×
Ad

ಉಡುಪಿ ಜಿಲ್ಲೆಯಲ್ಲಿ ಮತದಾನದ ದಿನದಂದು ಪ್ರತಿಬಂಧಕಾಜ್ಞೆ ಜಾರಿ

Update: 2024-03-28 20:51 IST

ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ

ಉಡುಪಿ: ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತದಾನದ ದಿನದಂದು ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ 119-ಕುಂದಾಪುರ, 120-ಉಡುಪಿ, 121-ಕಾಪು ಹಾಗೂ 122-ಕಾರ್ಕಳ ವಿಧಾನಾ ಸಭಾ ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಎಪ್ರಿಲ್ 26ರಂದು ಮತದಾನ ನಡೆಯಲಿದ್ದು, ಮತದಾನ ನಡೆಯುವ ಮತಗಟ್ಟೆಗಳ ಸುತ್ತಲೂ 200 ಮೀ. ವ್ಯಾಪ್ತಿಯಲ್ಲಿ ಎ.24ರ ಸಂಜೆ 6ರಿಂದ ಎ.26ರಂದು ಮತದಾನ ಮುಕ್ತಾಯಗೊಳ್ಳುವವರೆಗೆ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ 118-ಬೈಂದೂರು ವಿಧಾನಾ ಸಭಾ ಕ್ಷೇತ್ರದಲ್ಲಿ ಮೇ 7ರಂದು ಎರಡನೇ ಹಂತದ ಮತದಾನ ನಡೆಯುವ ಮತಗಟ್ಟೆಗಳ ಸುತ್ತಲೂ 200ಮೀ. ವ್ಯಾಪ್ತಿಯಲ್ಲಿ ಮೇ 5ರ ಸಂಜೆ 6 ಗಂಟೆಯಿಂದ ಮೇ 7ರಂದು ಮತದಾನ ಮುಕ್ತಾಯಗೊಳ್ಳುವವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಹಲವು ಷರತ್ತುಗಳನ್ನು ವಿಧಿಸಿ, ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ವ್ಯಾಪ್ತಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ನಡೆಸು ವುದನ್ನು ನಿಷೇಧಿಸಲಾಗಿದೆ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಲಾಠಿ, ದೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರ ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.

ಮತಗಟ್ಟೆಗಳ 200ಮೀ. ವ್ಯಾಪ್ತಿಯೊಳಗೆ ಚುನಾವಣೆ ಪ್ರಚಾರ ನಿಷೇಧಿಸಲಾಗಿದೆ. ಈ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಸೈಬರ್ ಕೆಫೆಗಳನ್ನು ನಿಬರ್ಂಧಿಸಿದೆ. ಕಲ್ಲುಗಳನ್ನು, ಕ್ಷಾರ ಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಇತ್ಯಾದಿಗಳನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ಮತ್ತು ಕಲ್ಲುಗಳನ್ನು ಹಾಗೂ ಎಸೆಯುವಂತಹ ವಸ್ತುಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೆಧಿಸಲಾಗಿದೆ.

ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿ ಬಹಿರಂಗವಾಗಿ ಯಾವುದೇ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳನ್ನು ಹೊಂದಿರುವುದು ಕಂಡು ಬಂದರೆ ಕೂಡಲೇ ಅವುಗಳನ್ನು ವಶಪಡಿಸಿಕೊಂಡು ಮುಟ್ಟುಗೋಲು ಹಾಕಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುವುದು.

ಮತಗಟ್ಟೆಗಳ ಸುತ್ತ 200ಮೀ. ಅಂತರದಲ್ಲಿ ಮೊಬೈಲ್ ಫೋನ್, ಕಾರ್ಡಲೆಸ್ ಫೋನ್ ಅಥವಾ ಇನ್ನಿತರ ಎಲೆಕ್ಟ್ರಾನಿಕ್, ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಕಲ್ಯಾಣ ಮಂಟಪಗಳು, ಸಮುದಾಯ ಭವನ ಗಳು, ಹೋಟೆಲ್‌ಗಳು ಮತ್ತು ಅತಿಥಿಗೃಹಗಳಲ್ಲಿ ವಾಸ್ತವ್ಯ ಹೂಡಿದವರ ಪಟ್ಟಿಗಳ ಪರಿಶೀಲನೆ ಮಾಡಿ ಮತದಾರರಲ್ಲ ದವರನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮವಹಿಸಬೇಕು. ಈ ಆದೇಶ ವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನಿನಡಿ ಕಠಿಣ ಕ್ರಮವನ್ನು ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News