×
Ad

ರಾಜ್ಯ ಮಟ್ಟದ ಉದ್ಯೋಗ ಮೇಳದಲ್ಲಿ ಜಿಲ್ಲಾ ಯುವಜನತೆ ಭಾಗವಹಿಸಲು ಉಡುಪಿ ಜಿಲ್ಲಾಧಿಕಾರಿ ಕರೆ

Update: 2024-02-14 20:36 IST

ಉಡುಪಿ: ಯುವಜನತೆ ಉದ್ಯೋಗ ಕೈಗೊಂಡು ಆರ್ಥಿಕ ಅಭಿವೃದ್ಧಿ ಹೊಂದಲು ಅನುಕೂಲವಾಗುವಂತೆ ರಾಜ್ಯ ಮಟ್ಟದ ಉದ್ಯೋಗ ಮೇಳವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಬ್ರವರಿ 26 ಮತ್ತು 27ರಂದು ಆಯೋಜಿಸಲಾಗಿದ್ದು, ಜಿಲ್ಲೆಯ ಯುವಜನರು ಸಹ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

ಬುಧವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳದ ಅಭ್ಯರ್ಥಿಗಳ ನೋಂದಣಿ ಕುರಿತು ಹಾಗೂ ಪಿ.ಎಂ. ವಿಶ್ವಕರ್ಮ ಯೋಜನೆಯ ಅನುಷ್ಠಾನದ ಕುರಿತ ಜಿಲ್ಲಾ ಕೌಶಲ್ಯ ಸಮಿತಿಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಸರಕಾರ ಪದವಿ ಹಾಗೂ ವೃತ್ತಿ ಶಿಕ್ಷಣ ಪಡೆದ ಯುವಜನರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಉದ್ದೇಶದಿಂದ ರಾಜ್ಯಮಟ್ಟ ಉದ್ಯೋಗ ಮೇಳವನ್ನು ೫೦೦ಕ್ಕೂ ಅಧಿಕ ವಿವಿಧ ಪ್ರತಿಷ್ಠಿತ ಕಂಪೆನಿಗಳ ಸಹಯೋಗದೊಂದಿಗೆ ಆಯೋಜಿಸಿದೆ. ಇದರಲ್ಲಿ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಜಿಲ್ಲೆಯ ಯುವಜನತೆ, ನಿರುದ್ಯೋಗಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಆಸಕ್ತ ವಿದ್ಯಾರ್ಥಿಗಳು ಉದ್ಯೋಗ ಮೇಳದ ನೋಂದಾವಣಿಯನ್ನು -https://skillconnect.kaushalkar.com/- ಲಿಂಕ್‌ನಲ್ಲಿ ನೋಂದಾಯಿಸಿ ಕೊಂಡ ಬಳಿಕ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ನೇರವಾಗಿ ಭಾಗವಹಿಸ ಬಹುದು ಎಂದವರು ತಿಳಿಸಿದರು.

105 ಮಂದಿ ನೋಂದಣಿ: ಜಿಲ್ಲೆಯಲ್ಲಿ ಈವರೆಗೆ 105 ಮಂದಿ ವಿದ್ಯಾರ್ಥಿಗಳು ಮಾತ್ರ ಹೆಸರು ನೋಂದಾಯಿಸಿಕೊಂಡಿ ದ್ದಾರೆ. ವಿದ್ಯಾರ್ಥಿ ಗಳಿಗೆ ತಮ್ಮ ವಿದ್ಯಾರ್ಹತೆಯ ಆಧಾರದ ಮೇಲೆ ಉದ್ಯೋಗಾವಕಾಶಗಳನ್ನು ಕಲ್ಪಿಸಲಾಗುವುದು. ಉದ್ಯೋಗಕ್ಕೆ ಅನುಸಾರವಾಗಿ ಸೂಕ್ತ ಸಂಭಾವನೆ ನೀಡಲಾಗುವುದು ಎಂದ ಅವರು ಯುವ ಜನರು ಇದರ ಲಾಭ ಪಡೆದುಕೊಳ್ಳಬೇಕು ಎಂದರು.

ವಿಶ್ವಕರ್ಮ ಯೋಜನೆ: ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕರಕುಶಲ ಕಲೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ಪ್ರೋತ್ಸಾಹಿ ಸಲು ಜಾರಿಗೆ ತಂದಿರುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು ಎಂದರು.

ಅರ್ಹ ಅಭ್ಯರ್ಥಿಗಳು ಆಧಾರ್ ಕಾರ್ಡ್ ಸೇರಿದಂತೆ ಇತರ ಸೂಕ್ತ ದಾಖಲಾತಿಗಳೊಂದಿಗೆ ಸಾಮಾನ್ಯ ಸೇವಾ ಕೇಂದ್ರ ಗಳಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಆಯ್ಕೆಯಾದ ಫಲಾನುಭವಿಗಳಿಗೆ ಡಿಜಿಟಲ್ ಐ.ಡಿ ಕಾರ್ಡ್ ಹಾಗೂ ಪಿ.ಎಂ ವಿಶ್ವಕರ್ಮ ಪ್ರಮಾಣ ಪತ್ರವನ್ನು ನೀಡುವುದರ ಜೊತೆಗೆ ಮೂಲಭೂತ ಕೌಶಲ್ಯ ತರಬೇತಿ ಹಾಗೂ ಉಪಕರಣವನ್ನು ನೀಡುವುದರ ಜೊತೆಗೆ ಶೇ.೫ರಷ್ಟು ಬಡ್ಡಿ ದರದಲ್ಲಿ ಒಂದು ಲಕ್ಷ ರೂ. ವರೆಗೆ ಸಾಲ ಸೌಲಭ್ಯ ಒದಗಿಸಲಾಗುವುದು. ಅರ್ಹರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಡಿಪ್ಲೋಮಾ ಹಾಗೂ ಕೈಗಾರಿಕಾ ತರಬೇತಿ ಸಂಸ್ಥೆಗಳು ಸೇರಿದಂತೆ ವಿವಿಧ ತರಬೇತಿ ಸಂಸ್ಥೆಗಳಿಂದ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಬೇಕು. ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅರುಣ್ ಬಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ ವಿ. ನಾಯಕ್, ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಸೀತಾರಾಮ ಶೆಟ್ಟಿ, ಸಾಮಾನ್ಯ ಸೇವಾ ಕೇಂದ್ರದ ಜಿಲ್ಲಾ ವ್ಯವಸ್ಥಾಪಕ ಗೋವರ್ಧನ್, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಸರಕಾರಿ ಹಾಗೂ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆ, ಪಾಲಿಟೆಕ್ನಿಕ್ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News