ವಾಹನ ಢಿಕ್ಕಿ: ಪಾದಚಾರಿ ಮೃತ್ಯು
Update: 2024-02-22 17:24 IST
ಕುಂದಾಪುರ: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಹೆಮ್ಮಾಡಿ ಗ್ರಾಮದ ಜಾಲಾಡಿ ಹತ್ತಿರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಫೆ.21ರಂದು ರಾತ್ರಿ ನಡೆದಿದೆ.
ಮೃತರನ್ನು ವಿಠಲ್(46) ಎಂದು ಗುರುತಿಸಲಾಗಿದೆ. ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಹೋಗುತ್ತಿದ್ದ ಅಪರಿಚಿತ ವಾಹನವೊಂದು ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಸ್ತೆ ದಾಟಲು ನಿಂತುಕೊಂಡಿದ್ದ ವಿಠಲ್ ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ವಿಠಲ್ ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಅಪಘಾತ ಪಡಿಸಿದ ನಂತರ ಚಾಲಕತನ್ನ ವಾಹನವನ್ನು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾಗಿರುವುದಾಗಿ ದೂರಲಾಗಿದೆ.
ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.