×
Ad

ಉಡುಪಿ ಜಿಲ್ಲೆಯಲ್ಲಿ ಸದ್ಯ ಕುಡಿಯುವ ನೀರಿನ ಸಮಸ್ಯೆ ಎಲ್ಲೂ ಕಂಡುಬಂದಿಲ್ಲ: ಜಿಲ್ಲಾಧಿಕಾರಿ ವಿದ್ಯಾಕುಮಾರಿ

Update: 2025-02-03 21:11 IST

ಉಡುಪಿ, ಫೆ.3: ಜಿಲ್ಲೆಯಲ್ಲಿ ಈವರೆಗೆ ಕುಡಿಯುವ ನೀರಿನ ಸಮಸ್ಯೆ ಕುರಿತ ದೂರುಗಳು ಎಲ್ಲಿಂದಲೂ ಕೇಳಿ ಬಂದಿಲ್ಲ. ಒಂದು ವೇಳೆ ದೂರುಗಳಿದ್ದಲ್ಲಿ ತಕ್ಷಣ ಅದನ್ನು ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಜಿಲ್ಲೆಯ ಅನೇಕ ಕಡೆಗಳಲ್ಲಿ ನೀರು ಸರಬರಾಜು ಮಾಡುವ ಪೈಪ್‌ಲೈನ್‌ಗಳು ಒಡೆದುಹೋಗಿರುವ ಕುರಿತು ಮಾಹಿತಿ ಕೇಳಿ ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಅವುಗಳ ದುರಸ್ಥಿ ಕಾರ್ಯವನ್ನು ಕೈಗೊಳ್ಳಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಾದ್ಯಂತ ಪ್ರಸಕ್ತ ಸಾಲಿನ ವಾಡಿಕೆ ಮಳೆಯು 4,535 ಮಿ.ಮೀ. ಆಗಿದ್ದು, ವಾಸ್ತವಿಕವಾಗಿ ಇದುವರೆಗೆ 5261ಮೀ. ಮೀ ನಷ್ಟು ಮಳೆ ಬಿದ್ದಿದೆ. ಈ ಮೂಲಕ ಶೇ.16ರಷ್ಟು ಹೆಚ್ಚು ಮಳೆಯಾಗಿದೆ. ಹೀಗಾಗಿ ಸದ್ಯ ನೀರಿನ ಕೊರತೆ ಆಗುವ ಸಾಧ್ಯತೆಗಳಿಲ್ಲದಿದ್ದರೂ ಸಹ, ಅಂತರ್ಜಲ ಹಠಾತ್ತನೆ ಕುಸಿತಗೊಂಡು ಜಿಲ್ಲೆಯ ಯಾವುದೇ ಗ್ರಾಮ ಹಾಗೂ ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆ ಉಂಟಾಗಬಹುದು. ಈ ಬಗ್ಗೆ ಗಮನಹರಿಸುವುದರೊಂದಿಗೆ ಹತ್ತಿರದಲ್ಲಿ ಲಭ್ಯವಿರುವ ನೀರಿನ ಮೂಲ ಗಳನ್ನು ಸಮರ್ಪಕವಾಗಿ ಬಳಸಿ ಕೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಂಬರುವ ಬೇಸಿಗೆ ದಿನಗಳಲ್ಲಿ ಜನಸಾಮಾನ್ಯರಿಗೆ ಹಾಗೂ ಜಾನುವಾರು ಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು

ಪರಿಹಾರ ಹಣ: ಕಳೆದ ಸಾಲಿನಲ್ಲಿ ಉಂಟಾದ ಮನೆ ಹಾನಿ, ಮಾನವ ಜೀವ ಹಾನಿ, ಜಾನುವಾರು ಜೀವ ಹಾನಿ, ಬೆಳೆ ಹಾನಿ ಸೇರಿದಂತೆ ವಿವಿಧ ಹಾನಿಯ ಪರಿಹಾರ ಹಣವನ್ನು ಬಾಕಿ ಉಳಿಸಿಕೊಳ್ಳುವಂತಿಲ್ಲ ಎಂದ ಅವರು, ಮಳೆಯಿಂದ ಹಾನಿಯಾದ ಶಾಲಾ ಕಟ್ಟಡ, ಅಂಗನವಾಡಿ ಕಟ್ಟಡ ಹಾಗೂ ರಸ್ತೆ ದುರಸ್ತಿಗೆ ಈಗಾಗಲೇ ಅನುದಾನ ಬಿಡುಗಡೆಯಾಗಿದೆ. ತ್ವರಿತವಾಗಿ ಈ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಜಿಲ್ಲೆಯ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಸಾಕಷ್ಟು ಮೇವನ್ನು ದಾಸ್ತಾನು ಇಟ್ಟುಕೊಳ್ಳುವಂತೆ ತಹಶೀಲ್ದಾರರುಗಳು ನೋಡಿ ಕೊಳ್ಳಬೇಕು. ಎಪ್ರಿಲ್-ಮೇ ತಿಂಗಳಲ್ಲಿ ಮೇವಿನ ಕೊರತೆಯಾಗುವ ಹಿನ್ನೆಲೆ ಯಲ್ಲಿ ಈ ತಿಂಗಳ ಅಂತ್ಯದಿಂದಲೇ ಹಸಿಮೇವನ್ನು ಬೆಳೆಯಲು ಕ್ರಮ ವಹಿಸುವಂತೆ ಕೃಷಿ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ತಾಲೂಕು ಮಟ್ಟದ ಟಾಸ್ಕ್‌ ಫೋರ್ಸ್ ಸಮಿತಿಗಳು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುವುದರೊಂದಿಗೆ ಬರ ನಿರ್ವಹಣೆ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಜನಸಾಮಾನ್ಯರಿಗೆ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರು ಗಳಿಗೆ ಮೇವಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು. ಪ್ರತಿ ಗ್ರಾಮಪಂಚಾಯತ್‌ನಲ್ಲೂ ಸಹ ಟಾಸ್ಕ್‌ಫೋರ್ಸ್ ಸಮಿತಿಗಳನ್ನು ರಚಿಸಿ ಬರ ಪರಿಸ್ಥಿತಿಯನ್ನು ನಿಭಾಯಿಸಲು ಸನ್ನದ್ದರಾಗಿರಬೇಕು ಎಂದರು.

ಜಿಲ್ಲೆಯ ಅಂತರ್ಜಲ ಮಟ್ಟ ಕಡಿಮೆಯಾಗುವುದನ್ನು ತಡೆಗಟ್ಟುವ ಸಲುವಾಗಿ ಹಾಗೂ ಸಮುದ್ರದ ಉಪ್ಪು ನೀರು ನದಿಯ ಸಿಹಿನೀರಿಗೆ ಸೇರದಂತೆ ಈಗಾಗಲೇ ಜಿಲ್ಲೆಯಲ್ಲಿರುವ ಎಲ್ಲಾ 666 ಕಿಂಡಿ ಆಣೆಕಟ್ಟುಗಳಿಗೆ ಹಲಗೆಗಳನ್ನು ಅಳವಡಿಸಲಾ ಗಿದೆ. ಬತ್ತಿಹೋಗಿರುವ ಸರಕಾರಿ ಬಾವಿಗಳಿಗೂ ಸಹ ಮಳೆ ನೀರಿನ ಕೊಯ್ಲನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಮಂಗಳವಾರ ಅಣಕು ಪ್ರದರ್ಶನ: ಮಳೆಗಾಲದಲ್ಲಿ ಪ್ರವಾಹ ಸೇರಿದಂತೆ ಉಂಟಾಗುವ ತುರ್ತು ಪರಿಸ್ಥಿತಿಯನ್ನು ನಿಭಾಯಿಸುವ ಕುರಿತು ಎನ್‌ಡಿಆರ್‌ಎಫ್ ತಂಡದಿಂದ ಮಂಗಳವಾರ ಮಾಕ್‌ಡ್ರಿಲ್ (ಅಣುಕು ಪ್ರದರ್ಶನ)ನ್ನು ಉದ್ಯಾವರ ನದಿಯ ಬಳಿಯಲ್ಲಿ ಬೆಳಗ್ಗೆ 9:30ಕ್ಕೆ ಆಯೋಜಿಸಲಾಗಿದೆ. ಈ ಅಣುಕು ಪ್ರದರ್ಶನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸುವುದರೊಂದಿಗೆ, ಸ್ವಯಂ ರಕ್ಷಣೆ ಮಾಡುವ ಕುರಿತು ಮಾಹಿತಿ ಪಡೆದುಕೊಳ್ಳಬಹುದು ಎಂದರು.

ಜಿಲ್ಲಾ ವಿಪತ್ತು ನಿರ್ವಹಣಾ ಕ್ರಮಕ್ಕೆ ಈಗಾಗಲೇ ಪಿ.ಡಿ ಖಾತೆಯಲ್ಲಿ 10.15 ಕೋಟಿರೂ.ಗಳ ಅನುದಾನ ಲಭ್ಯವಿದೆ. ಈಗಾಗಲೇ ತಾಲೂಕು ಮಟ್ಟದ ತಹಶೀಲ್ದಾರರ ವಿಪತ್ತು ಪಿ.ಡಿ ಖಾತೆಯಲ್ಲಿ 1.53 ಕೋಟಿ ರೂ. ಅನುದಾನ ಲಭ್ಯವಿದ್ದು, ಬರ ನಿರ್ವಹಣೆಗೆ ಯಾವುದೇ ಕೊರತೆ ಇರುವುದಿಲ್ಲ ಎಂದರು.

ಸಭೆಯಲ್ಲಿ ಪ್ರಭಾರ ಅಪರ ಜಿಲ್ಲಾಧಿಕಾರಿ ನಾಗರಾಜ್ ನಾಯಕ್, ಸಹಾಯಕ ಕಮಿಷನರ್ ಮಹೇಶ್ಚಂದ್ರ, ಪೌರಾಯುಕ್ತ ಉದಯ್ ಕುಮಾರ್ ಶೆಟ್ಟಿ, ತಾಲೂಕುಗಳ ತಹಶೀಲ್ದಾರ್‌ಗಳು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿ ಗಳು, ಎನ್‌ಡಿಆರ್‌ಎಫ್ ಅಧಿಕಾರಿಗಳು ಉಪಸ್ಥಿತರಿದ್ದರು.



 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News