×
Ad

ಹಳ್ಳಿಗಳ ಸುಧಾರಣೆ ಗ್ರಾಪಂಗಳಿಂದ ಮಾತ್ರ ಸಾಧ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Update: 2023-08-15 19:45 IST

ಉಡುಪಿ, ಆ.15: ಹಳ್ಳಿಗಳ ಸುಧಾರಣೆ ಗ್ರಾಮ ಪಂಚಾಯತ್‌ಗಳಿಂದ ಮಾತ್ರ ಸಾಧ್ಯ. ಹೀಗಾಗಿ ಗ್ರಾಮ ಪಂಚಾಯತ್‌ ಗಳಿಗೆ ಹೆಚ್ಚಿನ ಶಕ್ತಿ ತುಂಬಿದಾಗ ಹಳ್ಳಿಗಳು ಉದ್ಧಾರವಾಗುತ್ತವೆ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅಭಿಪ್ರಾಯಪಟ್ಟಿದ್ದಾರೆ.

ಕುಂದಾಪುರ ತಾಲೂಕಿನ ಹಾರ್ದಳ್ಳಿ-ಮಂಡಳ್ಳಿ ಗ್ರಾಮಪಂಚಾಯತ್‌ನ ನೂತನ ಕಟ್ಟಡವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಹಳ್ಳಿಗಳ ಅಭಿವೃದ್ಧಿಯಿಂದಷ್ಟೇ ದೇಶದ ಅಭಿವೃದ್ಧಿ ಸಾಧ್ಯ ಎಂದು ಮಹಾತ್ಮಾ ಗಾಂಧೀಜಿ ಹೇಳಿದ್ದರು. ಗ್ರಾಮ ಪಂಚಾಯತ್‌ ಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಶಕ್ತಿ ತುಂಬಿದರೆ ಆ ಮೂಲಕ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಸಚಿವೆ ಹೇಳಿದರು.

ಜಿಲ್ಲೆಯಲ್ಲಿ ಒಬ್ಬರೂ ಕಾಂಗ್ರೆಸ್ ಶಾಸಕ ಇಲ್ಲದೇ ಇದ್ದರೂ, ಅಭಿವೃದ್ಧಿ ಕುರಿತಂತೆ ಎಲ್ಲಾ ಶಾಸಕರೊಂದಿಗೆ ಚರ್ಚಿಸಿ, ಅವರ ಸಲಹೆ ಪಡೆದೇ ಯೋಜನೆಗಳನ್ನು ಜಾರಿಗೆ ತರಲಾಗುವುದು. ಪ್ರಸ್ತುತ ನಮ್ಮ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗ ಪಡಿಸಿಕೊಳ್ಳುವಂತೆ ಅದರಲ್ಲೂ ಮಹಿಳೆಯರು ಇದರ ಲಾಭ ಪಡೆದುಕೊಳ್ಳುವಂತೆ ಸಚಿವರು ತಿಳಿಸಿದರು.

ಕುಂದಾಪುರ ಶಾಸಕ ಕಿರಣ್‌ಕುಮಾರ್ ಕೊಡ್ಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಹೆಚ್., ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮಿ, ತಾಪಂ ಕಾರ್ಯ ನಿರ್ವಹಣಾಧಿಕಾರಿ ಭಾರತಿ, ಹಾರ್ದಳ್ಳಿ ಮಂಡಳ್ಳಿ ಗ್ರಾಪಂ ಅಧ್ಯಕ್ಷ ಜಗನ್ನಾಥ ಶೆಟ್ಟಿ ಚಿಟ್ಟೆಬೈಲು, ಗ್ರಾಪಂ ಸದಸ್ಯರು, ದಿನೇಶ್ ಹೆಗ್ಡೆ ಮೊಳಹಳ್ಳಿ, ಮುನಿಯಾಲು ಉದಯಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ, ಇತ್ತೀಚೆಗೆ ಬೈಂದೂರಿನಲ್ಲಿ ನಡೆದ ಮೀನುಗಾರಿಕಾ ದೋಣಿ ದುರಂತದಲ್ಲಿ ಮೃತಪಟ್ಟ ಸತೀಶ್ ಖಾರ್ವಿ ಕುಟುಂಬಕ್ಕೆ ಮೀನುಗಾರಿಕೆ ಇಲಾಖೆ ವತಿಯಿಂದ ನೀಡಲಾದ ಆರು ಲಕ್ಷ ರೂ.ಗಳ ಪರಿಹಾರದ ಚೆಕ್‌ನ್ನು ಸಚಿವೆ ಮೃತರ ಕುಟುಂಬಕ್ಕೆ ವಿತರಿಸಿದರು.

ಹಾರ್ದಳ್ಳಿ-ಮಂಡಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಶೆಟ್ಟಿ ಚಿಟ್ಟೆಬೈಲು ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿದ್ಕಲ್‌ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಅಧ್ಯಾಪಕ ಸತೀಶ್ ಶೆಟ್ಟಿಗಾರ್ ಸ್ವಾಗತಿಸಿದರು. ಗ್ರಾಪಂ ಪಿಡಿಓ ರೇಖಾ ವಂದಿಸಿದರೆ ಅಕ್ಷಯ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.


 






 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News