×
Ad

ಉಡುಪಿ: ನ.8ರಂದು 538ನೇ ಕನಕದಾಸ ಜಯಂತಿ ಆಚರಣೆ

Update: 2025-11-05 21:46 IST

ಉಡುಪಿ: ಉಡುಪಿ ಜಿಲ್ಲಾ ಶ್ರೀಕನಕದಾಸ ಸಮಾಜ ಸೇವಾ ಸಂಘ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಮಠದ ಜಂಟಿ ಆಶ್ರಯದಲ್ಲಿ ಕನಕದಾಸರ 538ನೇ ಜಯಂತಿ ಮಹೋತ್ಸವ ಹಾಗೂ 351 ಕುಂಭ ಕಲಶ ಮೆರವಣಿಗೆ ನ.8ರಂದು ಉಡುಪಿಯಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಸಿದ್ದರಾಜು ಕೆ.ಎಸ್. ತಿಳಿಸಿದ್ದಾರೆ.

ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಉಡುಪಿ ಅಜ್ಜರಕಾಡಿನ ಭುಜಂಗ ಪಾರ್ಕ್‌ನಲ್ಲಿ ಜಿಲ್ಲಾಡಳಿತದ ವತಿಯಿಂದ ಕನಕದಾಸರ ಜಯಂತಿ ಕಾರ್ಯಕ್ರಮ ನಡೆಯಲಿದೆ ಎಂದರು.

ಬಳಿಕ ಬೆಳಗ್ಗೆ 11ಗಂಟೆಗೆ ಉಡುಪಿ ಜೋಡುಕಟ್ಟೆಯಲ್ಲಿ ಕುಂಭ ಕಲಶ ಮೆರವಣಿಗೆಗೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪ್ರಭಾವತಿ ಕೆ.ಆರ್ ಚಾಲನೆ ನೀಡಲಿದ್ದಾರೆ. ಮೆರವಣಿಗೆ ಜೋಡುಕಟ್ಟೆಯಿಂದ ಶ್ರೀಕೃಷ್ಣಮಠದ ಕನಕದಾಸ ಮಂದಿರದವರೆಗೆ ಸಾಗಿಬರಲಿದೆ ಎಂದರು.

ಅಪರಾಹ್ನ 1:00 ಗಂಟೆಗೆ ಕನಕದಾಸರ ಮೂರ್ತಿಗೆ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಆ ಬಳಿಕ 1:30ಕ್ಕೆ ರಾಜಾಂಗಣದಲ್ಲಿ ನಡೆಯುವ ಸಭಾಕಾರ್ಯಕ್ರಮದಲ್ಲಿ ಪುತ್ತಿಗೆ ಯತಿ ದ್ವಯರು ಆಶೀರ್ವಚನ ನೀಡಲಿದ್ದಾರೆ. ಶಾಸಕ ಯಶ್‌ಪಾಲ್ ಸುವರ್ಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘದ ಅಧ್ಯಕ್ಷ ಹನುಮಂತ ಎಸ್. ಡೊಳ್ಳಿನ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಉದ್ಯಮಿ ಕೆ. ಕೃಷ್ಣಮೂರ್ತಿ ಆಚಾರ್ಯ ಅವರಿಗೆ ‘ಭಕ್ತ ಕನಕ ಪುರಸ್ಕಾರ’ ಪ್ರದಾನ ಮಾಡಲಾಗುವುದು. ಸ್ಥಳೀಯ ಜನಪ್ರತಿನಿಧಿಗಳು, ಗಣ್ಯರು ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಹನುಮಂತ ಎಸ್. ಡೊಳ್ಳಿನ, ಪ್ರಧಾನ ಕಾರ್ಯದರ್ಶಿ ಸಂಗಮೇಶ ಬ. ಆಸಂಗಿ, ಜೊತೆ ಕಾರ್ಯದರ್ಶಿ ದೇವು ಎಸ್. ಪೂಜಾರ, ಬ್ರಹ್ಮಾವರ ತಾಲೂಕು ಅಧ್ಯಕ್ಷ ಮಹಾಂತೇಶ್ ಕಾಟಾಪುರ, ಸಲಹೆಗಾರರಾದ ಮುತ್ತಪ್ಪ ಕುರಿ, ಬಸವರಾಜ ಕುರುಬ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News