×
Ad

ಸಂತ, ಶರಣರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ದಾಟಿಸಿ: ಎಡಿಸಿ ಅಬೀದ್ ಗದ್ಯಾಳ

Update: 2025-05-10 19:37 IST

ಉಡುಪಿ, ಮೇ 10: ಸಮಾಜದ ಏಳಿಗೆಗೆ, ಬೆಳವಣಿಗೆಗೆ ತಮ್ಮನ್ನು ತಾವು ತೊಡಗಿಸಿಕೊಂಡ ನಾಡಿನ ಎಲ್ಲಾ ಸಂತರು, ಶರಣರು ಹಾಗೂ ಮಹಾನ್ ವ್ಯಕ್ತಿಗಳು ಸಮಾಜದ ಆಸ್ತಿ. ಅವರ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಅವುಗಳನ್ನು ಮುಂದಿನ ಪೀಳಿಗೆಗೆ ಪಸರಿಸುವ ಕಾರ್ಯ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದ್ದಾರೆ.

ಶನಿವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡುತಿದ್ದರು.

ಹೇಮರೆಡ್ಡಿ ಮಲ್ಲಮ್ಮಳ ವಚನಗಳ ಸಾರ, ಧರ್ಮ ನಿಷ್ಠೆ, ಧಾರ್ಮಿಕ ಭಾವನೆಯನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಅನುಸರಿಸಬೇಕಾಗಿದೆ ಎಂದವರು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನಕರ ಹೇರೂರು, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜೀವನದಲ್ಲಿ ಬಂದ ಕಷ್ಟಗಳನ್ನು ದೇವರ ಸ್ಮರಣೆಯ ಮೂಲಕ ಎದುರಿಸಿ ಸಾಧನೆ ಮಾಡುವ ಮೂಲಕ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದಾರೆ ಎಂದರು.

ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಮುಖ್ಯಸ್ಥೆ ರತ್ನಮಾಲ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ದಬಸಯ್ಯ ಚಿಕ್ಕಮಠ, ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷ ಪ್ರಕಾಶ್ ಸಜ್ಜನ್, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಹೇಮರೆಡ್ಡಿ ಮಲ್ಲಮ್ಮ ಅಭಿಮಾನಿ ಬಳಗದ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತ ನಾಡಿ ಸ್ವಾಗತಿಸಿದರೆ, ಇಲಾಖೆಯ ವರ್ಷಾ ಬಿ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.



 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News