×
Ad

ಕ್ಷಣಿಕ ಸುಖಕ್ಕಾಗಿ ದುಶ್ಚಟಗಳಿಗೆ ಬಲಿಯಾಗಬೇಡಿ: ಯುವಜನತೆಗೆ ಉಡುಪಿ ಡಿಸಿ ಕರೆ

Update: 2025-03-14 20:15 IST

ಉಡುಪಿ, ಮಾ.14: ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುವುದರ ಜೊತೆಗೆ, ಮಾರಣಾಂತಿಕ ಕಾಯಿಲೆಗೂ ಬಲಿಯಾಗುತ್ತಾರೆ. ಇವುಗಳಿಂದ ದೂರವಿದ್ದು, ಉತ್ತಮ ಆರೋಗ್ಯವನ್ನು ಹೊಂದಬೇಕು ಎಂದು ಡಿಸಿ ಡಾ.ಕೆ.ವಿದ್ಯಾಕುಮಾರಿ ಅವರು ವಿದ್ಯಾರ್ಥಿಗಳು ಸೇರಿದಂತೆ ಯುವಜನತೆಗೆ ಕರೆ ನೀಡಿದ್ದಾರೆ.

ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಹಾಗೂ ಯುವ ರೆಡ್‌ಕ್ರಾಸ್ ಘಟಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಹಯೋಗದಲ್ಲಿ ಶುಕ್ರವಾರ ನಡೆದ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಯುವಜನರು ಅರಿವಿಲ್ಲದೆ ಕ್ಷಣಿಕ ಸುಖಕ್ಕಾಗಿ ಮದ್ಯ ಅಥವಾ ಮಾದಕ ವಸ್ತುಗಳಿಗೆ ಬಲಿಯಾಗಿ ಅವುಗಳ ಸುಳಿಯಿಂದ ಹೊರಬರಲಾಗದೇ ಶಿಕ್ಷಣದಿಂದ ವಂಚಿತರಾಗುವುದರ ಜೊತೆಗೆ ತಮ್ಮ ಭವ್ಯ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಾರೆ. ಜೊತೆಗೆ ಸಮಾಜದಲ್ಲಿ ತಲೆ ಎತ್ತಿ ಓಡಾಡದ ಹಾಗೆ ಮಾಡಿಕೊಳ್ಳುತ್ತಾರೆ. ಇದಕ್ಕೆ ಯಾರೊಬ್ಬರೂ ಆಸ್ಪದ ನೀಡಬಾರದು ಎಂದರು.

ಯುವಜನರು ತಮ್ಮ ಭವಿಷ್ಯದ ಬದುಕಿನ ಬಗ್ಗೆ ಚಿಂತಿಸಿ, ಅದನ್ನು ಸಾಧಿಸುವ ದಾರಿಯಲ್ಲಿ ಸಾಗಬೇಕು. ಯಾರೊಬ್ಬರ ಪ್ರೇರಣೆಗಳಿಗೆ ಬಲಿಯಾಗಿ ದುಶ್ಚಟಗಳಿಗೆ ವ್ಯಸನರಾಗಬಾರದು. ಮದ್ಯ ಹಾಗೂ ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯ ಹದಗೆಡುವುದರ ಜೊತೆಗೆ ಹೃದಯರೋಗ, ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಗಳು ಉಂಟಾಗಿ ಅಕಾಲಿಕ ಮರಣದ ಸಾಧ್ಯತೆಗಳೂ ಇರುತ್ತವೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಯ ಮಾನಸಿಕ ಆರೋಗ್ಯ, ಮನೋಭಾವನೆ, ಚಿಂತನೆ ಅವರ ಹಿಡಿತದಲ್ಲಿ ರುವುದಿಲ್ಲ. ಇಂಥ ವ್ಯಕ್ತಿಗಳ ಕುಟುಂಬದ ಆರ್ಥಿಕ ಪರಿಸ್ಥಿತಿ ಹದಗೆಡುವು ದರೊಂದಿಗೆ ಸಮಾಜದಲ್ಲಿ ಗೌರವ ವನ್ನೂ ಕಳೆದುಕೊಳ್ಳುತ್ತಾರೆ. ವಿವಿಧ ರೀತಿಯ ದೈಹಿಕ ಸಮಸ್ಯೆಗಳಿಗೂ ತುತ್ತಾಗುತ್ತಾರೆ ಎಂದು ಎಚ್ಚರಿಸಿದರು.

ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಮನೋವೈದ್ಯ ಡಾ. ವಾಸುದೇವ್ ವಿಶೇಷ ಉಪನ್ಯಾಸ ನೀಡಿ ಮಾತ ನಾಡಿ, ದುಶ್ಚಟಗಳು ಒಂದು ರೀತಿಯ ಕಾಯಿಲೆ ಯಾಗಿದ್ದು, ಸಾಮಾಜಿಕ ವ್ಯವಸ್ಥೆ, ಕುಟುಂಬದ ಸಮಸ್ಯೆ, ಒತ್ತಡಗಳು, ಹದಿಹರೆಯದಲ್ಲಿ ದೇಹದಲ್ಲಿ ಆಗುವ ಬದಲಾವಣೆ, ಖಿನ್ನತೆಯಿಂದ ಹೊರಬರಲು, ನಿರು ದ್ಯೋಗ ಸಮಸ್ಯೆ ಸೇರಿದಂತೆ ವಿವಿಧ ಕಾರಣಗಳಿಂದ ಇಂದಿನ ಯುವಪೀಳಿಗೆ ದುಶ್ಚಟಗಳಿಗೆ ದಾಸರಾ ಗುತ್ತಾರೆ. ವ್ಯಸನಕ್ಕೆ ಒಳಗಾದ ವರನ್ನು ದೂರದೇ ಅವರನ್ನು ಉತ್ತಮ ನಾಗರಿಕರನ್ನಾಗಿ ಮಾಡಲು ಪ್ರಯತ್ನಿಸಬೇಕು ಎಂದರು.

ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ ರಾಮರಾವ್ ಮಾತನಾಡಿ, ಯುವಪೀಳಿಗೆ ಡ್ರಗ್ಸ್, ಆಲ್ಕೋ ಹಾಲ್ ಸೇರಿದಂತೆ ಯಾವುದೇ ಮಾದಕ ವಸ್ತುಗಳ ವ್ಯಸನಿಗಳಾಗಬಾರದು. ಇದು ಅವರ ಹಾಗೂ ಕುಟುಂಬದ ಬದುಕನ್ನು ಹಾಳು ಮಾಡುತ್ತದೆ. ದುಶ್ಚಟಗಳಿಗೆ ಬಲಿಯಾಗದೇ ಉತ್ತಮ ಸಮಾಜ ನಿರ್ಮಾಣದತ್ತ ಹೆಜ್ಜೆ ಇಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ನಿತ್ಯಾನಂದ ವಿ. ಗಾಂವಕರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಗಿರೀಶ್ ನಾವಡ ಹಾಗೂ ತಂಡ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ಪರಿಣಾಮಗಳ ಕುರಿತು ಸಂಗೀತ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್‌ಕ್ರಾಸ್ ಘಟಕದ ಸಂಚಾಲಕ ಪ್ರಶಾಂತ್ ಎನ್ ಕಾರ್ಯಕ್ರಮ ನಿರೂಪಿಸಿದರು. ವಾರ್ತಾಇಲಾಖೆಯ ಸುಚಿತ್ರಾ ವಂದಿಸಿದರು.





 


 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News