ಕಲ್ಸಂಕದಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಸಚಿವ ಗಡ್ಕರಿಗೆ ಮನವಿ
ಉಡುಪಿ: ಉಡುಪಿ ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಸಂಕ ಜಂಕ್ಷನ್‌ನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯಿಂದ ಸುಗಮ ಸಂಚಾರಕ್ಕೆ ಪರಿಹಾರ ರೂಪಿಸುವ ನಿಟ್ಟಿನಲ್ಲಿ ರಾಷ್ಟೀಯ ಹೆದ್ದಾರಿ ಇಲಾಖೆಯ ಮೂಲಕ ಫ್ಲೈ ಓವರ್ ನಿರ್ಮಾಣ ಮಾಡುವಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮೂಲಕ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಸಲ್ಲಿಸಿದರು.
ಕಲ್ಸಂಕ ಜಂಕ್ಷನ್, ಉಡುಪಿ ಶ್ರೀಕೃಷ್ಣ ಮಠ, ಮಣಿಪಾಲ, ಅಂಬಾಗಿಲು ಸಂಪರ್ಕಿಸುವ ಕೇಂದ್ರ ಭಾಗವಾಗಿರುವ ಕಾರಣ ವಾಹನ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ರಜಾ ದಿನಗಳಲ್ಲಿ ಈ ಸಮಸ್ಯೆ ಇನ್ನಷ್ಟು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಮೂಲಕ ಫ್ಲೈ ಓವರ್ ನಿರ್ಮಾಣಕ್ಕೆ ಮುಂದಿನ ಸಭೆಯಲ್ಲಿ ನಗರಸಭೆ ಮೂಲಕವೂ ಪ್ರಸ್ತಾವನೆ ಸಲ್ಲಿಸಲಾಗುವುದು. ಈ ಬಗ್ಗೆ ಕೇಂದ್ರ ಸಚಿವರಿಗೆ ಶಿಫಾರಸ್ಸು ಮಾಡುವಂತೆ ಅವರು ಸಂಸದರಿಗೆ ತಿಳಿಸಿದರು.
ಮನವಿಗೆ ಸ್ಪಂದಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಲ್ಸಂಕ ಜಂಕ್ಷನ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣರೊಂದಿಗೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಶೀಘ್ರ ಫ್ಲೈ ಓವರ್ ನಿರ್ಮಾಣಕ್ಕೆ ಮಂಜೂರಾತಿ ನೀಡುವಂತೆ ಮನವಿ ಮಾಡುವುದಾಗಿ ತಿಳಿಸಿದರು.
ಕಲ್ಸಂಕ ಜಂಕ್ಷನ್‌ನಲ್ಲಿ ಅವೈಜ್ಞಾನಿಕ ಕ್ರಮ
ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ ರಸ್ತೆಗೆ ಕಲ್ಸಂಕ ಸರ್ಕಲ್‌ನಲ್ಲಿ ಬ್ಯಾರಿಕೇಡ್ ಅಳವಡಿಸಿ ರಸ್ತೆಯನ್ನು ಮುಚ್ಚಿ ಈ ರಸ್ತೆಯಲ್ಲಿ ಬರುವ ವಾಹನಗಳು ಉಡುಪಿ ನಗರ ಪ್ರವೇಶಿಸಲು ಕಡಿಯಾಳಿ ಭಾಗದಲ್ಲಿ ಅವಕಾಶ ನೀಡಿರುವುದು ಇದೊಂದು ಅವೈಜ್ಞಾನಿಕ ಕ್ರಮವಾಗಿದೆ. ತಕ್ಷಣದಲ್ಲಿ ಮುಚ್ಚಿರುವ ರಸ್ತೆಯನ್ನು ತೆರವುಗೊಳಿಸಿ ಈ ಹಿಂದಿನಂತೆ ಸಂಚಾರ ವ್ಯವಸ್ಥೆಗೆ ಅವಕಾಶ ನೀಡಬೇಕು ಎಂದು ಮಾಜಿ ಶಾಸಕ ಕೆ.ರಘುಪತಿ ಭಟ್ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.
ಉಡುಪಿ ನಗರ ಪ್ರವೇಶಿಸುವ ರಸ್ತೆಗಳ ವಾಹನ ದಟ್ಟಣೆಯನ್ನು ನಿಯಂತ್ರಿಸಲು ರಸ್ತೆಗಳನ್ನು ಮುಚ್ಚುವುದು ಪರಿಹಾರವಲ್ಲ. ಟ್ರಾಫಿಕ್ ಸಿಗ್ನಲ್ ಲೈಟ್ ಅಳವಡಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕಾಗಿದೆ. ಈಗಾಗಲೆ ಟ್ರಾಫಿಕ್ ಸಿಗ್ನಲ್ ಅಳವಡಿಸುವ ಯೋಜನೆಯ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ತಕ್ಷಣದಲ್ಲಿ ಕಲ್ಸಂಕ ಜಂಕ್ಷನ್ ನಲ್ಲಿ ಟ್ರಾಫಿಕ್ ಸಿಗ್ನಲ್ ಲೈಟ್ ಅಳವಡಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.