ಕೊಲ್ಲೂರು ಅಭಿವೃದ್ಧಿಗೆ ’ಮಾಸ್ಟರ್ ಫ್ಲ್ಯಾನ್’ : ಡಿಸಿಎಂ ಡಾ.ಜಿ.ಪರಮೇಶ್ವರ್
ಕುಂದಾಪುರ : ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್ ರವಿವಾರ ಬೆಳಗ್ಗೆ ಪತ್ನಿಯೊಂದಿಗೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅವರು ಚಂಡಿಕಾ ಹೋಮದಲ್ಲಿ ಪಾಲ್ಗೊಂಡರು.
ಪೂಜೆ ಬಳಿಕ ದೇವಾಲಯದ ಆಡಳಿತ ಮಂಡಳಿಯ ವತಿಯಿಂದ ಉಪಮುಖ್ಯಮಂತ್ರಿಗಳಿಗೆ ದೇವಿಯ ಪ್ರಸಾದ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.
ಈ ವೇಳೆ ’ವಾರ್ತಾಭಾರತಿ’ ಜೊತೆಗೆ ಮಾತನಾಡಿದ ಅವರು, ಕೊಲ್ಲೂರು ದೇವಸ್ಥಾನಕ್ಕೆ ಬರುವ ಭಕ್ತರಿಗೆ ದರ್ಶನ, ಪಾರ್ಕಿಂಗ್, ವಸತಿ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಕರ್ಯ ನಿಡುವ ನಿಟ್ಟಿನಲ್ಲಿ ಮಾಸ್ಟರ್ ಪ್ಲ್ಯಾನ್ ತಯಾರಿಸಲಾಗಿದ್ದು, ಮುಂದೆ ಅದನ್ನು ಕಾರ್ಯಗತಗೊಳಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಮುಜರಾಯಿ ಇಲಾಖೆಯ ದೇವಸ್ಥಾನಗಳಿಗೆ ಸಂಬಂಧಿಸಿ ಒತ್ತುವರಿ ಯಾಗಿರುವ ಎಲ್ಲ ಜಮೀನನ್ನು ತೆರವುಗೊಳಿಸಲು ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಅದೇ ರೀತಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ತಗ್ಗರ್ಸೆ, ಕಾರ್ಯನಿರ್ವ ಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಭಿಲಾಷ್ ಪಿ.ವಿ., ಸುರೇಂದ್ರ ಶೆಟ್ಟಿ, ರಘುರಾಮ್ ದೇವಾಡಿಗ, ಸುಧಾ ಕೆ., ಧನಾಕ್ಷಿ ಪೂಜಾರಿ, ಕಾಂಗ್ರೆಸ್ ಮುಖಂಡ ಹರಿಪ್ರಸಾದ್ ರೈ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.