ಡಾ. ಅಂಬೇಡ್ಕರ್ ಸ್ವಾಭಿಮಾನ ಬದುಕಿನ ಮೂಲ ಪ್ರೇರಣೆ: ಡಾ. ಎಕ್ಕಾರು
ಉಡುಪಿ: ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ಪರಿಕಲ್ಪನೆಯಿಂದಾಗಿ ಶಿಕ್ಷಣದಿಂದ ವಂಚಿತರಾದ ಪ್ರತಿಯೊಬ್ಬರು ಶಿಕ್ಷಣ ಪಡೆದುಕೊಳ್ಳಲು ಸಾಧ್ಯವಾಗುವುದರ ಜೊತೆಗೆ ಬದುಕನ್ನು ಸ್ವಾಭಿಮಾನ ಹಾಗೂ ಗೌರವಯುತವಾಗಿ ನಡೆಸಲು ಪ್ರೇರೇಪಿಸಿತು ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಹೇಳಿದ್ದಾರೆ.
ಸೋಮವಾರ ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಾರ್ಕೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಅಂಬೇಡ್ಕರ್ ಹಾಗೂ ಸಂವಿಧಾನದ ಕುರಿತು ತಿಳಿದುಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಅವರ ಕುರಿತ ಕಾರ್ಯಕ್ರಮಗಳು ಹೆಚ್ಚಿನ ಮಹತ್ವವನ್ನು ಹೊಂದಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದ ಅವರು, ಅಸ್ಪೃಶ್ಯತೆ ವಿರುದ್ಧ ಧ್ವನಿ ಎತ್ತುವ ಮೂಲಕ ಹಾಗೂ ತಮ್ಮ ಬರವಣಿಗೆ ಮತ್ತು ಹೋರಾಟದ ಮೂಲಕ ಜನರಲ್ಲಿ ಹೊಸ ಚಿಂತನೆಯನ್ನು ಮೂಡಿಸಿದರು ಎಂದರು.
ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಡಾ.ಪ್ರಸಾದ್ ರಾವ್ ಮಾತನಾಡಿ, ಗಾಂಧೀಜಿ ಹಾಗೂ ಅಂಬೇಡ್ಕರ್ ದೇಶದ ಅಭಿವೃದ್ಧಿ ಮತ್ತು ಸ್ವಾತಂತ್ರ್ಯಕ್ಕಾಗಿ ಅನೇಕ ಕೊಡುಗೆಗಳನ್ನು ನೀಡಿದ್ದು, ಇಂದಿನ ಯುವ ಪೀಳಿಗೆ ಅವರ ಸಿದ್ಧಾಂತ ಹಾಗೂ ಮಾರ್ಗದರ್ಶಗಳನ್ನು ಅನುಸರಿಸುವ ಮೂಲಕ ಹೊಣೆಗಾರಿಕೆಯ ಜೀವನವನ್ನು ನಡೆಸಿ ಉತ್ತಮ ಸಮಾಜವನ್ನು ರೂಪಿಸಲು ಮುಂದಾಗಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಭಾಸ್ಕರ ಶೆಟ್ಟಿ, ಪ್ರತಿಯೊಬ್ಬರ ಬದುಕಿನಲ್ಲಿ ಕಲಿಕೆ ಎಂಬುವುದು ನಿರಂತರ ಪ್ರಕ್ರಿಯೆಯಾಗಿದ್ದು, ಅಂಬೇಡ್ಕರ್ ದೇಶ ಕಂಡ ಶ್ರೇಷ್ಠ ಮೇಧಾವಿ. ಅವರ ಕುರಿತ ಅನೇಕ ವಿಚಾರಧಾರೆಗಳ ಅಧ್ಯಯನವು ನಮ್ಮಲ್ಲಿನ ಜ್ಞಾನವನ್ನು ವೃದ್ಧಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಅಯೋಜಿಸಲಾಗಿದ್ದ ಪ್ರಬಂಧ, ಭಾಷಣ, ರಸಪ್ರಶ್ನೆ, ಚಿತ್ರಕಲಾ ಮತ್ತು ಕವನ ರಚನೆ ಸ್ಪರ್ಧೆಯ ವಿಜೇತರಿಗೆ ಸಮಾರಂಭದಲ್ಲಿ ಬಹುಮಾನವನ್ನು ವಿತರಿಸಲಾಯಿತು. ಐಕ್ಯೂಎಸಿನ ಸಂಚಾಲಕಿ ಶೋಭಾ ಆರ್. ಉಪಸ್ಥಿತರಿದ್ದರು.
ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ಕಾರ್ಯಕ್ರಮ ಸಂಯೋಜಕಿ ಶೈಲಜಾ ನಿರೂಪಿಸಿದರು. ಸಾಂಸ್ಕೃತಿಕ ಸಂಚಾಲಕಿ ಲೋಲಾಕ್ಷಿ ವಂದಿಸಿದರು.