ಅ.2ರಂದು ಜನಜಾಗೃತಿ ಜಾಥಾ, ಸಮಾವೇಶ
ಉಡುಪಿ, ಅ.1: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಜನಜಾಗೃತಿ ವೇದಿಕೆಯ ವತಿಯಿಂದ ವ್ಯಸನ ಮುಕ್ತ ಸಮಾಜ ನಿರ್ಮಾಣದ ಪರಿಕಲ್ಪನೆಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನಾಳೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ದಲ್ಲಿ ಜನಜಾಗೃತಿ ಜಾಥಾ ಹಾಗೂ ಸಮಾವೇಶ ನಡೆಯಲಿದೆ ಎಂದು ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಸತ್ಯಾನಂದ ನಾಯಕ್ ತಿಳಿಸಿದ್ದಾರೆ.
ಜಾಥಾವು ನಾಳೆ ಬೆಳಗ್ಗೆ 9ಗಂಟೆಗೆ ಉಡುಪಿ ಬೋರ್ಡ್ ಹೈಸ್ಕೂಲ್ ಆವರಣದಿಂದ ಪ್ರಾರಂಭಗೊಳ್ಳಲಿದೆ. ಬಳಿಕ 10:30ರಿಂದ ಸಭೆಯು ರಾಜಾಂಗಣದಲ್ಲಿ ನಡೆಯಲಿದೆ ಎಂದವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇದರಲ್ಲಿ 2000 ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಪರ್ಯಾಯ ಶ್ರೀಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರ್ ಭಾಗವಹಿಸಲಿದ್ದಾರೆ.
ಖ್ಯಾತ ಮನೋರೋಗ ತಜ್ಞ ಡಾ.ಪಿ.ವಿ.ಭಂಡಾರಿ ಅವರು ಆಶಯ ಭಾಷಣ ಮಾಡಲಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಜನ ಜಾಗೃತಿ ವೇದಿಕೆಯ ಮಾಜಿ ರಾಜ್ಯಾಧ್ಯಕ್ಷ ದೇವದಾಸ ಹೆಬ್ಬಾರ್, ಜಿಲ್ಲಾ ನಿರ್ದೇಶಕ ಶಿವರಾಯ ಪ್ರಭು, ಶಿವಕುಮಾರ್ ಅಂಬಲಪಾಡಿ, ತಾಲೂಕು ಯೋಜನಾಧಿಕಾರಿ ರಾಮ ಎಂ. ಉಪಸ್ಥಿತರಿದ್ದರು.