×
Ad

ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ- ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

Update: 2025-03-14 18:20 IST

ಉಡುಪಿ, ಮಾ.14: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಉಡುಪಿ ಜಿಲ್ಲಾ ಶಾಖೆಯ ಸಂಯುಕ್ತ ಆಶ್ರಯದಲ್ಲಿ ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಎರಡು ದಿನಗಳ ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗೆ ಇಂದು ಶುಕ್ರವಾರ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಮಾತನಾಡಿ, ಒತ್ತಡದಿಂದ ಕೆಲಸ ಮಾಡುವ ಸರಕಾರಿ ನೌಕರರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದು ಇಂದಿನ ಅಗತ್ಯ. ಇದರಿಂದ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯ ಕಾಪಾಡಬಹುದು. ಪ್ರತಿಯೊಬ್ಬರು ಕ್ರೀಡಾ ಸ್ಪೂರ್ತಿ ಯನ್ನು ಬೆಳೆಸಿಕೊಳ್ಳಬಹುದು ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಉಡುಪಿ ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಪರಸ್ಪರ ಪರಿಚಯವಾಗಿ ಸ್ನೇಹವನ್ನು ಬೆಳೆಸಿಕೊಳ್ಳಬಹುದು. ಇದರಿಂದ ಸರಕಾರಿ ನೌಕರರ ವಲಯದಲ್ಲಿ ಸೌಹಾರ್ದ ವಾತಾವರಣ ನಿರ್ಮಿಸಬಹುದಾಗಿದೆ ಎಂದು ಅಭಿಪ್ರಾಯ ಪಟ್ಟರು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಉಡುಪಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಆನಂದ ಜತ್ತನ್ನ, ಕಾರ್ಕಳ ತಾಲೂಕು ಅಧ್ಯಕ್ಷ ಬಾಲಕೃಷ್ಣ, ಕುಂದಾಪುರ ತಾಲೂಕು ಅಧ್ಯಕ್ಷ ಡಾ.ನಾಗೇಶ್, ಬೈಂದೂರು ಅಧ್ಯಕ್ಷ ಶೇಖರ ಪೂಜಾರಿ, ಕಾಪು ಅಧ್ಯಕ್ಷ ಬಸವರಾಜ್, ಹೆಬ್ರಿ ಅಧ್ಯಕ್ಷ ತಹಶೀಲ್ದಾರ್ ಪ್ರಸಾದ್, ಕ್ರೀಡಾ ಕಾರ್ಯದರ್ಶಿ ದಿವಾಕರ ನಾಯ್ಕ್ ಹಾಗೂ ದೀಪಾ ಉಪಸ್ಥಿತರಿದ್ದರು.

ಸಂಘದ ಉಡುಪಿ ಜಿಲ್ಲಾಧ್ಯಕ್ಷ ದಿನಕರ ಶೆಟ್ಟಿ ಅಂಪಾರು ಸ್ವಾಗತಿಸಿದರು. ಕೋಶಾಧಿಕಾರಿ ದಯಾನಂದ ವಂದಿಸಿದರು. ಸತೀಶ್ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News