ರಾ.ಹೆ.ಕಾಮಗಾರಿ ವೇಳೆ ಗುತ್ತಿಗೆದಾರ, ಇಂಜಿನಿಯರ್‌ಗಳ ನಿರ್ಲಕ್ಷ್ಯದಿಂದ ಅಪಘಾತವಾದರೆ ಕ್ರಿಮಿನಲ್ ಮೊಕದ್ದಮೆ: ಉಡುಪಿ ಡಿಸಿ ಎಚ್ಚರಿಕೆ

Update: 2024-05-04 13:56 GMT

ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಗುತ್ತಿಗೆದಾರರು ಅಥವಾ ಅಭಿಯಂತರ ನಿರ್ಲಕ್ಷ್ಯದಿಂದ ರಸ್ತೆ ಅಪಘಾತಗಳು ಸಂಭವಿಸಿದಲ್ಲಿ ಸಂಬಂಧ ಪಟ್ಟ ಅಭಿಯಂತರರ ವಿರುದ್ಧವೂ ಕ್ರಿಮಿನಲ್ ಕೇಸ್‌ಗಳನ್ನು ಹಾಕುವಂತೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಪೊಲೀಸ್ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎಗೆ ಸಂಬಂಧಿಸಿದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಉಡುಪಿ ಹೊರವಲಯದ ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಪ್ರದೇಶಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಬಳಿಕ ಅವರು ಮಾತನಾಡುತಿದ್ದರು.

ಕಾಮಗಾರಿಯ ವೇಳೆ ಸಾರ್ವಜನಿಕರ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಆಗದಂತೆ ಬದಲಿ ಮಾರ್ಗದ ವ್ಯವಸ್ಥೆಯನ್ನು ಕಲ್ಪಿಸಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡಿದರು.

ರಾಷ್ಟ್ರೀಯ ಹೆದ್ದಾರಿ 66ರ ಸಂತೆಕಟ್ಟೆ ಅಂಡರ್‌ಪಾಸ್ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದರಿಂದ ಸ್ಥಳೀಯ ಸಾರ್ವಜನಿಕರಿಗೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ ಎಂಬ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಅಲ್ಲದೇ ಇಲ್ಲಿ ಆಗಾಗ ವಾಹನ ಅಪಘಾತ ಪ್ರಕರಣಗಳು ಸಂಭವಿಸುತ್ತಿರುವ ಬಗ್ಗೆ ವರದಿಗಳು ಬರುತ್ತಿವೆ. ಇಂಥ ಘಟನೆಗಳು ಸಂಭವಿಸದಂತೆ ಇವುಗಳ ನಿವಾರಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಬದಲೀ ವ್ಯವಸ್ಥೆಗಳನ್ನು ಮಾಡುವುದರ ಮೂಲಕ ಜನಸಾಮಾನ್ಯರಿಗೆ ಉಂಟಾಗುವ ತೊಂದರೆಗಳನ್ನು ಕೂಡಲೇ ನಿವಾರಿಸಬೇಕು ಎಂದು ಅವರು ಅಭಿಯಂತರರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಅಂಡರ್‌ಪಾಸ್ ಕಾಮಗಾರಿಯಿಂದ ದಿನನಿತ್ಯದ ವ್ಯವಹಾರಗಳಿಗೆ ಹಾಗೂ ಶಾಲೆಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ರಸ್ತೆ ದಾಟಲು ಕಿಲೋಮೀಟರ್‌ಗಳ ಉದ್ದಕ್ಕೆ ನಡೆದುಕೊಂಡು ಹೋಗುವ ಅನಿವಾರ್ಯತೆ ಉಂಟಾಗಿದೆ. ಪಾದಚಾರಿಗಳು ರಸ್ತೆ ದಾಟಲು ತಾತ್ಕಾಲಿಕ ಮೇಲ್ಸೇತುವೆಯನ್ನು ನಿರ್ಮಾಣ ಮಾಡಲು ಕ್ರಮಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ವಾಹನಗಳು ಯಾವ ಮಾರ್ಗದಲ್ಲಿ ಚಲಿಸಬೇಕು, ಅವುಗಳ ವೇಗ ಎಷ್ಟಿರಬೇಕು, ಕಾಮಗಾರಿ ನಡೆಯುತ್ತಿರುವ ಬಗ್ಗೆ ಮಾಹಿತಿ ನೀಡುವ ಎಚ್ಚರಿಕೆಯ ಸೂಚನಾ ಫಲಕಗಳನ್ನು ಎದ್ದು ಕಾಣುವ ರೀತಿಯಲ್ಲಿ ಅಳವಡಿಸಬೇಕು ಎಂದ ಅವರು, ಮುಂದಿನ ತಿಂಗಳಿನಿಂದ ಮುಂಗಾರು ಮಳೆ ಪ್ರಾರಂಭವಾಗುವ ಸಾಧ್ಯತೆಗಳಿದ್ದು, ಈ ಸಂದರ್ಭದಲ್ಲಿ ಕಾಮಗಾರಿಗಳ ಹಿನ್ನೆಲೆಯಲ್ಲಿ ಸಂಚಾರಕ್ಕೆ ವ್ಯತ್ಯಯವಾಗುವ ಸಾಧ್ಯತೆ ಇದೆ. ಹೀಗಾಗದಂತೆ ಶೀಘ್ರದಲ್ಲಿಯೇ ಅಗತ್ಯವಿರುವ ಕಾಮಗಾರಿ ಗಳನ್ನು ಸಮರೋಪಾದಿಯಲ್ಲಿ ಕೈಗೊಂಡು ಮುಗಿಸಬೇಕು ಎಂದು ಹೇಳಿದರು.



 


Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News