×
Ad

ಬಿಜೆಪಿಗರ ಮತಗಳ್ಳತನದಿಂದ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ: ಲಕ್ಷ್ಮೀ ಹೆಬ್ಬಾಳ್ಕರ್

Update: 2025-08-15 21:38 IST

ಉಡುಪಿ: ಬಿಜೆಪಿಯವರು ಮಾಡಿದ ಮತಗಳ್ಳತನದಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ಹಿನ್ನಡೆಯಾಗಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಉಡುಪಿಯ ಕೆ.ಎಂ.ಮಾರ್ಗದ ಬಳಿ ಇರುವ ಎಲ್‌ಐಸಿ ಡೈಮಂಡ್ ಜುಬಿಲಿ ಹಾಲ್‌ನಲ್ಲಿ ಶುಕ್ರವಾರ ನಡೆದ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಪದಗ್ರಹಣ ಸಮಾರಂಭ ಹಾಗೂ 50ನೇ ವಾರ್ಷಿಕ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಶಕ್ತಿ ಕುಂದಿಲ್ಲ ಎಂದ ಅವರು, ವಿಧಾನಸಭಾ ಚುನಾವಣೆ ಯಲ್ಲಿ 135 ಸೀಟುಗಳನ್ನು ಗೆದ್ದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಆದರೆ, ನಮಗೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಆಯಿತು. ಇದಕ್ಕೆ ಕಾರಣ ಮತಗಳ್ಳತನ. ಮುಂದೆ ನಡೆಯುವ ಬಿಹಾರ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟವನ್ನು ಸೋಲಿಸುವ ಸಲುವಾಗಿ ಈಗಾಗಲೇ 65 ಲಕ್ಷ ಮತದಾರರ ಹೆಸರನ್ನು ಕೈಬಿಡಲಾಗಿದೆ. ಕೈಬಿಟ್ಟ ಮತದಾರರ ಪಟ್ಟಿಯನ್ನು ನೀಡದೆ, ಚುನಾವಣಾ ಆಯೋಗ ಪರೋಕ್ಷವಾಗಿ ಬಿಜೆಪಿಗೆ ಬೆಂಬಲಿಸುತ್ತಿದೆ ಎಂದು ಸಚಿವರು ಆರೋಪಿಸಿದರು.

ಉಡುಪಿ ಜಿಲ್ಲೆಯಲ್ಲಿ ಪಕ್ಷಕ್ಕೆ ಕಳೆದ ಚುನಾವಣೆಯಲ್ಲಿ ಸ್ವಲ್ಪಮಟ್ಟಿಗೆ ಹಿನ್ನಡೆಯಾಗಿರಬಹುದು. ಆದರೆ ಅದು ಶಾಶ್ವತವಲ್ಲ, ನಿಮ್ಮೆಲ್ಲರ ಉತ್ಸಾಹ ನೋಡಿದರೆ ಮತ್ತೆ ಫಿನಿಕ್ಸ್ ಪಕ್ಷಿಯಂತೆ ಪಕ್ಷ ಪುಟಿದೇಳುವುದರಲ್ಲಿ ಸಂದೇಹವಿಲ್ಲ ಎಂದು ಸಚಿವರು ಹೇಳಿದರು.

ಸಮಾರಂಭದಲ್ಲಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಎಂ.ಎ.ಗಫೂರ್, ಪ್ರಸಾದ್‌ರಾಜ್ ಕಾಂಚನ್, ರಮೇಶ್ ಕಾಂಚನ್, ಕಿಶನ್ ಶೆಟ್ಟಿ, ಹರೀಶ್ ಕಿಣಿ, ದೀಪಕ್ ಕೋಟ್ಯಾನ್, ಭುಜಂಗ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News