×
Ad

‘ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರಶಸ್ತಿ’ಗೆ ಡಾ.ವಿವೇಕ್ ರೈ ಆಯ್ಕೆ

Update: 2024-12-13 19:34 IST

ಡಾ. ವಿವೇಕ್ ರೈ 

ಉಡುಪಿ: ಕನ್ನಡದ ಹಿರಿಯ ಸಂಶೋಧಕ, ವಿಮರ್ಶಕ, ಅನುವಾದಕ, ತುಳು ಮತು ಜಾನಪದ ವಿದ್ವಾಂಸ ಹಾಗೂ ವಿಶ್ರಾಂತ ಕುಲಪತಿ ಗಳಾದ ಡಾ.ಬಿ.ಎ.ವಿವೇಕ್ ರೈ ಅವರನ್ನು ಬಸ್ರೂರಿನ ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನ ಸಾಧಕರಿಗೆ ನೀಡುವ ಈ ಬಾರಿಯ ‘ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ ಎಂದು ಬಿ.ಅಪ್ಪಣ್ಣ ಹೆಗ್ಡೆ ಜನ್ಮ ದಿನೋತ್ಸವ-90 ಸಮಿತಿಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹಾಗೂ ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ಅಧ್ಯಕ್ಷ ರಾಮ್‌ಕಿಶನ್ ಹೆಗ್ಡೆ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾಡಿನ ಶಿಕ್ಷಣ ಹಾಗೂ ಕೃಷಿ ಕ್ಷೇತ್ರದ ಸಾಧಕರಿಗೆ ಕಳೆದ ಕೆಲವು ವರ್ಷಗಳಿಂದ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ. ಡಾ.ಬಿ.ಎ. ವಿವೇಕ ರೈ ಅವರು ಕಳೆದ ಆರು ದಶಕಗಳಿಂದ ಅಧ್ಯಯನ, ಅಧ್ಯಾಪನ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದು, ಕನ್ನಡ ಹಾಗೂ ತುಳು ಭಾಷೆಯ ಅಭಿವೃದ್ಧಿಗಾಗಿ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ ಎಂದು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೈಸೂರು ವಿಶ್ವವಿದ್ಯಾನಿಲಯದ ಮಂಗಳೂರು ಸ್ನಾತಕೋತ್ತರ ಅಧ್ಯಯನ ಕೇಂದ್ರ ಹಾಗೂ ಮಂಗಳೂರು ವಿವಿಯ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆ ವಿಭಾಗದಲ್ಲಿ ಉಪನ್ಯಾಸಕ, ರೀಡರ್, ಪ್ರಾಧ್ಯಾಪಕ ಹಾಗೂ ವಿಭಾಗ ಮುಖ್ಯಸ್ಥರಾಗಿ ಡಾ.ರೈ, 34 ವರ್ಷಗಳ ಕಾಲ ಅಧ್ಯಾಪನ ಮತ್ತು ಸಂಶೋಧನಾ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ಹಂಪಿ ಕನ್ನಡ ವಿವಿಯ ಕುಲಪತಿಗಳಾಗಿ, ಮೈಸೂರಿನ ಕರ್ನಾಟಕ ಮುಕ್ತ ವಿವಿಯ ಕುಲಪತಿಗಳಾಗಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸ್ಥಾಪಕ ಅಧ್ಯಕ್ಷರಾಗಿ, ಜರ್ಮನಿಯ ವಿವಿಯ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ಸಾಹಿತ್ಯ ಅಕಾಡೆಮಿ, ತುಳು ಸಾಹಿತ್ಯ ಅಕಾಡೆಮಿ, ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಸೇರಿದಂತೆ 20ಕ್ಕೂ ಅದಿಕ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿರುವ ಇವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಜಾನಪದ ಸಮ್ಮೇಳನ, ಸಂಸ್ಕೃತಿ ಸಮ್ಮೇಳನ, ದೇಸಿ ಸಮ್ಮೇಳನದಂಥ ಹಲವು ಸಮ್ಮೇಳನಗಳು ನಡೆದಿವೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ಡಿ.24ರಂದು ಸಂಜೆ 6:00ಗಂಟೆಗೆ ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ನಡೆಯುವ ಬಿ.ಅಪ್ಪಣ್ಣ ಹ್ಡೆ-90 ಕಾರ್ಯಕ್ರಮದಲ್ಲಿ ಗಣ್ಯರ ಹಾಗೂ ಆಮಂತ್ರಿತರ ಉಪಸ್ಥಿತಿಯಲ್ಲಿ ‘ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರಶಸ್ತಿ’ ಪ್ರದಾನ ನಡೆಯಲಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News