ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ: ಲಕ್ಷ್ಮೀ ಹೆಬ್ಬಾಳ್ಕರ್
ಮಜೂರು ಗ್ರಾಪಂನ ನವೀಕೃತ ಸಭಾಭವನ ಉದ್ಘಾಟನೆ
ಕಾಪು, ಆ.೧೫: ಭಾರತ ಹಳ್ಳಿಗಳ ದೇಶ. ಇಲ್ಲಿ ಪ್ರತಿ ಗ್ರಾಮ ಅಭಿವೃದ್ಧಿ ಯಾದರೆ, ದೇಶ ಅಭಿವೃದ್ಧಿಯಾದಂತೆ. ಗ್ರಾಮಗಳ ವಿಕಸನವೇ ರಾಜೀವ್ ಗಾಂಧಿ ಅವರ ಕನಸಾಗಿತ್ತು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಕಾಪು ತಾಲೂಕು ಪಂಚಾಯತ್ ಗಳ ವತಿಯಿಂದ ಮಜೂರು ಗ್ರಾಮ ಪಂಚಾಯತ್‌ನ ನವೀಕೃತ ಸಭಾ ಭವನ ವನ್ನು ಉದ್ಘಾಟಿಸಿ, ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ವಿವಿಧ ಸವಲತ್ತುಗಳನ್ನು ವಿತರಿಸಿ ಅವರು ಮಾತನಾಡುತಿದ್ದರು.
ಗ್ರಾಮ ಪಂಚಾಯಿತ್‌ಗಳಲ್ಲಿ ರಾಜಕೀಯ ಮಾಡಬಾರದು. ಇದಕ್ಕಾಗಿಯೇ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷಗಳ ಚಿಹ್ನೆ ಇರುವುದಿಲ್ಲ ಎಂದರು.
ಪ್ರತಿ ಸಮುದಾಯದ ಸೇವೆಯಲ್ಲಿ ಪಂಚಾಯತ್ ಸದಸ್ಯರು ಮತ್ತು ಅಧಿಕಾರಿಗಳ ಹೊಣೆಗಾರಿಕೆ ಅತ್ಯಂತ ಪ್ರಮುಖವಾದದ್ದು. ಇದು ಪರಿಣಾಮಕಾರಿ ಆಡಳಿತ, ಸಮುದಾಯ ಸಹಭಾಗಿತ್ವ ಮತ್ತು ಸುಸ್ಥಿರ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದರು.
ರಾಜೀವ ಗಾಂಧಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ವಿಕೇಂದ್ರೀಕರಣ ವ್ಯವಸ್ಥೆಯನ್ನು ಜಾರಿಗೆ ತಂದರು. ಗ್ರಾಮಗಳು ಸಬಲೀಕರಣಗೊಂಡಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಅವರು ಬಲವಾಗಿ ನಂಬಿದ್ದರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅಧಿಕಾರಾವಧಿಯಲ್ಲಿ ಸಹ ಪಂಚಾಯತ್ ವ್ಯವಸ್ಥೆಗೆ ಬಲ ತುಂಬಲಾಯಿತು. ನರೇಗಾ ಯೋಜನೆ ಬಂದ ನಂತರ ಗ್ರಾಮ ಪಂಚಾಯತ್‌ಗಳ ಬಲವರ್ಧನೆಯಾಗಿದೆ. ಬೀದಿ ದೀಪಗಳ ಬಿಲ್ ತುಂಬುವ ಶಕ್ತಿಯೂ ಇಲ್ಲದ ಪಂಚಾಯಿತಿಗಳು ಇಂದು ಸಾಕಷ್ಟು ಅನುದಾನ ಪಡೆಯುತ್ತಿವೆ ಎಂದರು.
ಕಾರ್ಯಕ್ರಮದಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಉಪ ವಿಭಾಗಧಿಕಾರಿ ರಶ್ಮಿ, ತಹಶೀಲ್ದಾರ್ ಡಾ.ಪ್ರತಿಭಾ, ತಾಲೂಕು ಪಂಚಾಯತ್ ಇಒ ಜೇಮ್ಸ್ ಡಿ’ಸಿಲ್ವ, ಗ್ರಾಪಂ ಅಧ್ಯಕ್ಷ ಪ್ರಸಾದ್ ಶೆಟ್ಟಿ ವಳದೂರು ಮುಂತಾದವರು ಉಪಸ್ಥಿತರಿದ್ದರು.