×
Ad

ಲಿಂಗ ಸಮಾನತೆಯೇ ‘ಬೇಟಿ ಬಚಾವೋ ಬೇಟಿ ಪಡಾವೋ’ ಗುರಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

Update: 2025-02-15 20:37 IST

ಉಡುಪಿ, ಫೆ.15: ಸಮಾಜದಲ್ಲಿ ಹೆಣ್ಣು ಮಕ್ಕಳ ಬಗ್ಗೆ ಇರುವ ಅಸಮಾನತೆಯನ್ನು ಹೋಗಲಾಡಿಸುವ ಉದ್ಧೇಶದಿಂದಲೇ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯನ್ನು ಕೇಂದ್ರ ಸರಕಾರ ಜಾರಿಗೊಳಿಸಿದೆ. ಈ ಯೋಜನೆ ಎಲ್ಲೆಡೆ ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಕರೆ ನೀಡಿದ್ದಾರೆ.

ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್.ಆಚಾರ್ಯ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ‘ಬೇಟಿ ಬಚಾವೋ ಬೇಟಿ ಪಡಾವೋ’ (ಮಗಳನ್ನು ಉಳಿಸಿ ಮಗಳನ್ನು ಓದಿಸಿ) ಯೋಜನೆ 10 ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಇಂದು ಆಯೋಜಿಸಲಾದ ಹೆಣ್ಣು ಮಕ್ಕಳು ಮತ್ತು ಮಹಿಳೆ ಯರಿಗೆ ಪೂರಕವಾದ ಕಾನೂನು ಅರಿವು ಮತ್ತು ಜೀತ ಕಾರ್ಮಿಕ ಪದ್ಧತಿ (ರದ್ಧತಿ) ಕಾಯ್ದೆ 1976 ಕುರಿತು ಜಿಲ್ಲಾ ಮಟ್ಟ, ತಾಲೂಕು ಮಟ್ಟ ಹಾಗೂ ಕ್ಷೇತ್ರ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಲಾದ ಜಿಲ್ಲಾಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕೇಂದ್ರ ಸರಕಾರ ಹತ್ತು ವರ್ಷಗಳ ಹಿಂದೆ ಜಾರಿಗೆ ತಂದ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆಯ ಮುಖ್ಯ ಉದ್ದೇಶ ಹೆಣ್ಣು ಭ್ರೂಣ ಹತ್ಯೆಯನ್ನು ತಡೆಗಟ್ಟುವುದು. ಹೆಣ್ಣು ಮಕ್ಕಳಿಗೆ ಉತ್ತಮ ಶಿಕ್ಷಣ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಿ, ಗೌರವಯುತ ಜೀವನ ನಡೆಸು ವಂತೆ ಮಾಡುವುದರೊಂದಿಗೆ ಗಂಡು-ಹೆಣ್ಣು ಸಮತೋಲನ ಕಾಯ್ದು ಕೊಳ್ಳುವು ದಾಗಿದೆ. ಹೀಗಾಗಿ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.

ಸಮಾಜದಲ್ಲಿ ಜೀತ ಪದ್ಧತಿ ಅತ್ಯಂತ ಅಮಾನವೀಯ ಪದ್ಧತಿಯಾಗಿದೆ. ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಜಿಲ್ಲೆಯು ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಭ್ರೂಣಹತ್ಯೆ, ಜೀತಪದ್ಧತಿ, ಮೂಢನಂಬಿಕೆ ಗಳಂತಹ ಪ್ರಕರಣಗಳು ಜಿಲ್ಲೆಯಲ್ಲಿ ಕಂಡುಬಂದಿಲ್ಲ. ಸಾಮಾಜಿಕ ಪಿಡುಗಾದ ಜೀತ ಪದ್ಧತಿಯನ್ನು ನಾಗರಿಕ ಸಮಾಜದಿಂದ ಸಂಪೂರ್ಣ ವಾಗಿ ನಿರ್ಮೂಲನೆ ಮಾಡಲು ಹಾಗೂ ಮನುಷ್ಯನು ಸಮಾಜದಲ್ಲಿ ಗೌರವಯುತವಾಗಿ ಜೀವನ ನಡೆಸಲು ಸಂಬಂಧಪಟ್ಟ ಅನುಷ್ಠಾನಾಧಿಕಾರಿಗಳು ಅಗತ್ಯ ಸಹಕಾರ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಜೀತ ಪದ್ಧತಿ ರದ್ಧತಿ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕು ಮಾರಿ, ಇಂದಿಗೂ ಲಿಂಗಾನು ಪಾತದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಇಳಿಮುಖವಾಗುತ್ತಿದೆ. ಜಿಲ್ಲೆಯಲ್ಲಿ ಸದ್ಯ ಪರಿಸ್ಥಿತಿ ಆಶಾದಾಯಕವಾಗಿದೆ. ಹೆಣ್ಣು ಮಕ್ಕಳು ಹುಟ್ಟುವುದೇ ಬೇಡ ಎಂಬ ಭಾವನೆ ತೊರೆದು ಅವರನ್ನು ಗಂಡು ಮಕ್ಕಳಿಗೆ ಸರಿಸಮಾನವಾಗಿ ಬೆಳೆಸಬೇಕು. ಹೆಣ್ಣು ಮಕ್ಕಳ ಬಗ್ಗೆ ಅನುಕಂಪ ತೋರದೇ ಅವರಿಗೆ ಎಲ್ಲಾ ಕ್ಷೇತ್ರಗಳಲ್ಲೂ ಅವಕಾಶ ನೀಡಿ ಸಮಾನತೆ ಕಲ್ಪಿಸಬೇಕು. ಅದರಲ್ಲೂ ಗ್ರಾಮೀಣ ಹಾಗೂ ತಳ ಸಮುದಾಯದ ಹೆಣ್ಣು ಮಕ್ಕಳು ಸಮಾಜದಲ್ಲಿ ಮುನ್ನೆಲೆಗೆ ಬರಬೇಕು. ಶಿಕ್ಷಣ ದೊರಕಿದ್ದಲ್ಲಿ ಸಮಾನ ಅವಕಾಶ ದೊರಕಲು ಸಾಧ್ಯ ಎಂದರು.

ಜೀತ ಪದ್ಧತಿ ಸಾಮಾಜಿಕ ಅನಿಷ್ಠ ಪದ್ಧತಿಯಾಗಿದ್ದು, ತಳಮಟ್ಟದ ಜನರಿಗೆ ಈ ಬಗ್ಗೆ ಅರಿವು ಮೂಡಿಸುವುದರೊಂದಿಗೆ ಅನಿಷ್ಠ ಪದ್ಧತಿಯನ್ನು ಸಂಪೂರ್ಣ ತೊಲಗಿಸಲು ಕ್ರಮಕೈಗೊಳ್ಳಬೇಕು. ಪಟಾಕಿ ತಯಾರಿಕೆ, ಕಲ್ಲುಕೋರೆ ಸೇರಿದಂತೆ ಅಪಾಯಕಾರಿ ಕೆಲಸದಲ್ಲಿ ಚಿಕ್ಕಮಕ್ಕಳನ್ನು ನಿಯೋಜಿಸುವುದು ಕಾನೂನು ಬಾಹಿರ ಅಪರಾಧವಾಗಿದ್ದು, ಮಕ್ಕಳು ತಮ್ಮ ಬಾಲ್ಯವನ್ನು ಅನುಭವಿಸಲು, ಶಿಕ್ಷಣ ಪಡೆಯಲು ಅವಕಾಶ ಮಾಡಿಕೊಡಬೇಕು ಎಂದರು.

ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ನಿದೇಶಕಿ ನಿರ್ಮಲಾ ಕುಮಾರಿ, ನ್ಯಾಯವಾದಿ ಪ್ರದೀಪ್ ಪಿ.ಜೆ ಹಾಗೂ ಉಪ ಕಾನೂನು ನೆರವು ಅಭಿರಕ್ಷಕ ಶ್ರೀನಿವಾಸ ಉಪಾಧ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಪೊಲೀಸ್ ನಿರೀಕ್ಷಕ ಡಾ.ಡಿ.ಟಿ ಪ್ರಭು, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮ್ಮದ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ದೀಪಾ ಕಾರ್ಯಕ್ರಮ ನಿರೂಪಿಸಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನೆ ವಂದಿಸಿದರು.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News