ಮೇ ತಿಂಗಳಲ್ಲಿ ನೂತನ ಉಡುಪಿ ಜಿಲ್ಲಾಸ್ಪತ್ರೆ ಕಟ್ಟಡ ಸಿದ್ಧ: ಸಚಿವ ಗುಂಡೂರಾವ್
ಉಡುಪಿ, ಫೆ.10: ಅಜ್ಜರಕಾಡಿನಲ್ಲಿ ನಿರ್ಮಾಣಗೊಳ್ಳುತ್ತಿರುವ 250 ಹಾಸಿಗೆಗಳ ಸುಸಜ್ಜಿತ, ವಿಶಾಲ ಉಡುಪಿ ಜಿಲ್ಲಾಸ್ಪತ್ರೆ ಕಟ್ಟಡ ಮುಂದಿನ ಮೇ ತಿಂಗಳ ವೇಳೆ ಉದ್ಘಾಟನೆಗೆ ಸಿದ್ಧಗೊಳ್ಳಲಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಗೆ ಇದೇ ಮೊದಲ ಬಾರಿ ಭೇಟಿ ನೀಡಿ ಇಲಾಖೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಸಚಿವರು ನಿರ್ಮಾಣಗೊಳ್ಳುತ್ತಿರುವ ನೂತನ ಕಟ್ಟಡದ ಕಾಮಗಾರಿಯನ್ನು ಪರಿಶೀಲಿಸಿ ಮಾಹಿತಿಗಳನ್ನು ಪಡೆದುಕೊಂಡರು.
ಜಿಲ್ಲೆಯಾಗಿ 25 ವರ್ಷ ಪೂರ್ಣಗೊಂಡರೂ 120 ಹಾಸಿಗೆಗಳ ತಾಲೂಕು ಆಸ್ಪತ್ರೆಯೇ ಇದ್ದು, ಇದೀಗ ಪಕ್ಕದಲ್ಲೇ 250 ಹಾಸಿಗೆಗಳ ಜಿಲ್ಲಾಸ್ಪತ್ರೆಯ ನೂತನ ಕಟ್ಟಡ ನಿರ್ಮಾಣಗೊಳ್ಳುತ್ತಿದೆ. ಈಗಾಗಲೇ ಶೇ.70ರಷ್ಟು ಕಾಮಗಾರಿ ಮುಗಿದಿದ್ದು, ಇದಕ್ಕೆ ಜಿಲ್ಲಾಸ್ಪತ್ರೆಗೆ ಅಗತ್ಯವಿರುವಷ್ಟು ಸಿಬ್ಬಂದಿಗಳು, ವೈದ್ಯರ ನೇಮಕಾತಿ ನಡೆಯಬೇಕಿದೆ ಎಂದು ಜಿಲ್ಲಾ ಸರ್ಜನ್ ಡಾ.ವೀಣಾ ಕುಮಾರಿ ಹಾಗೂ ಡಾ.ವಾಸುದೇವ್ ಸಚಿವರಿಗೆ ವಿವರಿಸಿದರು.
ಅಲ್ಲದೇ ಹೊಸ ಆಸ್ಪತ್ರೆಗೆ ಅಗತ್ಯವಿರುವ ಉಪಕರಣಗಳು, ಒಳಾಂಗಣ ಹಾಗೂ ಇತರ ಸೌಲಭ್ಯಗಳಿಗೆ ಅನುದಾನದ ಅಗತ್ಯವಿದ್ದು, ಇದರೊಂದಿಗೆ ವೈದ್ಯರು, ತಜ್ಞರು, ನಾನ್ ಮೆಡಿಕಲ್ ಸಿಬ್ಬಂದಿಗಳ ನೇಮಕಾತಿಯೂ ಆಗಬೇಕಿರುವ ಕಡೆಗೆ ಅವರು ಸಚಿವರ ಗಮನ ಸೆಳೆದರು. ಈ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.
ಡಯಾಲಿಸಿಸ್ ಘಟಕ ಉದ್ಘಾಟನೆ: ಇದೇ ವೇಳೆ ಆರೋಗ್ಯ ಸಚಿವರು ಜಿಲ್ಲಾಸ್ಪತ್ರೆಯಲ್ಲಿ ನೂತನ ಡಯಾಲಿಸಿಸ್ ಘಟಕ ಗಳನ್ನು ಲೋಕಾರ್ಪಣೆ ಗೊಳಿಸಿದರು. ಈ ಸಂದರ್ಭದಲ್ಲಿ ಶಾಸಕ ಯಶ್‌ಪಾಲ್ ಎ ಸುವರ್ಣ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ. ಎಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ.ರಂದೀಪ, ಆರೋಗ್ಯ ಇಲಾಖೆಯ ನಿರ್ದೇಶಕಿ ಪುಷ್ಪಲತಾ ಬಿ. ಎಸ್, ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕಿ ಡಾ.ರಾಜೇಶ್ವರಿ, ಜಿಲ್ಲಾ ಸರ್ಜನ್ ಡಾ. ವೀಣಾಕುಮಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್ ಮತ್ತಿತರರು ಉಪಸ್ಥಿತರಿದ್ದರು.