ವಿದ್ಯುತ್ ವ್ಯತ್ಯಯ: ಕುಂಜಾರುಗಿರಿ ಗ್ರಾಮಸ್ಥರಿಂದ ಮೆಸ್ಕಾಂ ವಿರುದ್ಧ ಪ್ರತಿಭಟನೆ
ಶಿರ್ವ: ಕುರ್ಕಾಲು ಗ್ರಾಮ ಪಂಚಾಯತ್ ಕುಂಜಾರುಗಿರಿಯ ಬಿಳಿಯಾರು ಪರಿಸರದಲ್ಲಿ ಸುಮಾರು 4 ದಿನಗಳಿಂದ ವಿದ್ಯುತ್ ಸಂಪರ್ಕ ಇಲ್ಲದೆ ಗ್ರಾಮಸ್ಥರು ಪರದಾಡುತ್ತಿದ್ದು, ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಮೆಸ್ಕಾಂ ವಿರುದ್ಧ ಗ್ರಾಮಸ್ಥರು ಇಂದು ಶಿರ್ವ ಮೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ವಿದ್ಯುತ್ ಸಂಪರ್ಕ ಇಲ್ಲದೆ ನೀರಿನ ಅಭಾವದ ಜೊತೆಗೆ ಮನೆಯ ಫ್ರಿಜ್ ನಲ್ಲಿಟ್ಟಿದ್ದ ದಿನಬಳಕೆಯ ಸಾಮಗ್ರಿಗಳು ಕೂಡ ಹಾಳಾಗಿವೆ. ರಾತ್ರಿಯಿಡಿ ನಿದ್ದೆ ಇಲ್ಲದೆ ಜನರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿದರೂ ಯಾವುದೇ ಸ್ಪಂದನೆ ನೀಡಿಲ್ಲ ಎಂದು ಗ್ರಾಮಸ್ಥರು ದೂರಿದರು.
ಈ ಸಂದರ್ಭದಲ್ಲಿ ಮೆಸ್ಕಾಂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಮತ್ತು ಕುರ್ಕಾಲು ಗ್ರಾಪಂ ಜನಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸಿದರು. ಕುರ್ಕಾಲು ಗ್ರಾಪಂ ಮಾಜಿ ಅಧ್ಯಕ್ಷ ಮಹೇಶ್ ಶೆಟ್ಟಿ ಬಿಳಿಯಾರು ಮೆಸ್ಕಾಂ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಮೆಸ್ಕಾಂ ಸಿಬ್ಬಂದಿ ಕೊರತೆಯಿಂದಾಗಿ ಸಮಸ್ಯೆ ಆಗಿದೆ. ಮುಂದಿನ ದಿನಗಳಲ್ಲಿ ಯಾವುದೇ ತೊಂದರೆ ಆಗದ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ. ಈ ಭಾಗದಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನೇಮಿಸಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಮೆಸ್ಕಾಂ ಅಧಿಕಾರಿಗಳು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯರಾದ ಎಂ.ಜಿ.ನಾಗೇಂದ್ರ, ಸುರೇಶ್ ಕುರ್ಕಾಲು ಹಾಗೂ ಗ್ರಾಮಸ್ಥರು ಹಾಜರಿದ್ದರು.