ್ಯೋಗ ಒದಗಿಸಬೇಕು. ರಾಜ್ಯದ 487 ಗ್ರಾಪಂಗಳಲ್ಲಿ ಜನತೆಗೆ ಉದ್ಯೋಗ ಕೊಡುವ ಕಾರ್ಯಗಳು ಆರಂಭ ವಾಗಿವೆ. ಬರ ಪರಿಸ್ಥಿತಿಯ ಗಂಭೀರತೆ ಅರಿತು ರಾಜ್ಯದ 2,446 ಗ್ರಾಪಂಗಳಲ್ಲೂ ಕೂಡಲೇ ವಿಬಿ ಜಿ ರಾಮ್ ಜಿ ಯೋಜನೆಯ ಕಾರ್ಯ ಆರಂಭಿಸಲು ಸಿಇಓಗಳಿಗೆ ಸಿಎಂ ಸೂಚನೆ ನೀಡಿದರು.

ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಮಾತನಾಡಿ, ರಾಜ್ಯದ ಜನತೆಗೆ ಶುದ್ಧ ಕುಡಿವ ನೀರು ಪೂರೈಸಬೇಕು. ಈ ದಿಶೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಶುದ್ಧ ಕುಡಿವ ನೀರಿನ ಘಟಕಗಳು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದರು.

ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಕೊಠಡಿಯಲ್ಲಿ ನಡೆದ ವಿಡಿಯೊ ಸಂವಾದದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ, ಜಿಪಂ ಸಿಇಓ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ತಾಲೂಕುಗಳ ತಹಶೀಲ್ದಾರರು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

‘75 ವರ್ಷಗಳ ಹಿಂದೆ ಇದೇ ರೀತಿ ಬರ ಬಂದಿತ್ತು’

ಸುಮಾರು 75 ವರ್ಷಗಳ ಹಿಂದೆ ರಾಜ್ಯದಲ್ಲಿ ಇಂತಹ ಬರದ ದುಸ್ಥಿತಿ ಎದುರಾಗಿತ್ತು. 1965 ಮತ್ತು 1972ರಲ್ಲಿ ಸಹ ಇಂತಹ ಬರದ ಛಾಯೆ ರಾಜ್ಯದಲ್ಲಿ ಆವರಿಸಿತ್ತು. ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಉಷ್ಣಾಂಶದ ಪ್ರಮಾಣ ಏರಿಕೆ ಆಗುತ್ತಿದೆ. ಹೆಚ್ಚಿನ ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಮುಂದುವರಿದಿದೆ ಎಂದು ಡಾ.ಜಿ. ಪರಮೇಶ್ವರ್ ತಿಳಿಸಿದರು.

ರಾಜ್ಯದ ಅಂದಾಜು 88 ತಾಲೂಕುಗಳಲ್ಲಿ ಅಂತರ್ಜಲ ನೀರಿನ ಮಟ್ಟ ಕುಸಿದಿದೆ ಎಂದು ವರದಿಯಾಗಿದೆ. ಜನರಿಗೆ ಕುಡಿವ ನೀರು ಕೊಡಲೇಬೇಕು. ಜಲಾಶಯಗಳ ನೀರನ್ನು ಕುಡಿಯಲು ಮಾತ್ರ ಬಳಸಬೇಕು. ಜಾನುವಾರುಗಳಿಗೆ ಸಹ ಕುಡಿವ ನೀರು ಮತ್ತು ಮೇವು ಪೂರೈಕೆಗೆ ಸಹ ಒತ್ತು ಕೊಡಬೇಕು. ಈ ಎಲ್ಲದರ ಬಗ್ಗೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಚರ್ಚಿಸಿ ನಿರ್ಣಯಿಸಿ ಕ್ರಮ ವಹಿಸಬೇಕು ಎಂದು ಉಪ ಮುಖ್ಯಮಂತ್ರಿ ಸೂಚನೆ ನೀಡಿದರು.



 


 


 




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News