ಮುಂಗಾರು ಬೆಳೆ ಸಮೀಕ್ಷೆ: ಆಕ್ಷೇಪಣೆ ಆಹ್ವಾನ
ಉಡುಪಿ : ಜಿಲ್ಲೆಯಲ್ಲಿ ಜಿ.ಪಿ.ಎಸ್ ಆಧಾರಿತ 2025-26ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವನ್ನು ಖಾಸಗಿ ನಿವಾಸಿಗಳ ಮೂಲಕ ಕೈಗೊಳ್ಳಲಾಗುತ್ತಿದ್ದು, ಮಾಹಿತಿಯನ್ನು ಪ್ರಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಳೆ ವಿಮೆ ಯೋಜನೆ ಅನುಷ್ಠಾನ, ಬೆಳೆ ಸಾಲ, ಪಹಣಿಯಲ್ಲಿ ಬೆಳೆ ವಿವರ ದಾಖಲೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ ಹಾಗೂ ಕೃಷಿ/ತೋಟಗಾರಿಕೆ/ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ ಬಳಸಲಾಗುವುದು.
ಬೆಳೆ ಸಮೀಕ್ಷೆಯಲ್ಲಿ ನಮೂದಾದ ಬೆಳೆಗಳ ಬಗ್ಗೆ ರೈತರಿಗೆ ಆಕ್ಷೇಪಣೆಗಳಿದ್ದಲ್ಲಿ ಗೂಗಲ್ ಪ್ಲೇನಲ್ಲಿ ಲಭ್ಯವಿರುವ -Bele Darshak-2025-26 ಆ್ಯಪ್‌ನ್ನು ಡೌನ್‌ಲೋಡ್ ಮಾಡಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ರೈತರಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಸಂಬಂಧಿಸಿದ ಗ್ರಾಮದ ಮೇಲ್ವಿಚಾರಕರಿಂದ ಪರಿಶೀಲಿಸಿ ಆಕ್ಷೇಪಣೆಗಳನ್ನು ಇತ್ಯರ್ಥಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಂಟಿ ಕೃಷಿ ನಿರ್ದೇಕರ ಕಚೇರಿ ಪ್ರಕಟಣೆ ತಿಳಿಸಿದೆ.