×
Ad

5 ದಿನಗಳ ಕಾಲ ಭಾರೀ ಮಳೆಯ ನಿರೀಕ್ಷೆ: ರಾಜ್ಯ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ

Update: 2024-10-15 19:39 IST

ಉಡುಪಿ, ಅ.15: ಅರಬಿಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಮುಂದಿನ ಐದು ದಿನಗಳ ಕಾಲ ಕರಾವಳಿ ಕರ್ನಾಟಕದ ಹೆಚ್ಚಿನ ಕಡೆಗಳಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ತಿರುವನಂತಪುರ ಕೇಂದ್ರ ಮುನ್ಸೂಚನೆ ನೀಡಿದೆ.

ರಾಜ್ಯ ಕರಾವಳಿಯ ಮೂರು ಜಿಲ್ಲೆಗಳಿಗೆ ಮುಂದಿನೆರಡು ದಿನ ಆರೆಂಜ್ ಅಲರ್ಟ್‌ನ್ನು ಘೋಷಿಸಲಾಗಿದೆ. ಅ.16ರಿಂದ 19ರವರೆಗೆ ಗಂಟೆಗೆ 35ರಿಂದ 45 ಕಿ.ಮೀ. ವೇಗದ ಗಾಳಿಯು ಬೀಸಲಿದ್ದು, ಕಡಲು ಪ್ರಕ್ಷುಬ್ಧವಾಗಿರಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆಯನ್ನೂ ನೀಡಲಾಗಿದೆ.

ರಾಜ್ಯ ಕರಾವಳಿಯ ಕಾರವಾರ, ಮಂಗಳೂರು, ಪಣಂಬೂರು, ಹೊನ್ನಾವರ, ಭಟ್ಕಳ, ಗಂಗೊಳ್ಳಿ, ಮಲ್ಪೆ ಬಂದರುಗಳಲ್ಲಿ ನಂ.7 ಎಚ್ಚರಿಕೆಯನ್ನು ಹಾರಿಸುವಂತೆ ಸೂಚಿಸಲಾಗಿದೆ. ಒಂದರಿಂದ ಒಂದೂವರೆ ಮೀ.ಎತ್ತರದ ಅಲೆಗಳು ದಡವನ್ನು ಅಪ್ಪಳಿಸುವ ಸಾಧ್ಯತೆ ಇದೆ ಎಂದು ಸೂಚಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು ಬೆಳಗಿನಿಂದ ತುಂತುರು ಮಳೆ ಸುರಿಯುತಿದ್ದು, ಮಧ್ಯಾಹ್ನದ ಬಳಿಕ ಜೋರಾಗಿ ಸುರಿಯ ತೊಡಗಿತ್ತು. ಸಂಜೆ ಹಾಗೂ ರಾತ್ರಿ ಮಳೆಯ ಬಿರುಸು ಜೋರಾಗಿದೆ. ಹೀಗಾಗಿ ವಾತಾವರಣ ತಂಪಾಗಿದ್ದು ಚಳಿಗಾಲದ ಅನುಭವ ನೀಡುತ್ತಿದೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸೂಚನೆ: ರಾಜ್ಯ ಕರಾವಳಿಯಲ್ಲಿ ಮುಂದಿನ ಐದು ದಿನಗಳ ಕಾಲ ಅಧಿಕ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾದಿಕಾರವು ಮುಂಜಾಗ್ರತಾ ಕ್ರಮವಾಗಿ ಹಲವು ಸೂಚನೆಗಳನ್ನು ನೀಡಿದೆ.

ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡೆಲ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿರ್ವಹಣೆ ಮಾಡಬೇಕು. ಪ್ರವಾಸಿಗರು, ಸಾರ್ವಜನಿಕರು, ಮೀನುಗಾರರು ನದಿ, ಜಲಪಾತ, ನೀರಿರುವ ಪ್ರದೇಶ ಹಾಗೂ ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News