ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ: ಜಿಲ್ಲಾ ಸಶಸ್ತ್ರ ಮೀಸಲು ಪಡೆಗೆ ಸಮಗ್ರ ಪ್ರಶಸ್ತಿ
ಉಡುಪಿ, ಡಿ.2: ಅಜ್ಜರಕಾಡಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವಾರ್ಷಿಕ ಕ್ರೀಡಾಕೂಟದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಸಮಗ್ರ ಪ್ರಶಸ್ತಿಯನ್ನು ಜಯಿಸುವ ಮೂಲಕ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡಿತು.
100 ಮೀ.ಓಟದಲ್ಲಿ ಮೊದಲಿಗರಾಗಿ ಗುರಿ ಮುಟ್ಟಿದ ಕುಂದಾಪುರ ಉಪ ವಿಭಾಗದ ವಿನಾಯಕ್ ಹಾಗೂ ಮಹಿಳಾ ತಂಡದ ನಾಗಶ್ರೀ ಪ್ರಥಮ ಸ್ಥಾನ ಪಡೆಯುವ ಮೂಲಕ ಕೂಟದ ವೇಗದ ಓಟಗಾರರಾಗಿ ಮೂಡಿಬಂದರು.
ವೈಯಕ್ತಿಕ ವಿಭಾಗದಲ್ಲಿ ಸಶಸ್ತ್ರ ಮೀಸಲು ಪಡೆಯ ಜೀವನ್, ಮಹಿಳಾ ವಿಭಾಗದಲ್ಲಿ ನಾಗಶ್ರೀ, ಜಯಾ ಪಾಟ್ಗರ್ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ ಗೆದ್ದುಕೊಂಡರು.
ಶುಕ್ರವಾರ ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಜಿಪಂ ಸಿಇಒ ಪ್ರಸನ್ನ ಎಚ್. ವಿಜೇತರಿಗೆ ಬಹುಮಾನ ಹಾಗೂ ಪ್ರಶಸ್ತಿಗಳನ್ನು ವಿತರಿಸಿ ಶುಭ ಹಾರೈಸಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಸ್ವಾಗತಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ.ಸಿದ್ಧಲಿಂಗಪ್ಪ ವಂದಿಸಿದರು. ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಸಿಬಂದಿ ಯೊಗೀಶ್ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.
ಮೂರು ದಿನಗಳ ಕ್ರೀಡಾಕೂಟದಲ್ಲಿ ಕುಂದಾಪುರ, ಕಾರ್ಕಳ, ಉಡುಪಿ ಉಪ ವಿಭಾಗ, ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಮಹಿಳಾ ತಂಡ ಸೇರಿ ಒಟ್ಟು ಐದು ತಂಡಗಳು ಭಾಗವಹಿಸಿದ್ದವು.