ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಉಡುಪಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ
ಉಡುಪಿ, ಜೂ.26: ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬುಧವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪೊಲೀಸರು ತಡೆದರು.
ವಾಲ್ಮೀಕಿ ನಿಗಮದ 187 ಕೋಟಿ ರೂ. ಹಣವನ್ನು ದುರ್ಬಳಕೆ ಮಾಡಿರುವ ಕ್ರಮವನ್ನು ಖಂಡಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಇದಕ್ಕೂ ಮೊದಲು ರೈತಾಪಿ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಉಡುಪಿ ಜಿಲ್ಲಾ ಬಿಜೆಪಿ ಹಾಗೂ ಜಿಲ್ಲಾ ರೈತ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಳಿಕ ಮಳೆಯ ಮಧ್ಯೆಯೂ ಬಿಜೆಪಿ ಮುಖಂಡರು ಹಾಗೂ ಕಾರ್ಯ ಕರ್ತರು ಜಿಲ್ಲಾಧಿಕಾರಿ ಕಚೇರಿಯ ಗೇಟು ಮೂಲಕ ಪ್ರವೇಶಿಸಿ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಪೊಲೀಸರು ಅವರನ್ನು ಗೇಟ್ ನಲ್ಲಿಯೇ ತಡೆದರು. ಈ ವೇಳೆ ಬಿಜೆಪಿ ಮುಖಂಡರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು.
ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ.ನವೀನ್ ಕುಮಾರ್, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಬಿಜೆಪಿ ಮುಖಂಡರಾದ ಮಟ್ಟಾರ್ ರತ್ನಾಕರ್ ಹೆಗ್ಡೆ, ಕುಯಿಲಾಡಿ ಸುರೇಶ್ ನಾಯಕ್, ದಿನಕರ ಶೆಟ್ಟಿ ಹೆರ್ಗ, ರೇಶ್ಮಾ ಉದಯ ಶೆಟ್ಟಿ, ರೈತ ಮೋರ್ಚಾದ ಜಿಲ್ಲಾಧ್ಯಕ್ಷ ಕಮಲಾಕ್ಷ ಹೆಬ್ಬಾರ್ ಮೊದಲಾದವರು ಉಪಸ್ಥಿತರಿದ್ದರು. ಬಳಿಕ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಜಿಲ್ಲಾಧಿಕಾರಿ ಗಳ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.