ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಲಸಿಕೆ ಹಾಕಿಸಿ: ಎಡಿಸಿ
ಉಡುಪಿ: ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸಲು ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ಮಕ್ಕಳಿಗೆ ನೀಡುವುದು ಅತ್ಯಗತ್ಯ. ಈ ಮೂಲಕ ಅವರ ಆರೋಗ್ಯ ರಕ್ಷಣೆ ಮಾಡಬೇಕು ಎಂದು ಉಡುಪಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದ್ದಾರೆ.
ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲೆ ರಾಷ್ಟ್ರೀಯ ಆರೋಗ್ಯ ಅಭಿಯಾನಗಳ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಡೆದ ವಿಶ್ವ ಲಸಿಕಾ ವಾರದ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿರುವ ಶೂನ್ಯ ಡೋಸ್ ಮಕ್ಕಳು, ದಡಾರ ರುಬೆಲ್ಲಾ ಲಸಿಕೆ ತಪ್ಪಿ ಹೋದ ಮಕ್ಕಳು ಅಥವಾ ಲಸಿಕೆಯಿಂದ ವಂಚಿತರಾದ ಎಲ್ಲಾ ಮಕ್ಕಳು ಈ ಲಸಿಕಾ ಸಪ್ತಾಹದ ಪ್ರಯೋಜನವನ್ನು ಪಡೆದುಕೊಂಡು ಲಸಿಕೆ ಹಾಕಿಸಿ ಕೊಳ್ಳಬೇಕು. ಇಲಾಖೆಯ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುವ ಮೂಲಕ ಯಾವುದೇ ಒಂದು ಮಗುವೂ ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರ ಮಕ್ಕಳನ್ನು ಗುರುತಿಸಿ ಲಸಿಕೆ ನೀಡಬೇಕು. ಪೋಷಕರು ತಮ್ಮ ಮಕ್ಕಳಿಗೆ ಲಸಿಕೆಯನ್ನು ಹಾಕಿಸುವ ಮೂಲಕ ದಡಾರ, ರುಬೆಲ್ಲಾದಂಥ ರೋಗದ ನಿರ್ಮೂಲನೆ ಸಾಧಿಸಲು ನೆರವಾಗಬೇಕು ಎಂದರು.
ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ ಜಿ ಹುಬ್ಬಳಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಜೋತ್ಸ್ನಾ ಬಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ ಉಪಾಧ್ಯಾಯ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಾತ್ವಿಕ್ ಹಾಗೂ ಇತರರು ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್.ಹೆಚ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಆರೋಗ್ಯಾ ನಿರೀಕ್ಷಣಾಧಿಕಾರಿ ಸತೀಶ್ ರಾವ್ ವಂದಿಸಿದರು.