ಕೊಲ್ಲೂರು ಅಪಘಾತದಲ್ಲಿ ಮೃತಪಟ್ಟ ಕೇರಳದ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಬಂಧನ
ಕೊಲ್ಲೂರು: ಕೊಲ್ಲೂರು ದಳಿ ಎಂಬಲ್ಲಿ ಮೇ 17ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೇರಳ ಮೂಲದ ಮಹಿಳೆಯ ಮೈಮೇಲಿದ್ದ ಚಿನ್ನಾಭರಣಗಳನ್ನು ಕಳವುಗೈದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಕೊಲ್ಲೂರು ಗ್ರಾಮದ ಕಲ್ಯಾಣಿಗುಡ್ಡೆಯ ನಿವಾಸಿ ಹೇಮಂತ್ (40) ಬಂಧಿತ ಆರೋಪಿ. ಈತನಿಂದ 3.910 ಗ್ರಾಂ ತೂಕದ ಉಂಗುರ, 3.450 ಗ್ರಾಂ ತೂಕದ ಬಳೆ ಹಾಗೂ 7.160 ಗ್ರಾಂ ತೂಕದ ಚಿನ್ನದ ಸರ ಸೇರಿದಂತೆ ಒಟ್ಟು ಸುಮಾರು 2.07 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮೇ 17ರಂದು ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಈ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಮೃತಪಟ್ಟ ಮಹಿಳೆಯೊಬ್ಬರ ಮೈಮೇಲಿದ್ದ ಚಿನ್ನಾಭರಣಗಳನ್ನು ಯಾರೋ ಕಳವು ಮಾಡಿರುವುದಾಗಿ ಶ್ರೀಕುಮಾರ್ ನೀಡಿದ ದೂರಿನ ಮೇರೆಗೆ ಮತ್ತೊಂದು ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ವಿನಯ ಎಂ. ಕೊರ್ಲಹಳ್ಳಿ ನೇತೃತ್ವದ ತಂಡವು ಸಿಸಿಟಿವಿ ದೃಶ್ಯಾವಳಿ, ಸಾರ್ವಜನಿಕರು ತೆಗೆದ ಛಾಯಾಚಿತ್ರಗಳು ಹಾಗೂ ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.