×
Ad

ರೇಣುಕಾಚಾರ್ಯರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

Update: 2025-03-12 22:11 IST

ಉಡುಪಿ: ರೇಣುಕಾಚಾರ್ಯರ ಜೀವನದ ಮೌಲ್ಯಗಳನ್ನು ಅರಿತುಕೊಂಡು ನಮ್ಮ ಜೀವನದಲ್ಲಿ ಅಳವಡಿಸಿ ಕೊಂಡರೆ ಸುತ್ತಮತ್ತಲಿನ ಸಮಾಜವನ್ನು ಸಮೃದ್ದಿಯತ್ತ ಅಥವಾ ಅಭಿವೃದ್ಧಿಯತ್ತ ಕೊಂಡೊಯ್ಯ ಬಹುದು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದ್ದಾರೆ.

ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಾಲೇಜಿನ ಕನ್ನಡ ವಿಭಾಗಗಳ ಸಂಯುಕ್ತ ಆಶ್ರಯಲ್ಲಿ ಬುಧವಾರ ನಡೆದ ಶ್ರೀರೇಣುಕಾಚಾರ್ಯ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ರೇಣುಕಾಚಾರ್ಯರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ ಮಾತನಾಡುತ್ತಿದ್ದರು.

ಪ್ರಸ್ತುತ ಸಮಾಜದಲ್ಲಿ ನಾವು ನಮ್ಮಷ್ಟಕ್ಕೆ ಬದುಕದೇ ಪರರ ಒಳಿತಿಗಾಗಿ ಮತ್ತು ಅಭಿವೃದ್ಧಿಗಾಗಿ ಜೀವಿ ಸುವ ಮನೋಭಾವ ಹೊಂದಿರಬೇಕು ಹಾಗೂ ಜೀವನದಲ್ಲಿ ಬರುವ ಕಷ್ಟಗಳನ್ನು ಎದುರಿಸುವ ಮನೋಸ್ಥೈರ್ಯ ಬೆಳೆಸಿ ಕೊಳ್ಳಬೇಕು. ಹನ್ನೆರಡನೇ ಶತಮಾನದಲ್ಲಿ ಶರಣರು ಭಕ್ತಿ ಮತ್ತು ಜ್ಞಾನದ ಸಂಪಾದನೆಗಾಗಿ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಸಾಗಿ ತಮ್ಮ ವಿಚಾರಗಳ ಮೂಲಕ ಮತ್ತು ವಚನಗಳ ಮೂಲಕ ಜನರಿಗೆ ಜೀವನದ ಸಂದೇಶವನ್ನು ಸಾರುತ್ತಿದ್ದರು ಎಂದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ನಿರಂಜನ ಯು.ಸಿ, ರೇಣುಕಾಚಾರ್ಯರು ನಡೆದು ಬಂದ ಜೀವನದ ಹಾದಿಯನ್ನು, ಅವರ ವ್ಯಕ್ತಿತ್ವವನ್ನು ಮತ್ತು ಸಮಾಜಕ್ಕೆ ಅವರು ನೀಡಿದ ಕೊಡುಗೆಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ನಿತ್ಯಾನಂದ ವಿ.ಗಾಂವ್ಕರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ವೀರಶೈವ ಸಮುದಾಯದ ಸದಸ್ಯರು, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಕನ್ನಡ ವಿಭಾಗದ ಉಪನ್ಯಾಸಕಿ ಸರಿತಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ರತ್ನಮಾಲಾ ವಂದಿಸಿದರು.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News