ಕುಂದಾಪುರ: ಬಿರುಸಿನ ಚಟುವಟಿಕೆಗಳ ಕೇಂದ್ರವಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಮನೆ

Update: 2024-03-28 16:02 GMT

ಕುಂದಾಪುರ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಕುಂದಾಪುರದಲ್ಲಿ ಚುನಾವಣಾ ಕಾರ್ಯತಂತ್ರಗಳು ಹೆಚ್ಚುತ್ತಿವೆ. ಸದ್ಯ ಸಕ್ರಿಯ ರಾಜಕೀಯದಿಂದ ದೂರ ಉಳಿದಿರುವ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಮನೆ ಈಗ ರಾಜಕೀಯ ಚಟುವಟಿಕೆಯ ಕೇಂದ್ರವಾಗುತ್ತಿವೆ. ಎಲ್ಲಾ ಪಕ್ಷಗಳ ಅಭ್ಯರ್ಥಿಗಳು, ಅವರ ಬೆಂಬಲಿಗರು ಹಾಲಾಡಿ ಮನೆಗೆ ನಿರಂತರವಾಗಿ ಭೇಟಿ ನೀಡುತಿದ್ದಾರೆ.

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿಯ ತರುವಾಯ ಇದೀಗ ಕುಂದಾಪುರ ಬಿಜೆಪಿ ಯುವ ಮುಖಂಡರು ಹಾಲಾಡಿಯವರನ್ನು ಭೇಟಿ ಮಾಡಿದ್ದಾರೆ.ಇದಕ್ಕೆ ಮೊದಲು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರೂ ಹಾಲಾಡಿ ಅವರನ್ನು ಭೇಟಿ ಮಾಡಿದ್ದು ಸುದ್ದಿಯಾಗಿತ್ತು.

ಈ ಎಲ್ಲಾ ಭೇಟಿಗಳು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಂದಿನ ಚುನಾವಣೆ ಎದುರಿಸುವ ಬಗ್ಗೆ ಬಿಜೆಪಿಗೆ ಹಾಲಾಡಿಯವರ ಮಾರ್ಗದರ್ಶನ ಕೂಡ ಮಹತ್ವದ್ದಾಗಿದ್ದರಿಂದ ಈ ಭೇಟಿ ಹಿಂದೆ ಹಲವು ಸಂಗತಿಗಳು ಅಡಗಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.

ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಹಾಗೂ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ನೇತೃತ್ವದಲ್ಲಿ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಭೇಟಿ ಮಾಡಿ ಲೋಕಸಭಾ ಚುನಾವಣೆಯ ಕಾರ್ಯತಂತ್ರಗಳ ಬಗ್ಗೆ, ಸಲಹೆ ಸೂಚನೆ ಮಾರ್ಗದರ್ಶನವನ್ನು ಪಡೆದಿದ್ದಾರೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಕುಂದಾಪುರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ.ಎಸ್, ಕುಂದಾ ಪುರ, ನಿಕಟಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ, ಪಕ್ಷದ ಮುಖಂಡರಾದ ಸಂಪತ್ ಶೆಟ್ಟಿ ಶಾನಾಡಿ, ಪ್ರವೀಣ್ ಶೆಟ್ಟಿ ವಂಡಾರು ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News