×
Ad

ಉಡುಪಿ ಜಿಲ್ಲೆಯಾದ್ಯಂತ ಕ್ರಿಸ್ಮಸ್ ಹಬ್ಬದ ಸಡಗರ

Update: 2023-12-24 20:34 IST

ಉಡುಪಿ: ಏಸು ಕ್ರಿಸ್ತರ ಜನ್ಮದಿನವಾದ ಕ್ರಿಸ್ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಉಡುಪಿ ಜಿಲ್ಲೆಯಾದ್ಯಂತ ರವಿವಾರ ರಾತ್ರಿ ಭಕ್ತಿ, ಶೃದ್ಧೆ, ಸಂಭ್ರಮ ಸಡಗರದಿಂದ ಆಚರಿಸಿದರು.

ರಾತ್ರಿ ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ ವಿಶೇಷ ಪ್ರಾರ್ಥನೆ, ಕ್ರಿಸ್ಮಸ್ ಗೀತೆಗಳ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಹಬ್ಬದ ವಿಶೇಷ ಬಲಿಪೂಜೆಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತೀ ವಂ.ಡಾ. ಜೆರಾಲ್ಡ್ ಐಸಾಕ್ ಲೋಬೊ ತಮ್ಮ ಅಧಿಕೃತ ಚರ್ಚು ಮಿಲಾಗ್ರಿಸ್ ಕೆಥೆಡ್ರಲ್ ಕಲ್ಯಾಣಪುರದಲ್ಲಿ ಅರ್ಪಿಸಿ ಹಬ್ಬದ ಸಂದೇಶವನ್ನು ನೀಡಿದರು.

ನಮ್ಮೆಲ್ಲರನ್ನು ಪ್ರೀತಿಸುವುದಕ್ಕಾಗಿ ಭುವಿಗೆ ಆಗಮಿಸಿದ ಯೇಸು ಸ್ವಾಮಿ ದನದ ಕೊಟ್ಟಿಗೆಯಾದ ಗೋದಲಿಯಲ್ಲಿ ಜನಿಸಿ ತನ್ನ ಸರಳತೆ ಮೆರೆದರು. ಪ್ರೀತಿ ಪಡೆಯುವುದರಲ್ಲಿಇರುವ ಸಂತೋಷಕ್ಕಿಂತ ಇತರರಿಗೆ ಸೇವೆಯ ಮೂಲಕ ನೀಡುವುದರಲ್ಲಿ ಹೆಚ್ಚಿನ ಸಮಾಧಾನ ನೀಡುತ್ತದೆ. ಪರಸ್ಪರ ದ್ವೇಷಿಸುವುದಕ್ಕಿಂತ ಯೇಸುವಿನಂತೆ ಇತರರನ್ನು ಪ್ರೀತಿಸುವ ಕೆಲಸ ಮಾಡಬೇಕಾಗಿದೆ. ಕ್ರಿಸ್ತ ಜಯಂತಿ ಶಾಂತಿಯನ್ನು ಹಂಚುವ ಹಬ್ಬವಾಗಿದ್ದು ಜಗತ್ತಿನೆಲ್ಲೆಡೆ ಸದಾ ಶಾಂತಿ ನೆಲೆಸುವಂತೆ ಪ್ರಾರ್ಥಿಸಬೇಕು ಎಂದು ಧರ್ಮಾಧ್ಯಕ್ಷರು ತಮ್ಮ ಸಂದೇಶದಲ್ಲಿ ತಿಳಿಸಿದರು.

ಮಿಲಾಗ್ರಿಸ್ ಕ್ಯಾಥೆಡ್ರಲ್‌ನ ರೆಕ್ಟರ್ ವಂ.ವಲೇರಿಯನ್ ಮೆಂಡೊನ್ಸಾ, ಸಹಾಯಕ ಧರ್ಮಗುರು ವಂ.ಜೋಯ್ ಅಂದ್ರಾದೆ, ಕಟಪಾಡಿ ಹೋಲಿ ಕ್ರಾಸ್ ಸಭೆಯ ವಂ.ರೊನ್ಸನ್ ಡಿಸೋಜ ಉಪಸ್ಥಿತರಿದ್ದರು. ಬಲಿಪೂಜೆಗೂ ಮುನ್ನ ಯೇಸು ಸ್ವಾಮಿಯ ಜನನದ ವೃತ್ತಾಂತವನ್ನು ನಟನೆ ಮತ್ತು ನೃತ್ಯರೂಪಕದ ಮೂಲಕ ಚರ್ಚಿನ ಮಕ್ಕಳು ಪ್ರದರ್ಶಿಸಿದರು.

ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಇಡೀ ಜಿಲ್ಲೆಯ ಚರ್ಚುಗಳು ವರ್ಣಮಯ ವಿದ್ಯುತ್ ದೀಪಾಲಂಕಾರ ಹಾಗೂ ಬಗೆ ಬಗೆಯ ಚಿತ್ತಾಕರ್ಷಕ ನಕ್ಷತ್ರಗಳಿಂದ ಕಂಗೊಳಿಸುತ್ತಿದ್ದವು. ಉಡುಪಿ ಜಿಲ್ಲೆಯ ಪ್ರಮುಖ ದೇವಾಲಯಗಳು ಭಕ್ತಾದಿ ಗಳಿಂದ ತುಂಬಿ ತುಳುಕುತ್ತಿದ್ದವು.

ರವಿವಾರ ರಾತ್ರಿ ಪೂಜೆಯ ವೇಳೆ ಸಿಂಗರಿಸಿಟ್ಟ ಗೋದಲಿಯಲ್ಲಿ ಬಾಲಯೇಸು ಮೂರ್ತಿಯನ್ನು ಇಟ್ಟು ದೇವರ ಸ್ತುತಿ, ಜೋಗುಳದ ಮೂಲಕ ಭಕ್ತಾದಿಗಳು ಆರಾಧಿಸಿದರು. ಮೇಣದ ಬತ್ತಿಗಳನ್ನು ಬೆಳಗಿ ಹೂವು ಸುಗಂಧಗಳನ್ನು ಅರ್ಪಿಸುವು ದರ ಮೂಲಕ ಯೇಸು ಸ್ವಾಮಿಯ ಜನನವನ್ನು ಸ್ವಾಗತಿಸಿದರು.

ಜಿಲ್ಲೆಯ ಪ್ರಮುಖದ ಚರ್ಚುಗಳಾದ ಶಿರ್ವ ಆರೋಗ್ಯ ಮಾತೆಯ ದೇವಾಲಯದಲ್ಲಿ ಧರ್ಮಗುರು ವಂ.ಡಾ.ಲೆಸ್ಲಿ ಡಿಸೋಜ, ಉಡುಪಿ ಶೋಕ ಮಾತಾ ಇಗರ್ಜಿಯಲ್ಲಿ ಧರ್ಮಗುರು ವಂ.ಚಾರ್ಲ್ಸ್ ಮಿನೇಜಸ್, ಕುಂದಾಪುರ ಹೋಲಿ ರೋಸರಿ ಚರ್ಚಿನಲ್ಲಿ ವಂ.ಸ್ಟ್ಯಾನಿ ತಾವ್ರೊ, ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾದಲ್ಲಿ ವಂ.ಆಲ್ಬನ್ ಡಿಸೋಜ, ತೊಟ್ಟಂ ಸಂತ ಅನ್ನಮ್ಮ ಚರ್ಚಿನಲ್ಲಿ ವಂ.ಡೆನಿಸ್ ಡೆಸಾ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ ಬಲಿಪೂಜೆಗಳು ನಡೆದವು.

ಹಬ್ಬದ ಅಂಗವಾಗಿ ಚರ್ಚುಗಳಲ್ಲಿ ಯುವ ಸಂಘಟನೆಯ ಸದಸ್ಯರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ, ಮಕ್ಕಳ ಪ್ರೀತಿಗೆ ಪಾತ್ರನಾದ ಸಾಂತಾಕ್ಲಾಸ್ ವೇಷ, ಭಕ್ತಾದಿಗಳಿಗೆ ಕ್ರಿಸ್ಮಸ್ ಕೇಕ್ ವಿತರಣೆ ಕೂಡ ನಡೆಯಿತು. ಬಲಿಪೂಜೆಯ ಬಳಿಕ ಪರಸ್ಪರ ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.





Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News