×
Ad

ರಕ್ತಹೀನತೆ, ಅಪೌಷ್ಠಿಕತೆ ತಪಾಸಣೆ, ಚಿಕಿತ್ಸೆಗೆ ಅವಕಾಶ: ಮಮತಾದೇವಿ

Update: 2023-11-23 21:02 IST

ಉಡುಪಿ: ಮಕ್ಕಳು ಹಾಗೂ ಗರ್ಭಿಣಿಯರಲ್ಲಿ ರಕ್ತಹೀನತೆ ಹಾಗೂ ಅಪೌಷ್ಠಿಕತೆ ಕಂಡುಬರುತ್ತಿದ್ದು, ಇದರ ನಿರ್ಮೂಲನೆಯ ಉದ್ದೇಶದಿಂದ ಅನಿಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮವನ್ನು ಅನುಷ್ಠಾನ ಗೊಳಿಸಲಾಗಿದೆ. ಈ ಅಭಿಯಾನದಡಿ ಮೊದಲ ಹಂತದಲ್ಲಿ ಜಿಲ್ಲೆಯ ಒಂದರಿಂದ ಪದವಿ ಪೂರ್ವ ಕಾಲೇಜುವರೆಗಿನ ಮಕ್ಕಳಲ್ಲಿ ಕಂಡುಬರುವ ರಕ್ತಹೀನತೆ ಹಾಗೂ ಅಪೌಷ್ಠಿಕತೆಯ ತಪಾಸಣೆ ನಡೆಸಿ, ಸೂಕ್ತ ಚಿಕಿತ್ಸೆ ಪಡೆಯಲು ಸಲಹೆ ನೀಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್ ಹೇಳಿದ್ದಾರೆ.

ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ (ಬೋರ್ಡ್ ಹೈಸ್ಕೂಲ್) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ನಡೆದ ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಅನೀಮಿಯಾ ಹಾಗೂ ಅಪೌಷ್ಠಿಕತೆ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಅನೀಮಿಯಾದಿಂದ ಮಕ್ಕಳಿಗೆ ದೈಹಿಕ ಬೆಳವಣಿಗೆ ಕುಂಠಿತವಾಗುತ್ತದೆ. ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ತಾಯಿ ಹಾಗೂ ಮಗುವಿನ ಮರಣ ಸಂಭವಿಸುವ ಸಾಧ್ಯತೆ ಇರುತ್ತದೆ. ಹೀಗಾಗಿ ಪ್ರತಿಯೊಬ್ಬರೂ ಆರೋಗ್ಯದ ಕುರಿತು ಕಾಳಜಿ ವಹಿಸಬೇಕು ಎಂದರು.

ಶಾಲಾ- ಕಾಲೇಜುಗಳಲ್ಲಿ ಅನೀಮಿಯಾ ಹಾಗೂ ಅಪೌಷ್ಠಿಕತೆ ಕುರಿತು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸ ಬೇಕು. ಇಲ್ಲಿ ನೀಡಿದ ಮಾಹಿತಿಯನ್ನು ವಿದ್ಯಾರ್ಥಿಗಳು ತಮ್ಮ ಕುಟುಂಬ ಸದಸ್ಯರ ಜೊತೆ ಹಂಚಿ ಕೊಳ್ಳಬೇಕು. ಮಕ್ಕಳು ಜಂಕ್‌ಫುಡ್ ಬಳಕೆಯನ್ನು ಕಡಿಮೆ ಮಾಡಿ, ಪೌಷ್ಠಿಕ ಆಹಾರವನ್ನು ಬಳಸುವ ಕುರಿತು ಗಮನ ಹರಿಸಬೇಕು. ಹೆಣ್ಣು ಮಕ್ಕಳು ಹಾಗೂ ಗರ್ಭಿಣಿ ಮಹಿಳೆಯರಲ್ಲಿ ರಕ್ತಹೀನತೆ ಸಮಸ್ಯೆ ಹೆಚ್ಚಾಗಿ ಕಂಡು ಬರುವುದರಿಂದ ಅವರುಗಳು ಹಸಿ ತರಕಾರಿ, ಸೊಪ್ಪು, ಮೊಳಕೆ ಕಾಳುಗಳು ಸೇರಿದಂತೆ ಪ್ಠೌಷಿಕಾಂಶಯುಕ್ತ ಆಹಾರ ಸೇವನೆ ಮಾಡಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ್ ಮಾತನಾಡಿ, ರೋಗವು ಗಂಭೀರ ಹಂತವನ್ನು ತಲುಪುವುದಕ್ಕಿಂತ ಮೊದಲು, ರೋಗ ಮೊದಲ ಹಂತದಲ್ಲಿದ್ದಾಗಲೇ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಉತ್ತಮ ಆರೋಗ್ಯ ಹೊಂದಬಹುದು. ಅಭಿಯಾನದಲ್ಲಿ ಅನೀಮಿಯಾ ಹಾಗೂ ಅಪೌಷ್ಠಿಕತೆ ಇರುವ ಮಕ್ಕಳನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡುವುದರೊಂದಿಗೆ ಉಡುಪಿ ಜಿಲ್ಲೆಯನ್ನು ಅಪ್ಠೌಷಿಕ ಮತ್ತು ಅನೀಮಿಯಾ ಮುಕ್ತ ಜಿಲ್ಲೆಯಾಗಿಸಲು ಪ್ರಯತ್ನಿಸೋಣ ಎಂದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಮಂಜುನಾಥ್ ಭಟ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಜಿಲ್ಲಾ ನಿರೂಪಣಾ ಅಧಿಕಾರಿ ಬಿ.ಹೆಚ್ ಕೃಷ್ಣಪ್ಪ, ವೈದ್ಯಾಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಪ್ರಶಾಂತ್ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ಆರೋಗ್ಯ ಶಿಕ್ಷಣ ಅಧಿಕಾರಿ ಚಂದ್ರಕಲಾ ಕಾರ್ಯಕ್ರಮ ನಿರೂಪಿಸಿದರು. ಪ್ರಾಂಶುಪಾಲೆ ಲೀಲಾ ಭಟ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News