×
Ad

ಹಾರಾಡಿ: ಪರಿಶಿಷ್ಟ ಜಾತಿ, ಪಂಗಡದವರಿಗೆ ಕಾನೂನು ಅರಿವು-ನೆರವು

Update: 2024-02-09 19:22 IST

ಉಡುಪಿ, ಫೆ.9: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಘಟಕ, ಉಡುಪಿಯ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯ ಎಸ್.ಸಿ/ಎಸ್.ಟಿ ಘಟಕ, ಎನ್ನೆಸ್ಸೆಸ್ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಹಾಗೂ ಹಾರಾಡಿ ಗ್ರಾಮ ಪಂಚಾಯತ್‌ಗಳ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಹಾಗೂ ನೆರವು ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮವನ್ನು ಉಡುಪಿಯ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸಮಾಜ ದಲ್ಲಿ ಇಂದಿಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಕಡಿಮೆಯಾಗಿಲ್ಲ. ಎಷ್ಟೇ ಕಾನೂನುಗಳನ್ನು ಮಾಡಿದರೂ ಜಾತೀಯತೆ, ಅಸಮಾನತೆ ಇಂದಿಗೂ ಸಮಾಜದಲ್ಲಿ ನೆಲೆವೂರಿದೆ ಎಂದರು.

ಉಡುಪಿಯ ವಕೀಲ ರಾಜೇಶ್ ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆಯ ಬಗ್ಗೆ ಅರಿವು ಮೂಡಿಸಿದರು. ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ನಿರ್ದೇಶಕಿ ಪ್ರೊ.(ಡಾ.) ನಿರ್ಮಲ ಕುಮಾರಿ ಕೆ. ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ತಿಳಿಸಿದರು.

ಹಾರಾಡಿ ಗ್ರಾಮಪಂಚಾಯತ್ ಅಧ್ಯಕ್ಷೆ ಜಯಂತಿ ಪೂಜಾರಿ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಆದರ್ಶ ಶೆಟ್ಟಿ ಸ್ವಾಗತಿಸಿ, ಗ್ರಾಪಂ ಉಪಾಧ್ಯಕ್ಷ ಕುಮಾರ್ ಸುವರ್ಣ ವಂದಿಸಿದರು.

ಕಾರ್ಯಕ್ರಮದಲ್ಲಿ ಹಾರಾಡಿ ಗ್ರಾಪಂನ ಸದಸ್ಯರು ಹಾಗೂ ಮಹಿಳಾ ಮತ್ತು ಮಕ್ಕಳ ಸೇವಾ ಕಾರ್ಯಕರ್ತರು ಹಾಜರಿದ್ದರು. ಇದರೊಂದಿಗೆ ಉಚಿತ ಆರೋಗ್ಯ ತಪಾಸಣೆಯನ್ನೂ ಆಯೋಜಿಸಲಾಗಿತು. ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಎಸ್‌ಸಿ/ಎಸ್‌ಟಿ ಘಟಕದ ಹಾಗೂ ಎನ್ನೆಸ್ಸೆಸ್ ಕಾರ್ಯಕ್ರಮ ಸಂಯೋಜಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News