ಉಡುಪಿ, ನ.25: ಎಚ್‌ಐವಿ/ಏಡ್ಸ್ ನಿಯಂತ್ರಣ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಮಹತ್ವದ ಸಾಧನೆ ಮಾಡಿರುವ ಉಡುಪಿ ಜಿಲ್ಲೆಗೆ ರಾಷ್ಟ್ರ ಮಟ್ಟದ ಮನ್ನಣೆ ದೊರೆತಿದೆ.

ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (ಎನ್‌ಎಸಿಓ)ವತಿಯಿಂದ ದೇಶಾದ್ಯಂತ ಹಮ್ಮಿಕೊಳ್ಳಲಾಗಿರುವ ಮೊಬಿಲೈಸೇಷನ್ ಫಾರ್ ಏಡ್ಸ್ ಸುರಕ್ಷಾ ಉಪ ಕ್ರಮದಡಿ ನಿಗದಿಪಡಿಸಿರುವ 95-95-95 ಗುರಿಗಳನ್ನು ಸಾಧಿಸಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ‘ಸುರಕ್ಷಿತ್’ ಸ್ಥಾನಮಾನ ಲಭಿಸಿದೆ.

ಈ ಸಾಧನೆಗಾಗಿ ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಪ್ರಯತ್ನಗಳನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ರಿತು ಶರ್ಮಾ ಅವರು ಶ್ಲಾಘಿಸಿದ್ದಾರೆ.

2026ರ ನವೆಂಬರ್ 18ರಂದು ಹೊರಡಿಸಿರುವ ಅಧಿಕೃತ ಪತ್ರದಲ್ಲಿ ಜಿಲ್ಲೆ ಸಾಧಿಸಿರುವ ಈ ಮಹತ್ವದ ಸಾಧನೆ ಯನ್ನು ಅಭಿನಂದಿಸಿ, ಅಧಿಕಾರಿಗಳ ತಂಡದ ಕಾರ್ಯಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಡಿ.1ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಆಹ್ವಾನ ನೀಡಲಾಗಿದೆ. ಹೊಸದಿಲ್ಲಿಯ ಡಾ.ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರ ದಲ್ಲಿ ನಡೆಯಲಿರುವ ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಧನೆಯನ್ನು ಗೌರವಿಸಲಾಗುವುದು.

ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡಕ್ಕೆ ಆಹ್ವಾನ ನೀಡಲಾಗಿದೆ. ಜಿಲ್ಲೆಯಲ್ಲಿ ಎಚ್‌ಐವಿ ಸೋಂಕಿನ ನಿಯಂತ್ರಣ, ಸೋಂಕಿತರ ಆರೈಕೆ ಮತ್ತು ಚಿಕಿತ್ಸಾ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಸಂಘಟಿತ ಪ್ರಯತ್ನಗಳಿಗೆ ರಾಷ್ಟ್ರಮಟ್ಟದಲ್ಲಿ ಮಾನ್ಯತೆ ದೊರೆತಿರುವುದು ಜಿಲ್ಲೆಯ ಆರೋಗ್ಯ ಇಲಾಖೆಯ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ. ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಶನ್ ಸೊಸೈಟಿ ಮತ್ತು ಜಿಲ್ಲಾಡಳಿತದ ಮಾರ್ಗದರ್ಶನದಲ್ಲಿ ಪ್ರಗತಿಯನ್ನು ಸಾಧಿಸಲಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor