×
Ad

ಗ್ಯಾರಂಟಿ ಯೋಜನೆ ಫಲಾನುಭವಿಗಳು ಸ್ವಸಹಾಯ ಗುಂಪು ರಚಿಸಿಕೊಳ್ಳಿ: ಪ್ರತೀಕ್ ಬಾಯಲ್ ಸಲಹೆ

Update: 2025-07-24 19:33 IST

ಉಡುಪಿ, ಜು.24: ಜಿಲ್ಲೆ ಮಹಿಳಾ ಸಬಲೀಕರಣದಲ್ಲಿ ಮುಂಚೂಣಿ ಯಲ್ಲಿದೆ. ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ ಮಾಡಿ ಕೊಡುವ ಉದ್ದೇಶ ಹೊಂದಿದ್ದು, ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಸೇರಿಕೊಂಡು ಸ್ವ-ಸಹಾಯ ಗುಂಪುಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಸಲಹೆ ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಗುರುವಾರ ನಡೆದ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾತನಾಡುತ್ತಾ ಅವರು ಈ ಸಲಹೆ ನೀಡಿದರು.

ಸ್ವಸಹಾಯ ಗುಂಪುಗಳ ಮೂಲಕ ಫಲಾನುಭವಿಗಳು, ಸರಕಾರದ ವಿವಿಧ ಯೋಜನೆಗಳ ಸಹಕಾರ ದೊಂದಿಗೆ ಹೈನುಗಾರಿಕೆ, ಕುಕ್ಕುಟೋದ್ಯಮ ಸೇರಿದಂತೆ ವಿವಿಧ ಸ್ವಉದ್ಯೋಗಗಳನ್ನು ಮಾಡಬಹು ದಾಗಿದೆ. ಅಲ್ಲದೇ ಸಣ್ಣ ಪುಟ್ಟ ಸಿವಿಲ್ ವರ್ಕ್‌ಗಳನ್ನು ಸಹ ಮಾಡಲು ಮಹಿಳೆಯರು ಮುಂದೆ ಬರಬೇಕು ಎಂದು ಅವರು ಕರೆ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು, ಪಂಚ ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರ ಕಷ್ಟಕಾರ್ಪಣ್ಯ ಗಳು ಕಡಿಮೆಯಾಗಿ ನೆಮ್ಮದಿಯ ಬದುಕಿಗೆ ಸಹಾಯವಾಗಿದೆ. ಹೀಗಾಗಿ ಸಮಾಜ ದಲ್ಲಿ ಈ ಯೋಜನೆಯ ಫಲಾನುಭವಿಯಾಗಲು ಅರ್ಹತೆ ಹೊಂದಿರುವ ಪ್ರತಿಯೊಬ್ಬರಿಗೂ ಯೋಜನೆಗಳನ್ನು ತಲುಪಿಸಿ ಎಂದು ತಿಳಿಸಿದರು.

ಪಂಚ ಗ್ಯಾರಂಟಿ ಯೋಜನೆಗಳನ್ನು ಸರಕಾರ ಎರಡು ವರ್ಷಗಳ ಹಿಂದೆ ಜಾರಿಗೆ ತಂದಿದೆ. ಕಳೆದೆರಡು ವರ್ಷಗಳಿಂದ ನಿರಂತರವಾಗಿ ಇವುಗಳನ್ನು ಜನಸಾಮಾನ್ಯರಿಗೆ ತಲುಪಿಸಲಾಗುತ್ತಿದೆ. ಅದಕ್ಕಾಗಿ ಈ ಬಾರಿಯ ಬಜೆಟ್‌ನಲ್ಲಿ 51,034 ಕೋಟಿ ರೂ. ಮೊತ್ತದ ಅನುದಾನವನ್ನು ಮೀಸಲಿಟ್ಟಿದೆ. ಈ ಯೋಜನೆ ಪ್ರತಿಯೊಬ್ಬರಿಗೂ ತಲುಪಿಸುವಂತೆ ಪ್ರತಿಯೊಂದು ಇಲಾಖೆಗಳು ಕಾರ್ಯನಿರ್ವಹಿಸಬೇಕು ಎಂದರು.

ಗ್ಯಾರಂಟಿ ಯೋಜನೆಗಳ ಸಮಸ್ಯೆಗಳ ಕುರಿತಂತೆ ಯಾವುದೇ ಫಲಾನುಭವಿ ಯಿಂದ, ಯಾವುದೇ ರೀತಿಯ ಸಮಸ್ಯೆಗಳ ಕುರಿತು ದೂರುಗಳು ಬಂದಲ್ಲಿ ಕೂಡಲೇ ಅವುಗಳಿಗೆ ಸ್ಪಂದಿಸುವ ಕೆಲಸವನ್ನು ಅಧಿಕಾರಿಗಳು ಆದ್ಯತೆಯ ಮೇಲೆ ಮಾಡಬೇಕು ಎಂದು ಅಶೋಕ್ ಕೊಡವೂರು ತಿಳಿಸಿದರು.

ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಗಳಿಗೆ ಪ್ರತೀ ತಿಂಗಳು 2,000 ರೂ. ಸಿಗುತಿದ್ದು, ಮಧ್ಯದಲ್ಲಿ ಒಂದೆರಡು ತಿಂಗಳ ಹಣ ಬಂದಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಇವುಗಳಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸ್ಪಂದಿಸಬೇಕು ಎಂದೂ ಅವರು ಹೇಳಿದರು.

ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲು ಈ ಹಿಂದೆ ಕೆಎಸ್ಸಾರ್ಟಿಸಿ ಬಸ್‌ಗಳನ್ನು ಜಿಲ್ಲೆಯ ಗ್ರಾಮೀಣ ಪ್ರದೇಶಗಳಿಗೆ ನಿಯೋಜಿಸಲಾಗಿತ್ತು. ಆದರೆ ಕೋವಿಡ್ ಸಂದರ್ಭದಲ್ಲಿ ಇವುಗಳ ಸಂಚಾರ ನಿಂತುಹೋಗಿತ್ತು. ಇದರಿಂದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಹಾಗೂ ನಿತ್ಯ ಸಂಚರಿಸುವ ಮಹಿಳೆಯರು ಸೇರಿದಂತೆ ಉದ್ಯೋಗಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಆದಷ್ಟು ಶೀಘ್ರದಲ್ಲಿಯೇ ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಕೆಎಸ್ಸಾರ್ಟಿಸಿ ಸಂಸ್ಥೆಯ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ನಿಂತಿರುವ ಬಸ್‌ಗಳ ಸಂಚಾರವನ್ನು ಪುನರಾರಂಭಿಸಬೇಕು ಎಂದರು.

ಬ್ರಹ್ಮಾವರ ತಾಲೂಕು ಕೊಕ್ಕರ್ಣೆ ಗ್ರಾಪಂ ವ್ಯಾಪ್ತಿಯ ಹೊರ್ಲಾಡಿ ಗ್ರಾಮವು ಗುಡ್ಡಗಾಡು ಪ್ರದೇಶದಿಂದ ಕೂಡಿದ್ದು, ಸುಮಾರು 250ಕ್ಕೂ ಹೆಚ್ಚು ಮನೆಗಳಿವೆ. ಇಲ್ಲಿ ನ್ಯಾಯಬೆಲೆ ಅಂಗಡಿಯಿಲ್ಲದೆ ಪಡಿತರ ಪಡೆ ಯಲು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಬ್ರಹ್ಮಾವರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಡಾ.ಸುನಿತಾ ಶೆಟ್ಟಿ ಸಭೆಯ ಗಮನಕ್ಕೆ ತಂದರು.

ಇದಕ್ಕೆ ಉತ್ತರಿಸಿದ ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು, ಇಂತಹ ಪ್ರದೇಶ ವ್ಯಾಪ್ತಿಯಲ್ಲಿ ಪಡಿತರ ಸಂಖ್ಯೆಯನ್ನು ಆಧರಿಸಿ, ನಿಯಮಾನುಸಾರ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮವಹಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಕುರಿತ ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಗೀತಾ ವಾಗ್ಳೆ, ಸಂತೋಷ್ ಕುಲಾಲ್ ಹಾಗೂ ಸತೀಶ್, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಡಾ.ಸುನೀತಾ ಶೆಟ್ಟಿ, ನವೀನ್‌ಚಂದ್ರ, ಹರಿಪ್ರಸಾದ್ ಶೆಟ್ಟಿ, ಅಜಿತ್ ಹೆಗ್ಡೆ, ಶಂಕರ್ ಶೇರಿಗಾರ್ ಹಾಗೂ ಮೋಹನ್ ಪೂಜಾರಿ ಉಪ್ಪುಂದ, ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News