×
Ad

ಮಕ್ಕಳ ಹಬ್ಬದಿಂದ ಮಕ್ಕಳ ಸುಪ್ತ ಪ್ರತಿಭೆ ಅನಾವರಣ: ಉಡುಪಿ ಜಿಲ್ಲಾಧಿಕಾರಿ

Update: 2024-02-27 20:30 IST

ಉಡುಪಿ, ಫೆ.27: ಮಕ್ಕಳು ಚಟುವಟಿಕೆಗಳ ಆಗರ. ಮಕ್ಕಳ ಬೆಳವಣಿಗೆ ಹಾಗೂ ಅವರ ಸರ್ವತೋಮುಖ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮ ಗಳನ್ನು ಆಯೋಜಿಸಲಾಗುತ್ತಿದೆ. ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಅನಾವರಣ ಗೊಳಿಸಲು ಮಕ್ಕಳ ಹಬ್ಬದಂಥ ಕಾರ್ಯಕ್ರಮಗಳು ಸಹಕಾರಿ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ.

ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಬಾಲಭವನದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಇಂದು ನಡೆದ ಮಕ್ಕಳ ಹಬ್ಬ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಮಕ್ಕಳು ಓದಿನ ಒತ್ತಡವನ್ನು ಮರೆತು ಕಾರ್ಯಕ್ರಮದಲ್ಲಿ ಮುಕ್ತವಾಗಿ ಪಾಲ್ಗೊಳ್ಳಬೇಕು. ಇದರಿಂದ ಮಕ್ಕಳು ಭೌತಿಕ ಹಾಗೂ ಮಾನಸಿಕ ವಿಕಾಸ ದೊಂದಿಗೆ ದೈಹಿಕವಾಗಿಯೂ ಸದೃಢರಾಗುತ್ತಾರೆ. ಮಕ್ಕಳು ಲವಲವಿಕೆಯಿಂದ ಇರಲು ಇಂತಹ ಕಾರ್ಯಕ್ರಮಗಳು ಸಹಕಾರಿ ಎಂದರು.

ಮಕ್ಕಳು ತಮಗಿಷ್ಟಬಂದ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಾಕಷ್ಟು ಅವಕಾಶಗಳಿದ್ದು, ಅದನ್ನು ಸದುಪಯೋಗಪಡಿಸಿ ಕೊಳ್ಳಬೇಕು. ಮಕ್ಕಳು ಆಟದ ಜೊತೆಗೆ ಓದಿನ ಕಡೆಯೂ ಗಮನಹರಿಸಬೇಕು. ಪರಿಶ್ರಮದಿಂದ ಪ್ರತಿಫಲ ಸಾಧ್ಯ. ಮುಂದಿನ ದಿನಗಳಲ್ಲಿ ಉತ್ತಮ ಜೀವನ ಸಾಗಿಸಲು ಈಗಿನಿಂದಲೇ ಪ್ರಯತ್ನಿಸಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಮಾತನಾಡಿ, ಹಬ್ಬದ ವಾತಾವರಣ ಬಾಲಭವನದಲ್ಲಿ ಸೃಷ್ಟಿಯಾಗಿದೆ. ಮಕ್ಕಳು ದೇಶದ ಸಂಪತ್ತು. ಅವರು ಆರೋಗ್ಯ ವಂತರಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸ ಬೇಕೆಂಬ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಶಿಕ್ಷಣ ವ್ಯವಸ್ಥೆ ಮಕ್ಕಳ ಬಾಲ್ಯವನ್ನು ಕಿತ್ತುಕೊಳ್ಳುವಂತಾಗಬಾರದು. ಮಕ್ಕಳು ಮೊಬೈಲ್ ಗೀಳಿಗೆ ಬಲಿಯಾಗದೇ ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದರು.

ಮಕ್ಕಳಿಗೆ ಕನಸು ಹಾಗೂ ಭವಿಷ್ಯವನ್ನು ಕಲ್ಪಿಸುವುದು ನಮ್ಮ ಆದ್ಯ ಕರ್ತವ್ಯ. ಪ್ರತಿ ಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ಪ್ರತಿಭೆ ಹಾಗೂ ಚೈತನ್ಯ ಹೊಂದಿರುತ್ತಾರೆ. ಪೋಷಕರು ತಮ್ಮ ಮಕ್ಕಳ ಕನಸನ್ನು ನನಸಾಗಿಸಲು ಸೂಕ್ತ ಅವಕಾಶ ಕಲ್ಪಿಸಿ ಕೊಡಬೇಕು. ಮಕ್ಕಳ ಹಬ್ಬಗಳು ಇಲಾಖೆಗೆ ಸೀಮಿತವಾಗದೇ ಪ್ರತೀ ಗ್ರಾಮಗಳಲ್ಲೂ ಇಂತಹ ಕಾರ್ಯಕ್ರಮಗಳನ್ನು ಆಚರಿಸುವಂತಾಗಬೇಕು ಎಂದು ಶರ್ಮಿಳಾ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ಮಕ್ಕಳ ಕಲ್ಯಾಣ ಸಮಿತಿಯ ಜಿಲ್ಲಾ ಅಧ್ಯಕ್ಷ ರೊನಾಲ್ಡ್ ಬಿ ಫುಟಾರ್ಡೊ, ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನಾಗರಾಜ್, ಕ್ರೀಡಾ ಇಲಾಖೆಯ ರವಿಚಂದ್ರ, ವಿವಿಧ ಇಲಾಖಾಧಿಕಾರಿಗಳು, ಶಿಕ್ಷಕರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವೀಣಾ ವಿವೇಕಾನಂದ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ರೂಪ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ 9ರಿಂದ 18 ವರ್ಷದೊಳಗಿನ ಸರಕಾರಿ ಶಾಲೆಯ ಮಕ್ಕಳಿಗೆ ಜಾನಪದ ನೃತ, ಸಂಗೀತ, ಚಿತ್ರಕಲೆ, ಕಥೆ ಬರೆಯುವುದು, ನಾಟಕ, ಮನೋರಂಜನಾ ಆಟ, ಖೋ-ಖೋ ಹಾಗೂ ಕಬಡ್ಡಿ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಸುಮಾರು 350ಕ್ಕೂ ಹೆಚ್ಚು ಮಕ್ಕಳು ದರಲ್ಲಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News